ಬೆಂಗಳೂರು: ಮೈಸೂರು, ಕೋಲಾರ ಜಿಲ್ಲೆಗಳ ಅನ್ನಭಾಗ್ಯ ಯೋಜನೆ (Anna Bhagya Scheme) ಫಲಾನುಭವಿಗಳ ಖಾತೆಗೆ ಹಣ ಬಿಡುಗಡೆ ಮಾಡಿದ ಬೆನ್ನಲ್ಲೇ ಮಂಗಳವಾರ 4 ಜಿಲ್ಲೆಗಳ ಫಲಾನುಭವಿಗಳ ಖಾತೆಗೆ ರಾಜ್ಯ ಸರ್ಕಾರದಿಂದ ಹಣ ಬಿಡುಗಡೆ ಮಾಡಲಾಗಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಬೆಳಗಾವಿ, ಯಾದಗಿರಿ ಜಿಲ್ಲೆಗಳಿಗೆ ಆಹಾರ, ನಾಗರಿಕ ಸರಬರಾಜು ಇಲಾಖೆಯಿಂದ 82,45,47,430 ರೂಪಾಯಿ ಬಿಡುಗಡೆ ಮಾಡಲಾಗಿದೆ.
ಇನ್ನು ಮೂರು ದಿನಗಳ ಒಳಗೆ ಬಳ್ಳಾರಿ, ಬೀದರ್, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಕ್ಷಿಣ ಕನ್ನಡ, ದಾವಣಗೆರೆ, ಧಾರವಾಡ, ಗದಗ, ಹಾಸನ, ಕಲ್ಬುರ್ಗಿ, ಕೊಪ್ಪಳ, ವಿಜಯಪುರ ಜಿಲ್ಲೆಗಳಿಗೆ 222,75,72,240 ಕೋಟಿ ರೂಪಾಯಿ ಬಿಡುಗಡೆಯಾಗಲಿದೆ.
ಸೋಮವಾರ ಕೋಲಾರ ಹಾಗೂ ಮೈಸೂರು ಜಿಲ್ಲೆಗಳ ಫಲಾನುಭವಿಗಳ ಖಾತೆಗೆ ನೇರ ನಗದು ವರ್ಗಾವಣೆಗೆ ರಾಜ್ಯ ಸರ್ಕಾರ ಚಾಲನೆ ನೀಡಿತ್ತು. ಇಂದು ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಬೆಳಗಾವಿ, ಯಾದಗಿರಿ ಜಿಲ್ಲೆಗಳಿಗೆ ಹಣ ಬಿಡುಗಡೆ ಮಾಡಲಾಗಿದೆ.
ಇದನ್ನೂ ಓದಿ | Gruha Jyoti Scheme: ಗೃಹಜ್ಯೋತಿಗೆ ಅರ್ಜಿ ಸಲ್ಲಿಸಿದ್ದೀರಾ? ಸ್ವೀಕೃತವಾಗಿದೆಯೋ, ಇಲ್ಲವೋ ಪರಿಶೀಲಿಸಿಕೊಳ್ಳಿ!
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಪ್ರತಿ ಪಡಿತರದಾರನಿಗೆ 10 ಕೆ.ಜಿ ಅಕ್ಕಿ ನೀಡುವುದಾಗಿ ಕೈ ನಾಯಕರು ಘೋಷಣೆ ಮಾಡಿದ್ದರು. ಆದರೆ, ಯೋಜನೆಗೆ ಅಗತ್ಯವಾದಷ್ಟು ಅಕ್ಕಿ ದಾಸ್ತಾನು ಇಲ್ಲದ ಕಾರಣ 5 ಕೆ.ಜಿ ಅಕ್ಕಿ ಹಾಗೂ ಉಳಿದ 5 ಕೆ.ಜಿ ಅಕ್ಕಿ ಬದಲಾಗಿ ಫಲಾನಭವಿಗಳ ಖಾತೆಗೆ 170 ರೂಪಾಯಿ ಹಣ ವರ್ಗಾವಣೆ ಮಾಡಲಾಗುತ್ತಿದೆ. ಹಂತ ಹಂತವಾಗಿ ಉಳಿದ ಜಿಲ್ಲೆಗಳ ಫಲಾನುಭವಿಗಳಿಗೆ ಹಣ ತಲುಪಿಸಲು ರಾಜ್ಯ ಸರ್ಕಾರ ಮುಂದಾಗಿದೆ.