ಬೆಂಗಳೂರು: ಗುಜರಾತ್ ಮೂಲದ ಸಹಕಾರಿ ಸಂಸ್ಥೆ ಅಮೂಲ್ ಈಗಾಗಲೆ ವಿವಿಧ ಉತ್ಪನ್ನಗಳನ್ನು ಕರ್ನಾಟಕದ ಮಾರುಕಟ್ಟೆಯಲ್ಲಿ ಹೊಂದಿದ್ದು, ಇದೀಗ ಹಾಲು ಮತ್ತು ಮೊಸರು ಮಾರಾಟಕ್ಕೆ ಮುಂದಾಗಿದೆ. ಕರ್ನಾಟಕ ಹಾಲು ಉತ್ಪಾದಕರ ಒಕ್ಕೂಟದ ನಂದಿನಿ (Nandini) ಬ್ರ್ಯಾಂಡ್‌ಗೆ ಈಗಾಗಲೆ ಅನೇಕ ಖಾಸಗಿ ಬ್ರ್ಯಾಂಡ್‌ಗಳು ಸ್ಪರ್ಧೆ ಒಡ್ಡುತ್ತಿದ್ದು, ಇದೀಗ ಅಮುಲ್ ಸಹ ಸೇರ್ಪಡೆಯಾಗುತ್ತಿದೆ.
ತನ್ನ ಕನ್ನಡ ಟ್ವಿಟರ್ ಖಾತೆಯ ಮೂಲಕ ಈ ಘೋಷಣೆ ಮಾಡಿರುವ ಅಮುಲ್, “ಕಾಯುವಿಕೆ ಇನ್ನೇನು ಮುಗಿದೇ ಹೋಯಿತು. ಬೆಂಗಳೂರಿಗೆ ಶೀಘ್ರದಲ್ಲೇ ಬರಲಿದೆ. ಕ್ವಿಕ್ ಕಾಮರ್ಸ್ ವೇದಿಕೆಗಳಲ್ಲಿ ಶೀಘ್ರದಲ್ಲೇ ಲಭ್ಯವಾಗಲಿದ್ದು, ಹೊಸ ತಾಜಾತನವು ನಿಮಗಾಗಿ ಕಾಯುತ್ತಿದೆ!” ಎಂದು ಅಮುಲ್ ಟ್ವೀಟ್ ಮಾಡಿದೆ.
ಈಗಾಗಲೆ ತಮಿಳುನಾಡು, ಆಂಧ್ರಪ್ರದೇಶ ಮೂಲದ ಖಾಸಗಿ ಸಂಸ್ಥೆಗಳು ನಡೆಸುವ ತಿರುಮಲ, ಆರೋಗ್ಯ, ಡೊಡ್ಲದಂತಹ ಅನೇಕ ಹಾಲಿನ ಉತ್ಪನ್ನಗಳು ಕರ್ನಾಟಕದಲ್ಲಿವೆ. ಮಂಡ್ಯ ಆರ್ಗ್ಯಾನಿಕ್ ರೀತಿಯಲ್ಲಿ ಕರ್ನಾಟಕದ ಖಾಸಗಿ ಸಂಸ್ಥೆಗಳೂ ಹಾಲು ಮಾರಾಟ ಮಾಡುತ್ತಿವೆ.
ಅಮುಲ್ ತನ್ನ ಹಾಲು ಹಾಗೂ ಮೊಸರಿನ ದರವನ್ನೂ ಟ್ವಿಟರ್ ಮೂಲಕ ಘೋಷಿಸಿದೆ. ನಂದಿನಿ ಸಾಮಾನ್ಯ ಹಾಲಿನ ಪ್ರತಿ ಅರ್ಧ ಲೀಟರ್‌ಗೆ 20 ರೂ. ಇದ್ದರೆ ಅಮುಲ್ ಬೆಲೆ 27 ರೂ. ಇದೆ. ನಂದಿನಿ ಸಮೃದ್ಧಿ ಸೇರಿ ಇನ್ನಿತರೆ ಕೆನೆಭರಿತ ಹಾಲು ಪ್ರತಿ ಅರ್ಧ ಲೀಟರ್‌ಗೆ 24 ರೂ. ಇದ್ದರೆ ಅಮುಲ್ ದರ 32 ರೂ. ಇದೆ. ನಂದಿನಿ ಮೊಸರಿನ ಅರ್ಧ ಲೀಟರ್ ಪ್ಯಾಕೆಟ್‌ಗೆ 24 ರೂ. ಇದ್ದರೆ ಅಮುಲ್ 450 ಮಿಲಿ ಲೀಟರ್ ಮೊಸರಿಗೆ 30 ರೂ. ಇದೆ.
ಸಿದ್ದರಾಮಯ್ಯ ಆಕ್ರೋಶ
ಕರ್ನಾಟಕ ಮಾರುಕಟ್ಟೆಗೆ ಅಮುಲ್ ಪ್ರವೇಶಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಫೇಸ್‌ಬುಕ್‌ನಲ್ಲಿ ಬರೆದುಕೊಂಡಿದ್ದಾರೆ.
