Site icon Vistara News

Assembly Session 2024: ಅಂಗನವಾಡಿ ಕಾರ್ಯಕರ್ತೆಯರಿಗೆ ಗುಡ್‌ ನ್ಯೂಸ್‌; ಶೀಘ್ರವೇ ಗೌರವಧನ ಹೆಚ್ಚಳ!

Anganwadi workers honorarium to be increased soon says Minister Lakshmi Hebbalkar

ಬೆಂಗಳೂರು: ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಗೌರವಧನ ಹೆಚ್ಚಳಕ್ಕೆ ಸರ್ಕಾರದ ಮುಂದೆ ಪ್ರಸ್ತಾವನೆ ಬಂದಿದ್ದು, ಶೀಘ್ರವೇ ಹೆಚ್ಚಳ ಮಾಡಲಾಗುವುದು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ (Assembly Session 2024) ತಿಳಿಸಿದರು.

ಪ್ರಶ್ನೋತ್ತರ ಕಲಾಪದ ವೇಳೆ ಬುಧವಾರ ಸುಳ್ಯ ಕ್ಷೇತ್ರದ ಶಾಸಕಿ ಭಾಗೀರಥಿ ಮುರಳ್ಯ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಗೌರವ ಧನ ಹೆಚ್ಚಳಕ್ಕೆ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ ಎಂದು ಹೇಳಿದರು.

ಅಂಗನವಾಡಿ ಕಾರ್ಯಕರ್ತೆಯರ ಅನುದಾನ ಮಾತ್ರವಲ್ಲ, ಅಂಗನವಾಡಿ ಕೇಂದ್ರಗಳಲ್ಲಿ ಸಾಕಷ್ಟು ಹುದ್ದೆಗಳು ಖಾಲಿ ಇದ್ದು, ಕೂಡಲೇ ಭರ್ತಿ ಮಾಡಬೇಕೆಂದು ಪ್ರತಿಪಕ್ಷ ನಾಯಕರು ಧ್ವನಿಗೂಡಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು, ನೇಮಕಾತಿ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ ಎಂದರು.

ಇದನ್ನೂ ಓದಿ: Assembly Session 2024: ಗ್ರೇಟರ್ ಬೆಂಗಳೂರು; ಪ್ರತಿಪಕ್ಷ ನಾಯಕರ ಅಭಿಪ್ರಾಯ ಪಡೆಯದೇ ತೀರ್ಮಾನಿಸುವ ಮೂರ್ಖ ನಾನಲ್ಲ ಎಂದ ಶಿವಕುಮಾರ್

2017ರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಗೌರವ ಧನ ಹೆಚ್ಚಳ ಮಾಡಿದ್ದರು. ಆದಾದ ಮೇಲೆ ಗೌರವ ಧನ ಹೆಚ್ಚಳವನ್ನೇ ಮಾಡಿಲ್ಲ, ಈಗ ಗೌರವ ಧನ ಹೆಚ್ಚಳದ ಬಗ್ಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಸದನಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದರು.

ಅಂಗನವಾಡಿ ಕೇಂದ್ರಗಳ ಬಾಡಿಗೆ ಹೆಚ್ಚಳಕ್ಕೆ ಕ್ರಮ

ಅಂಗನವಾಡಿ ಕೇಂದ್ರಗಳ ಕಟ್ಟಡಗಳ ಬಾಡಿಗೆ ಹೆಚ್ಚಳಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಪ್ರಸಕ್ತ ಸಾಲಿನ ಬಾಡಿಗೆ ಪಾವತಿಗೆ ಅನುದಾನದ ಕೊರತೆ ಇಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದರು.

ಬುಧವಾರ ಪ್ರಶ್ನೋತ್ತರ ಕಲಾಪದಲ್ಲಿ ಬಸವನಗುಡಿ ಕ್ಷೇತ್ರದ ಶಾಸಕ ಎಲ್.ಎ. ರವಿ ಸುಬ್ರಹ್ಮಣ್ಯ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಈಗಾಗಲೇ 2024-25ನೇ ಸಾಲಿನ ಡಿಸೆಂಬರ್ ತಿಂಗಳವರೆಗೆ ಅಂಗನವಾಡಿ ಕೇಂದ್ರಗಳ ಬಾಡಿಗೆ ಮೊತ್ತವನ್ನು ಪಾವತಿಸಲಾಗಿದೆ ಎಂದರು.

ಅಂಗನವಾಡಿ ಕೇಂದ್ರಗಳ ಮಕ್ಕಳು, ಇತರೆ ಫಲಾನುಭವಿಗಳು ಇಲಾಖೆಯ ಯಾವುದೇ ಸೇವೆಗಳಿಂದ ವಂಚಿತರಾಗದಂತೆ ಕ್ರಮ ವಹಿಸಲಾಗಿದೆ. ಸ್ವಂತ ಕಟ್ಟಡಗಳಿಲ್ಲದ ಪ್ರದೇಶದಲ್ಲಿ ಅಂಗನವಾಡಿಗಳನ್ನು ಬಿಬಿಎಂಪಿ, ಇನ್ನಿತರ ಸರ್ಕಾರಿ ಕಟ್ಟಡಗಳಲ್ಲಿ ನಡೆಸಲಾಗುತ್ತಿದೆ; ಕೆಲವೆಡೆ ಉತ್ತಮ ಮೂಲ ಸೌಕರ್ಯವುಳ್ಳ ಬಾಡಿಗೆ ಕಟ್ಟಡಗಳಲ್ಲೂ ಅಂಗನವಾಡಿಗಳು ಕಾರ್ಯನಿರ್ವಹಿಸುತ್ತಿವೆ ಎಂದು ಸಚಿವರು ಸದನಕ್ಕೆ ತಿಳಿಸಿದರು.

ಇದನ್ನೂ ಓದಿ: India’s July 25 Schedule At Paris Olympics: ನಾಳೆಯಿಂದ ಭಾರತದ ಒಲಿಂಪಿಕ್ಸ್​ ಸ್ಪರ್ಧೆ ಆರಂಭ; ವೇಳಾಪಟ್ಟಿ ಹೀಗಿದೆ

ರಾಜ್ಯದಲ್ಲಿ 20,266 ಲಿಂಗತ್ವ ಅಲ್ಪಸಂಖ್ಯಾತರು

ರಾಜ್ಯದಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಪ್ರಮಾಣದ ಬಗ್ಗೆ ಮೂಡಿಗೆರೆ ಕ್ಷೇತ್ರದ ಶಾಸಕಿ ನಯನಾ ಮೋಟಮ್ಮ ಅವರು ಕೇಳಿದ ಉಪ ಪ್ರಶ್ನೆಗೆ ಉತ್ತರಿಸಿದ ಸಚಿವರು, 2011ರ ಜನಗಣತಿಯ ಪ್ರಕಾರ, ರಾಜ್ಯದಲ್ಲಿ 20,266 ಲಿಂಗತ್ವ ಅಲ್ಪಸಂಖ್ಯಾತರಿದ್ದಾರೆ. ಇನ್ನು 2024ರ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಸಮುದಾಯ ಆಧಾರಿತ ಸಂಸ್ಥೆಗಳಿಂದ ಪಡೆದ ಅಂಕಿ ಅಂಶಗಳ ಪ್ರಕಾರ 43,752 ಲಿಂಗತ್ವ ಅಲ್ಪಸಂಖ್ಯಾತರಿದ್ದಾರೆ ಎಂದು ಸಚಿವರು ಸದನಕ್ಕೆ ಮಾಹಿತಿ ನೀಡಿದರು.

Exit mobile version