ಬೆಂಗಳೂರು: ಬಿಬಿಎಂಪಿ ಚುನಾವಣೆಯಲ್ಲಿ ಬಿಜೆಪಿ 160ಕ್ಕೂ ಹೆಚ್ಚು ಸ್ಥಾನ ಗೆಲ್ಲಬೇಕೆಂಬ ಗುರಿಯೊಂದಿಗೆ ಪಕ್ಷ ಸಂಘಟನೆ ಮಾಡಲಾಗುತ್ತಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಅಶ್ವತ್ಥನಾರಾಯಣ್ ಹೇಳಿದ್ದಾರೆ.
ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನ ದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದು ಬಿಜೆಪಿಯ ಬೆಂಗಳೂರು ಉತ್ತರ, ದಕ್ಷಿಣ ಮತ್ತು ಬೆಂಗಳೂರು ಕೇಂದ್ರದ ಎಲ್ಲ ಜಿಲ್ಲಾ ಪದಾಧಿಕಾರಿಗಳ, ಮಂಡಲ ಪದಾಧಿಕಾರಿಗಳ ಹಾಗೂ ಬೆಂಗಳೂರು ಮಹಾನಗರ ವ್ಯಾಪ್ತಿಯ ರಾಜ್ಯ ಪದಾಧಿಕಾರಿಗಳ ಪರಿಚಯಾತ್ಮಕ ಸಭೆ ನಡೆಸಲಾಗಿದೆ. ನೂತನ ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ರಾಜೇಶ್ ಜಿ.ವಿ. ಅವರ ಪರಿಚಯ ಕಾರ್ಯವನ್ನು ನೆರವೇರಿಸಲಾಗಿದೆ ಎಂದು ತಿಳಿಸಿದರು.
ಇದನ್ನೂ ಓದಿ | ಮತದಾರರ ಗುರುತಿನ ಚೀಟಿಗೆ ಆಧಾರ್ ಲಿಂಕ್ ಕಡ್ಡಾಯವಲ್ಲ: ರಾಜ್ಯ ಚುನಾವಣಾ ಆಯೋಗ ಸ್ಪಷ್ಟನೆ
ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ರಾಜೇಶ್ ಜಿ.ವಿ. ಮಾತನಾಡಿ, ಪ್ರಾಧಿಕಾರ, ಮಂಡಳಿಗಳಿಗೆ ನೇಮಕದ ಕುರಿತು ಸಭೆಯಲ್ಲಿ ಪ್ರಸ್ತಾಪವಾಗಿದ್ದು, ಈ ಕುರಿತು ಪಕ್ಷ ಮತ್ತು ಸರ್ಕಾರ ತೀರ್ಮಾನ ತೆಗೆದುಕೊಳ್ಳಲಿದೆ ಎಂದು ತಿಳಿಸಿದರು.
ಇದಲ್ಲದೆ, ಸೆ.8ರಂದು ನಡೆಯುವ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರದ ಒಂದು ವರ್ಷದ ಸಾಧನೆ ಮತ್ತು ಬಿಜೆಪಿಯ 3 ವರ್ಷದ ಸಾಧನೆ ಸಂಬಂಧ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಚರ್ಚಿಸಲಾಗಿದೆ ಎಂದರು. ಸರ್ಕಾರದ ಸಾಧನೆ, ಅಭಿವೃದ್ಧಿ ಮತ್ತು ಸಂಘಟನಾತ್ಮಕವಾಗಿ ಬಿಬಿಎಂಪಿ ಚುನಾವಣೆಯನ್ನು ಎದುರಿಸಲು ನಿರ್ಧರಿಸಲಾಗಿದೆ. ಕಾಂಗ್ರೆಸ್‍ನ ಜನವಿರೋಧಿ ನೀತಿಯಿಂದ ಅಭಿವೃದ್ಧಿ ಕುಂಠಿತವಾಗಿದೆ ಎಂದು ತಿಳಿಸಿದರು.
ಸೆ.11 ರಂದು ಬೆಂಗಳೂರಿನಲ್ಲಿ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆ
ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆಯನ್ನು ಸೆ.11ರಂದು ನಗರದ “ಅರಮನೆ ಮೈದಾನ”ದಲ್ಲಿ ಪಕ್ಷದ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್‍ಕುಮಾರ್ ಕಟೀಲ್ ಅವರ ನೇತೃತ್ವದಲ್ಲಿ ನಡೆಯಲಿದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ನಿರ್ಮಲ್ ಕುಮಾರ್ ಸುರಾನಾ ತಿಳಿಸಿದ್ದಾರೆ. ಸಭೆಯಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ರಾಜ್ಯ ಉಸ್ತುವಾರಿ ಅರುಣ್ ಸಿಂಗ್, ಸಹ ಉಸ್ತುವಾರಿ ಡಿ.ಕೆ. ಅರುಣಾ ಅವರು ಭಾಗವಹಿಸಿ ಮಾರ್ಗದರ್ಶನ ನೀಡಲಿದ್ದಾರೆ. ರಾಜ್ಯದ ಸಚಿವರು, ಸಂಸದರು, ಶಾಸಕರು, ರಾಜ್ಯ ಪದಾಧಿಕಾರಿಗಳು, ರಾಜ್ಯ ಕಾರ್ಯಕಾರಿಣಿ ಸದಸ್ಯರು ಮತ್ತು ಜಿಲ್ಲಾಧ್ಯಕ್ಷರು ಭಾಗವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ | ಸೆಕ್ಷನ್ 144: ಮಡಿಕೇರಿ ಚಲೋ ರದ್ದು ಎಂದು ಘೋಷಿಸಿದ ಸಿದ್ದರಾಮಯ್ಯ