ಕರ್ನಾಟಕದಲ್ಲಿ ನಮ್ಮ ಹಿರಿಯರು ಕಟ್ಟಿ ಬೆಳೆಸಿದ್ದ ಬ್ಯಾಂಕುಗಳನ್ನು ತಿಂದು ಮುಕ್ಕಿದ್ದಾಯಿತು. ಈಗ ರೈತರ ಪಾಲಿನ ಸಂಜೀವಿನಿಯಾಗಿರುವ ನಂದಿನಿಯನ್ನು ಆಪೋಶನ ತೆಗೆದುಕೊಳ್ಳಲು ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಸಹಕಾರ ಸಚಿವ ಅಮಿತ್ ಶಾ ಸಂಚು ಹೂಡಿದ್ದಾರೆ.
ಕನ್ನಡಿಗರೇ ಎಚ್ಚರ….!! ಕೆಎಂಎಫ್ ಮತ್ತು ಅಮುಲ್ ಸಂಸ್ಥೆಗಳ ವಿಲೀನದ ಬಗ್ಗೆ ಕೇಂದ್ರ ಸಹಕಾರ ಸಚಿವರೂ ಆಗಿರುವ ಅಮಿತ್ ಶಾ ಪ್ರಸ್ತಾಪ ಮಾಡಿದ ದಿನದಿಂದ ರಾಜ್ಯದ ಹೈನು ಉದ್ಯಮಕ್ಕೆ ಗರ ಬಡಿದಿದೆ. ವಿಲೀನದ ಪ್ರಸ್ತಾವಕ್ಕೆ ಕನ್ನಡಿಗರ ತೀವ್ರ ವಿರೋಧದ ಹಿನ್ನೆಲೆಯಲ್ಲಿ ಹಿಂಬಾಗಿಲಿನಿಂದ ಅಮುಲ್ ಪ್ರವೇಶಿಸುತ್ತಿದೆ.
ಕಳೆದ ಕೆಲವು ದಿನಗಳಿಂದ ರಾಜ್ಯದಲ್ಲಿ ನಂದಿನಿ ಹಾಲು ಮತ್ತು ಮೊಸರು ಮಾರುಕಟ್ಟೆಯಲ್ಲಿ ಮಾಯವಾಗುತ್ತಿದೆ. ಇದೇ ವೇಳೆ ಅಮುಲ್ ಉತ್ಪನ್ನಗಳ ಮಾರಾಟ ಭರದಿಂದ ಪ್ರಾರಂಭವಾಗಿದೆ. ಸಚಿವ ಅಮಿತ್ ಶಾ ನೇರ ಉಸ್ತುವಾರಿಯಲ್ಲಿಯೇ ಇವೆಲ್ಲ ನಡೆಯುತ್ತಿದೆ ಎನ್ನುವುದು ನಿಸ್ಸಂಶಯ.
ಗುಜರಾತ್ ಮೂಲದ ಅಮುಲ್ ಹಾಲು ಮತ್ತು ಮೊಸರು ಮಾರಾಟದ ಮೂಲಕ ಕರ್ನಾಟಕದ ಮಾರುಕಟ್ಟೆ ಪ್ರವೇಶಿಸಲು ಹಿಂದೆಯೂ ಪ್ರಯತ್ನಿಸಿತ್ತು. ಅದಕ್ಕೆ ನಾವು ಅವಕಾಶ ಕೊಡಲಿಲ್ಲ. ಈಗ ಬಿಜೆಪಿ ಕೆಂಪುಕಂಬಳಿ ಹಾಸಿ ಸ್ವಾಗತಿಸಿದೆ. ಬಿಜೆಪಿ ಆಡಳಿತಾವಧಿಯಲ್ಲಿ ಕೆಎಂಎಫ್ ನಲ್ಲಿ ಹಾಲಿನ ಸಂಗ್ರಹ ಕಡಿಮೆಯಾಗುತ್ತಿದೆ. ದಿನಕ್ಕೆ 99 ಲಕ್ಷ ಲೀಟರ್ ಹಾಲು ಸಂಗ್ರಹವಾಗಬೇಕಾಗಿದ್ದ ಕಡೆ ಕೇವಲ 71 ಲಕ್ಷ ಲೀಟರ್ ಹಾಲು ಸಂಗ್ರಹವಾಗುತ್ತಿದೆ. ಇದು ಕೆಎಂಎಫ್ ವಿರುದ್ಧದ ಷಡ್ಯಂತ್ರವೇ?
