ವಿಧಾನಸಭೆ: ರಾಜ್ಯದಲ್ಲಿ ಅಲ್ಪಸಂಖ್ಯಾತರ ಅಭಿವೃದ್ಧಿ ಯೋಜನೆಗಳಿಗೆ ಕಳೆದ ಮೂರು ವರ್ಷಗಳಲ್ಲಿ ಸುಮಾರು 2,400 ಕೋಟಿ ರೂ. ವೆಚ್ಚ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ವಿಧಾನಸಭೆಯ ಪ್ರಶ್ನೋತ್ತರ ವೇಳೆಯಲ್ಲಿ ವರುಣಾ ಕ್ಷೇತ್ರದ ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಪ್ರಶ್ನೆಗೆ ಉತ್ತರಿಸಿದ ಸಿಎಂ ಬೊಮ್ಮಾಯಿ, ಅಲ್ಪಸಂಖ್ಯಾತರ ಅಭಿವೃದ್ಧಿಗೆ ಕಳೆದ ಮೂರು ವರ್ಷಗಳಲ್ಲಿ ಅಲ್ಪಸಂಖ್ಯಾತರ ನಿರ್ದೇಶನಾಲಯಕ್ಕೆ 2,105 ಕೋಟಿ ರೂ.ಮಂಜೂರು ಮಾಡಲಾಗಿದೆ. ಇದರಲ್ಲಿ 2,047 ಕೋಟಿ ರೂ. ವೆಚ್ಚ ಮಾಡಲಾಗಿದೆ ಎಂದರು.
ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮಕ್ಕೆ 238 ಕೋಟಿ ರೂ. ಮಂಜೂರು ಮಾಡಲಾಗಿತ್ತು. ಆದರೆ 300 ಕೋಟಿ ರೂ. ಖರ್ಚು ಮಾಡಲಾಗಿದೆ. ಬಿಡುಗಡೆಯಾಗಿರುವುದಕ್ಕಿಂತ ಹೆಚ್ಚು ಅನುದಾನ ವೆಚ್ಚವಾಗಿದೆ. ಹಿಂದಿನ ವರ್ಷಗಳಲ್ಲಿ ಉಳಿಕೆಯಾಗಿರುವ ಅನುದಾನದಲ್ಲಿ ಇದನ್ನು ಸರಿದೂಗಿಸಲಾಗಿದೆ ಎಂದರು.
ಕರ್ನಾಟಕ ರಾಜ್ಯ ವಕ್ಫ್ ಮಂಡಳಿಯಿಂದ ವಕ್ಫ್ ಆಸ್ತಿಗಳ ಸಂರಕ್ಷಣೆ, ದುರಸ್ತಿ ಮತ್ತು ಜೀರ್ಣೋದ್ಧಾರ , ಪ್ರಮುಖ ಯಾತ್ರಾ ಸ್ಥಳಗಳಲ್ಲಿ ಮೂಲಸೌಕರ್ಯಗಳ ಅಭಿವೃದ್ಧಿಗೆ ಕಳೆದ ಮೂರು ವರ್ಷಗಳಲ್ಲಿ 88.75 ಕೋಟಿ ರೂ.ಅನುದಾನ ಮಂಜೂರು ಮಾಡಲಾಗಿದೆ. ಇದರಲ್ಲಿ 50.91 ಕೋಟಿ ರೂ.ಅನುದಾನ ವೆಚ್ಚವಾಗಿದೆ.
ರಾಜ್ಯ ವಕ್ಫ್ ಮಹಿಳಾ ಅಭಿವೃದ್ಧಿ ಪ್ರತಿಷ್ಠಾನದಡಿ ಅಲ್ಪಸಂಖ್ಯಾತ ಮುಸ್ಲಿಂ ಮಹಿಳೆಯರು ಮತ್ತು ಹೆಣ್ಣು ಮಕ್ಕಳ ಆರೋಗ್ಯ ಪರಿಹಾರ ನಿಧಿ ಯೋಜನೆಗಳಿಗೆ 17.38 ಕೋಟಿ ರೂ.ಮಂಜೂರು ಮಾಡಲಾಗಿದೆ. 14.74 ಕೋಟಿ ರೂ.ವೆಚ್ಚ ಮಾಡಲಾಗಿದೆ. ಚರ್ಚ್ ಮತ್ತು ಇತರೆ ಅಲ್ಪಸಂಖ್ಯಾತ ಸಮುದಾಯಗಳ ಭವನಗಳಿಗೂ ಅನುದಾನ ಒದಗಿಸಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ವಿವರಿಸಿದರು.
ಇದನ್ನೂ ಓದಿ | Halal Certification | ಮತ್ತೆ ಮುನ್ನೆಲೆಗೆ ಬಂದ ಹಲಾಲ್ ಪ್ರಮಾಣ ಪತ್ರ ವಿಚಾರ: ಅಧಿವೇಶನದಲ್ಲಿ ವಿಧೇಯಕ ಮಂಡನೆಗೆ ಸಿದ್ಧತೆ