ಮಂಗಳೂರು: ನಗರ ಹೊರವಲಯದ ಸೋಮೇಶ್ವರ ಬೀಚ್‌ನಲ್ಲಿ ಹಿಂದು ವಿದ್ಯಾರ್ಥಿನಿಯರ ಜತೆ ತಿರುಗಾಡುತ್ತಿದ್ದ ಕಾರಣ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಮೇಲೆ ಹಲ್ಲೆ ಮಾಡಲಾಗಿದೆ. ನೈತಿಕ ಪೊಲೀಸ್‌ಗಿರಿ ಪ್ರದರ್ಶಿಸಿ, ಕೇರಳ ಮೂಲದ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಮೇಲೆ ತಂಡವೊಂದು ಹಲ್ಲೆ ನಡೆಸಿದೆ.
ಮೂವರು ವಿದ್ಯಾರ್ಥಿನಿಯರು ಹಾಗೂ ಮೂವರು ವಿದ್ಯಾರ್ಥಿಗಳ ಮೇಲೆ ತಂಡ ದಾಳಿ ನಡೆಸಿದೆ. ನಗರದ ಖಾಸಗಿ ಶಿಕ್ಷಣ ಸಂಸ್ಥೆಯಲ್ಲಿ ಕೇರಳದ ಆರು ವಿದ್ಯಾರ್ಥಿಗಳು ಅಧ್ಯಯನ ಮಾಡುತ್ತಿದ್ದಾರೆ. ಇವರು ಸಮುದ್ರ ತೀರದಲ್ಲಿ ವಿಹರಿಸುವಾಗ ಮೂವರು ಯುವಕರು ಮುಸ್ಲಿಂ ಸಮುದಾಯಕ್ಕೆ ಸೇರಿದವರೆಂದು ತಂಡವೊಂದು ಹಿಂಬಾಲಿಸಿದೆ. ಇದಾದ ಬಳಿಕ ಹಲ್ಲೆ ನಡೆಸಿದೆ ಎಂದು ತಿಳಿದುಬಂದಿದೆ.
ಪೊಲೀಸರಿಂದ ಪರಿಶೀಲನೆ
ಕೇರಳದ ಕಣ್ಣೂರಿನ ಯುವಕರು ಹಾಗೂ ಕಾಸರಗೋಡಿನ ಯುವತಿಯರು ಸಮುದ್ರ ತೀರದಲ್ಲಿ ತಿರುಗಾಡುತ್ತಿದ್ದರು. ಹಲ್ಲೆ ಬಳಿಕ ಮೂವರು ವಿದ್ಯಾರ್ಥಿಗಳು ಗಾಯಗೊಂಡಿದ್ದು, ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಜತೆಗಿದ್ದ ಮೂವರು ವಿದ್ಯಾರ್ಥಿನಿಯರು ವಾಪಸ್ ಊರಿಗೆ ಹೋಗಿದ್ದಾರೆ ಎಂದು ತಿಳಿದುಬಂದಿದೆ. ಉಳ್ಳಾಲ ಪೊಲೀಸರಿಂದ ತನಿಖೆ ನಡೆಯುತ್ತಿದೆ.
ಇದನ್ನೂ ಓದಿ: ಕರೆಂಟ್ ಬಿಲ್ ಕೇಳಿದ್ದಕ್ಕೆ ಸೆಸ್ಕಾಂ ಸಿಬ್ಬಂದಿ ಮೇಲೆ ಹಲ್ಲೆ; ತಲೆನೋವು ತಂದಿಟ್ಟ ಕಾಂಗ್ರೆಸ್ ಗ್ಯಾರಂಟಿ
ವಿದ್ಯಾರ್ಥಿಗಳ ಮೇಲೆ ಹರಿದ ಕಾರು
ದಕ್ಷಿಣ ಕನ್ನಡ ಜಿಲ್ಲೆ ಕುಕ್ಕೆ ಸುಬ್ರಹ್ಮಣ್ಯದಲ್ಲಿ ವಿದ್ಯಾರ್ಥಿಗಳ ಮೇಲೆ ಕಾರು ಹರಿದಿದ್ದು, ಎಂಟು ವಿದ್ಯಾರ್ಥಿಗಳಿಗೆ ಗಾಯವಾಗಿದೆ. ಇವರಲ್ಲಿ ಮೂವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ಶ್ರೀ ಸುಬ್ರಹ್ಮಣ್ಯೇಶ್ವರ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ರಸ್ತೆ ಬದಿ ನಡೆದುಕೊಂಡು ಹೋಗುವಾಗ ಕಾರು ಹರಿದಿದೆ. ಪ್ರವಾಸಿಗರ ಕಾರು ಹರಿದಿದೆ ಎಂದು ತಿಳಿದುಬಂದಿದೆ. ಕುಕ್ಕೆ ಸುಬ್ರಹ್ಮಣ್ಯ ಪೊಲೀಸರು ಕಾರನ್ನು ವಶಪಡಿಸಿಕೊಂಡಿದ್ದಾರೆ. ವಿದ್ಯಾರ್ಥಿಗಳನ್ನು ಸುಳ್ಯ ಹಾಗೂ ಪುತ್ತೂರು ಆಸ್ಪತ್ರೆಗೆ ಸಾಗಿಸಲಾಗಿದೆ.