ನಮ್ಮ ಸರ್ಕಾರವು ಹಾಲಿಗೆ ನೀಡುವ ಸಹಾಯಧನವನ್ನು ಲೀಟರಿಗೆ 5 ರೂ.ಗಳಷ್ಟು ಹೆಚ್ಚಿಸಿತ್ತು. ಇದರಿಂದಾಗಿ 2012-13 ರಲ್ಲಿ 45 ಲಕ್ಷ ಲೀಟರ್ ಉತ್ಪಾದನೆಯಾಗುತ್ತಿದ್ದ ಹಾಲಿನ ಪ್ರಮಾಣವು 2017 ರ ವೇಳೆಗೆ 73 ಲಕ್ಷ ಲೀಟರಿಗೆ ಏರಿಕೆಯಾಗಿತ್ತು. ಈಗ ಕಡಿಮೆಯಾಗುತ್ತ ಸಾಗಲು ಕಾರಣವೇನು?
ನಮ್ಮ ಸರ್ಕಾರ ಐದು ವರ್ಷಗಳಲ್ಲಿ 1,356 ಕೋಟಿ ರೂಪಾಯಿಗಳನ್ನು ಹಾಲಿನ ಸಹಾಯಧನಕ್ಕಾಗಿ ರೈತರಿಗೆ ಕೊಟ್ಟಿದ್ದೆವು. ಆದರೆ ಬಿಜೆಪಿ ಸರ್ಕಾರ 2020 -21 ರಲ್ಲಿ 1186 ಕೋಟಿ ಖರ್ಚು ಮಾಡಿದ್ದರೆ 2023-24ಕ್ಕೆ ಕೇವಲ 1200 ಕೋಟಿ ರೂಪಾಯಿಗಳನ್ನು ಬಜೆಟ್ ನಲ್ಲಿ ಒದಗಿಸಿ ರೈತರಿಗೆ ಅನ್ಯಾಯ ಮಾಡಿದೆ.
ಕರ್ನಾಟಕದ ಬಿಜೆಪಿ ನಾಯಕತ್ವ ಎಷ್ಟೊಂದು ದುರ್ಬಲವಾಗಿದೆಯೆಂದರೆ ಒಂದೆಡೆ ಬೆಳಗಾವಿ ಗಡಿಪ್ರದೇಶದಲ್ಲಿ ಮಹಾರಾಷ್ಟ್ರ ಸರ್ಕಾರ ನೇರವಾಗಿ ತನ್ನ ಆಡಳಿತವನ್ನು ಸ್ಥಾಪಿಸಲು ಪ್ರಯತ್ನಿಸುತ್ತಿದೆ. ಇನ್ನೊಂದೆಡೆ ಗುಜರಾತ್ ರಾಜ್ಯ ಅಮುಲ್ ಮೂಲಕ ಇಲ್ಲಿನ ರೈತರನ್ನು ಬೀದಿಗೆ ತಳ್ಳುವ ಪ್ರಯತ್ನ ಮಾಡುತ್ತಿದೆ.
ಹಿಂದಿ ಹೇರಿಕೆಯ ಮೂಲಕ ನಡೆಸುತ್ತಿರುವ ಭಾಷಾದ್ರೋಹ ಮತ್ತು ರಾಜ್ಯದ ಗಡಿಯೊಳಗೆ ಅತಿಕ್ರಮಿಸುವ ಮೂಲಕ ನಡೆಸುತ್ತಿರುವ ನೆಲದ್ರೋಹದ ಜೊತೆಗೆ ಈಗ ಕೆಎಂಎಫ್ ಅನ್ನು ಮುಚ್ಚಿಸುವ ಮೂಲಕ ರೈತದ್ರೋಹ ಮಾಡಲು ಬಿಜೆಪಿ ಸರ್ಕಾರ ಹೊರಟಿದೆ.
ನಾಡಿನ ರೈತರು, ರೈತರ ಹಿತರಕ್ಷಣೆಗಾಗಿ ಕಟ್ಟಿರುವ ಕೆಎಂಎಫ್ ನ ಕಬಳಿಕೆಯ ವಿರುದ್ಧ ಕನ್ನಡಿಗರೆಲ್ಲರೂ ಒಮ್ಮತದಿಂದ ವಿರೋಧಿಸಬೇಕಾಗುತ್ತದೆ. ಅಮುಲ್ ಉತ್ಪನ್ನಗಳನ್ನು ಖರೀದಿಸವುದಿಲ್ಲ ಎಂದು ಕನ್ನಡಿಗರೆಲ್ಲರೂ ಪ್ರತಿಜ್ಞೆ ಮಾಡಬೇಕು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ತಕ್ಷಣ ಮಧ್ಯಪ್ರವೇಶಿಸಿ ಹಿಂಬಾಗಿಲಿನಿಂದ ಪ್ರವೇಶಿಸುತ್ತಿರುವ ಅಮುಲ್ ಸಂಸ್ಥೆಯನ್ನು ತಡೆಯಬೇಕಾಗಿದೆ. ಈ ಸಂಬಂಧ ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಅವರಿಗೆ ರಾಜ್ಯದ ಜನಾಭಿಪ್ರಾಯವನ್ನು ಗಮನಕ್ಕೆ ತಂದು ಈ ದ್ರೋಹ ಚಿಂತನೆಯನ್ನು ನಿಲ್ಲಿಸಬೇಕು ಎಂದಿದ್ದಾರೆ.