ಆನೇಕಲ್: ತಾಲೂಕಿನ ಅತ್ತಿಬೆಲೆ ಗಡಿಭಾಗದ ಪಟಾಕಿ ಅಂಗಡಿಯಲ್ಲಿ ನಡೆದ ಅಗ್ನಿ ದುರಂತದಲ್ಲಿ (Attibele Fire Accident) ಗಂಭೀರವಾಗಿ ಗಾಯಗೊಂಡಿದ್ದ ಕಾರ್ಮಿಕನೊಬ್ಬ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ. ಇದರಿಂದ ಪ್ರಕರಣದಲ್ಲಿ ಒಟ್ಟು ಸಾವಿನ ಸಂಖ್ಯೆ 15ಕ್ಕೇರಿದೆ.
ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಿತ್ತಿದ್ದ ದಿನೇಶ್ ಎಂಬಾತ ಮೃತಪಟ್ಟಿದ್ದಾನೆ. ಅಗ್ನಿ ದುರಂತದಲ್ಲಿ ತೀವ್ರವಾಗಿ ಗಾಯಗೊಂಡಿದ್ದರಿಂದ ಯುವಕ ಕೊನೆಯುಸಿರೆಳೆದಿದ್ದಾನೆ. ಅ.7ರಂದು ಪಟಾಕಿ ಮಳಿಗೆಯಲ್ಲಿ ಬೆಂಕಿ ಅವಘಡ ಸಂಭವಿಸಿ 14 ಮಂದಿ ಸಜೀವ ದಹನವಾಗಿ, ಆರು ಮಂದಿ ಗಂಭೀರವಾಗಿ ಗಾಯಗೊಂಡಿದ್ದರು. ಇದೀಗ ಚಿಕಿತ್ಸೆ ಫಲಕಾರಿಯಾಗದೆ ಒಬ್ಬ ಕಾರ್ಮಿಕ ಮೃತಪಟ್ಟಿದ್ದಾನೆ.
ದೀಪಾವಳಿ ಹಬ್ಬಕ್ಕಾಗಿ ಮಳಿಗೆಯಲ್ಲಿ ಹೆಚ್ಚು ಪಟಾಕಿಗಳನ್ನು ಶೇಖರಣೆ ಮಾಡಲಾಗಿತ್ತು. ಆದರೆ, ಏಕಾಏಕಿ ಪಟಾಕಿ ಮಳಿಗೆಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದರಿಂದ ದುರಂತ ಸಂಭವಿಸಿತ್ತು.
ನಾಲ್ವರು ಅಧಿಕಾರಿಗಳ ಅಮಾನತು
ಸಿಎಂ ಸಿದ್ದರಾಮಯ್ಯ ಅವರ ಸೂಚನೆ ಮೇರೆಗೆ ಸರ್ಕಾರ ನಾಲ್ವರು ಅಧಿಕಾರಿಗಳನ್ನು ಅಮಾನತು ಮಾಡಿ ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ ನೀಡಿದ್ದಾರೆ. ಘಟನೆಗೆ ಅಧಿಕಾರಿಗಳ ನಿರ್ಲಕ್ಷ್ಯವೇ ಪ್ರಮುಖ ಕಾರಣ ಎಂಬ ಆರೋಪ ಕೇಳಿಬಂದಿತ್ತು. ಸುರಕ್ಷಾ ಕ್ರಮಗಳನ್ನು ಪರಿಶೀಲಿಸದೆ ಲೇಸೆನ್ಸ್ ನೀಡಿದ್ದರಿಂದ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಸೂಚಿಸಿದ್ದರು. ಹೀಗಾಗಿ ತಹಸೀಲ್ದಾರ್ ಸೇರಿ ನಾಲ್ವರು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ಆನೇಕಲ್ ತಾಲೂಕಿನ ಈ ಹಿಂದಿನ ತಹಸೀಲ್ದಾರ್ ಶಶಿಧರ್ ಮಾಡ್ಯಾಳ್, ಉಪ ತಹಶೀಲ್ದಾರ್ ಶ್ರೀಧರ್, ರಾಜಸ್ವ ನಿರೀಕ್ಷಕ ಅತ್ತಿಬೆಲೆ, ಗ್ರಾಮ ಆಡಳಿತಾಧಿಕಾರಿಯನ್ನು ಸಸ್ಪೆಂಟ್ ಮಾಡಲಾಗಿದೆ.
ನಿಯಮ ಉಲ್ಲಂಘಿಸಿದ್ದ ಪಟಾಕಿ ಮಳಿಗೆಗಳು ಸೀಜ್
ಆನೇಕಲ್: ಅತ್ತಿಬೆಲೆ ಪಟಾಕಿ ಬೆಂಕಿ ದುರಂತ ಹಿನ್ನೆಲೆಯಲ್ಲಿ ತಾಲೂಕಿನಲ್ಲಿ ತಹಸೀಲ್ದಾರ್ ಶಿವಪ್ಪ ಲಮಾಣಿ ನೇತೃತ್ವದಲ್ಲಿ ಅಧಿಕಾರಿಗಳು ಪಟಾಕಿ ಅಂಗಡಿಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿದರು. ಈ ವೇಳೆ ಸುರಕ್ಷತಾ ಕ್ರಮ ಕೈಗೊಳ್ಳದೇ ಅಕ್ರಮವಾಗಿ ಪಟಾಕಿ ದಾಸ್ತಾನು ಮಾಡಿದ್ದ ಎರಡು ಅಂಗಡಿ, ಗೋದಾಮುಗಳನ್ನು ಜಪ್ತಿ ಮಾಡಲಾಗಿದೆ.