ಬೆಂಗಳೂರು: ಮುಂದಿನ ವರ್ಷ ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆ ಸಂಬಂಧ ಈಗಿನಿಂದಲೇ ಸಿದ್ಧತೆಗಳನ್ನು ನಡೆಸುವಂತೆ ರಾಜ್ಯದ ಬಿಜೆಪಿ ನಾಯಕರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಸೂಚನೆ ನೀಡಿದ್ದಾರೆ.
ಖಾಸಗಿ ಕಾರ್ಯಕ್ರಮ ನಿಮಿತ್ತ ಬೆಂಗಳೂರಿಗೆ ಆಗಮಿಸಿರುವ ಅಮಿತ್ ಶಾ ಸಿಕ್ಕ ಅಲ್ಪಾವಧಿಯಲ್ಲೇ ಹಲವು ಸುತ್ತಿನ ಸಭೆಗಳನ್ನು ನಡೆಸಿದ್ದಾರೆ. ರಾಜ್ಯ ಬಿಜೆಪಿಯ ಪ್ರಮುಖ ನಿಯೋಗವೊಂದು ಬೆಳಗ್ಗೆ ಅಮಿತ್ ಶಾ ಅವರು ತಂಗಿದ್ದ ಹೋಟೆಲ್‌ಗೆ ಭೇಟಿ ನೀಡಿ ಮಾತುಕತೆ ನಡೆಸಿತು.
ಸಿಎಂ ಬಸವರಾಜ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ರಾಜ್ಯ ಬಿಜೆಪಿ ಸಂಘಟನಾ ಕಾರ್ಯದರ್ಶಿ ರಾಜೇಶ್ ಕುಂತೂರು, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಹಾಗು ನಿರ್ಮಲಾ ಕುಮಾರ್ ಸುರಾನಾ ಅವರು ಅಮಿತ್ ಅವರನ್ನು ಭೇಟಿಯಾದರು.
ಪ್ರಸ್ತುತ ರಾಜ್ಯದ ರಾಜಕೀಯ ಸ್ಥಿತಿಗತಿ, ಸಿದ್ದರಾಮೋತ್ಸವದ ಪರಿಣಾಮಗಳು ಸೇರಿದಂತೆ ಹಲವು ವಿಚಾರಗಳ ಬಗ್ಗೆ ಅಮಿತ್ ಶಾ ಅಭಿಪ್ರಾಯ ಪಡೆದುಕೊಂಡರೆನ್ನಲಾಗಿದೆ.
2023 ವಿಧಾನ ಸಭಾ ಚುನಾವಣೆಗೆ ಪೂರ್ಣ ಪ್ರಮಾಣದಲ್ಲಿ ಸಿದ್ಧವಾಗುವಂತೆ ಸೂಚಿಸಿದ ಅವರು, ಹಳೆ ಮೈಸೂರು ಭಾಗದಲ್ಲಿ ಪಕ್ಷವನ್ನು ಇನ್ನಷ್ಟು ಗಟ್ಟಿಗೊಳಿಸುವ ಬಗ್ಗೆ ರಾಜ್ಯ ನಾಯಕರಿಗೆ ಆದೇಶ ನೀಡಿದರು.
ರಾಜ್ಯದಲ್ಲಿ ಇತ್ತೀಚೆಗೆ ಸಂಭವಿಸಿದ ಹಿಂದು ಯುವಕರ ಕೊಲೆ ಪ್ರಕರಣಗಳ ಬಗ್ಗೆಯೂ ಅಮಿತ್ ಶಾ ಅವರು ಮಾಹಿತಿ ಪಡೆದುಕೊಂಡರು ಎಂದು ತಿಳಿದುಬಂದಿದೆ.