ಬೆಂಗಳೂರು: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮನೆಯಲ್ಲಿ ಅರ್ಧ ಪಾಕಿಸ್ತಾನವಿದೆ ಎಂಬ ಹೇಳಿಕೆ ನೀಡಿದ್ದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಸಚಿವ ದಿನೇಶ್ ಗುಂಡೂರಾವ್ ಕುಟುಂಬದವರನ್ನು ಅವಮಾನಿಸಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಲ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಗಾಂಧಿನಗರ ಬ್ಲಾಕ್ ಕಾಂಗ್ರೆಸ್ ವತಿಯಿಂದ ಶೇಷಾದ್ರಿಪುರ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.
ಬಿಜೆಪಿ ಕಾರ್ಯಕರ್ತನನ್ನು ಸಮರ್ಥನೆ ಮಾಡುವ ವೇಳೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರ ಮನೆಯಲ್ಲಿ ಅರ್ಧ ಪಾಕಿಸ್ತಾನವೇ ಇದೆ, ದೇಶ ವಿರೋಧಿ ಹೇಳಿಕೆ ನೀಡುವುದು ಅವರ ಚಟವಾಗಿದೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ಈ ಮೂಲಕ ಸಚಿವರ ಇಡೀ ಕುಟುಂಬವನ್ನು ಅವಹೇಳನ ಮಾಡಿ, ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ. ಚುನಾವಣೆ ಹೊತ್ತಲ್ಲಿ ಕೋಮು ಸೌಹಾರ್ದ ಹಾಳು ಮಾಡಲು, ಸಚಿವರ ಕುಟುಂಬದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಶಾಸಕನ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಗಾಂಧಿನಗರ ಬ್ಲಾಕ್ ಕಾಂಗ್ರೆಸ್ ಮನವಿ ಮಾಡಿದೆ.
ಬಿಜೆಪಿ ವಿರುದ್ಧ ಕಿಡಿ ಕಾರಿದ್ದ ದಿನೇಶ್ ಗುಂಡೂರಾವ್
ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣದಲ್ಲಿ ಎನ್‌ಐಎ ಬಿಜೆಪಿ ಕಾರ್ಯಕರ್ತನ ವಿಚಾರಣೆ ನಡೆಸಿತ್ತು. ಈ ಬಗ್ಗೆ ದಿನೇಶ್ ಗುಂಡೂರಾವ್ ಅವರು ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿ, ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ತೀರ್ಥಹಳ್ಳಿಯ ಬಿಜೆಪಿ ಮುಖಂಡ ಸಾಯಿಪ್ರಸಾದ್‌ನನ್ನು ರಾಷ್ಟ್ರೀಯ ತನಿಖಾ ದಳದವರು ವಶಕ್ಕೆ ಪಡೆದಿದ್ದಾರೆ. ಸ್ಫೋಟಕ್ಕೆ ನಮ್ಮ ಸರ್ಕಾರವೇ ಕಾರಣ ಎನ್ನುವಂತೆ ಮಾತನಾಡುತ್ತಿದ್ದ ರಾಜ್ಯದ ಕೇಸರಿ ಕಲಿಗಳು ಈಗ ಏನು ಹೇಳುತ್ತಾರೆ? ಬಿಜೆಪಿ ಮುಖಂಡನನ್ನು NIA ವಶಕ್ಕೆ ಪಡೆದಿದೆ ಎಂದ ಮೇಲೆ ರಾಮೇಶ್ವರಂ ಕೆಫೆ ಸ್ಫೋಟದಲ್ಲಿ ಬಿಜೆಪಿ ಕೈವಾಡ ಇದೆ ಎಂದು ಅರ್ಥಅಲ್ಲವೇ? ಧರ್ಮ ರಕ್ಷಣೆ ಹೆಸರಲ್ಲಿ ರಾಜ್ಯದಲ್ಲಿ ಬಿಜೆಪಿ ನಡೆಸುತ್ತೀರೋ ಕೇಸರಿ ಭಯೋತ್ಪಾದನೆ ಎಷ್ಟು ಗಂಭೀರ ಸಮಸ್ಯೆಗಳನ್ನು ಹುಟ್ಟು ಹಾಕುತ್ತಿದೆ ಅನ್ನೋದಕ್ಕೆ ಇದಕ್ಕಿಂತಾ ಸಾಕ್ಷಿ ಬೇಕಾ? ಆರ್‌ಎಸ್‌ಎಸ್ ಸಿದ್ಧಾಂತಗಳನ್ನು ದೇಶದ ಮೇಲೆ ಹೇರುತ್ತಿರುವ ಕೇಂದ್ರ ಬಿಜೆಪಿಯು ಇದಕ್ಕೇನು ಹೇಳುತ್ತದೆ?
ಇದನ್ನೂ ಓದಿ | Lok Sabha Election 2024: ಮತ್ತೆ ಒಂದಾದ ದಳಪತಿ-ಹಳ್ಳಿಹಕ್ಕಿ; ಮಂಡ್ಯದಲ್ಲಿ ಎಚ್‌ಡಿಕೆ ಗೆಲ್ಲಬೇಕು ಎಂದ ಎಚ್.ವಿಶ್ವನಾಥ್
ರಾಷ್ಟ್ರದ ಭದ್ರತೆ ವಿಚಾರವನ್ನೂ ಲೆಕ್ಕಿಸದೇ ರಾಮೇಶ್ವರಂ ಬಾಂಬ್ ಸ್ಫೋಟ ಪ್ರಕರಣವನ್ನು ಕಾಂಗ್ರೆಸ್ ಸರ್ಕಾರದ ಮೇಲೆ ಹೊರೆಸಿದ ರಾಜ್ಯ ಬಿಜೆಪಿ ನಾಯಕರು ಈಗ ಉತ್ತರ ನೀಡಲೇಬೇಕು ಎಂದು ಸಚಿವರು ಒತ್ತಾಯಿಸಿದ್ದರು. ಸಚಿವರ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡುವಾಗ ಅವಹೇಳನ ಮಾಡಿದ್ದರಿಂದ ಶಾಸಕ ಯತ್ನಾಳ್ ವಿರುದ್ಧ ಕಾಂಗ್ರೆಸ್ ದೂರು ನೀಡಿದೆ.