Site icon Vistara News

DK Shivakumar : ಬೆಳಗಾವಿಗೆ ಹೋದ ಡಿಕೆಶಿ ಸ್ವಾಗತಕ್ಕೆ ಯಾರೂ ಬಂದೇ ಇಲ್ಲ, ಯಾಕೆ?

DKS shivakumar at Belagavi Airport

ಬೆಳಗಾವಿ: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ (DK Shivakumar) ಅವರು ಬುಧವಾರ ಬೆಳಗಾವಿಗೆ ಭೇಟಿ ನೀಡಿದ್ದಾರೆ. ಹುಕ್ಕೇರಿ ಹಿರೇಮಠದಲ್ಲಿ (Hukkeri hirematt) ನಡೆಯುವ ಕಾರ್ಯಕ್ರಮ, ಖಾಸಗಿ ಭೇಟಿ ಮತ್ತು ಅದರ ನಡುವೆ ನೀರಾವರಿ ಇಲಾಖೆಯ ಪರಿಶೀಲನಾ ಸಭೆಯನ್ನು ಡಿ.ಕೆ. ಶಿವಕುಮಾರ್‌ ನಡೆಸುತ್ತಿದ್ದಾರೆ. ಅವರು ಬೆಳಗಾವಿಗೆ ಬಂದರೂ ಯಾವ ಶಾಸಕರೂ, ಸಚಿವರೂ ಅವರನ್ನು ಸ್ವಾಗತಿಸಲು ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಬಂದಿರಲಿಲ್ಲ. ಯಾಕೆ ಹೀಗೆ ಎಂಬುದಕ್ಕೆ ಸ್ವತಃ ಡಿ.ಕೆ. ಶಿವಕುಮಾರ್‌ ಅವರೇ ಉತ್ತರ ನೀಡಿದ್ದಾರೆ.

ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಬುಧವಾರ ಪ್ರತಿಕ್ರಿಯಿಸಿದರು. ನಿಮಗೂ ಸತೀಶ್‌ ಜಾರಕಿಹೊಳಿ ಅವರಿಗೂ ಮುನಿಸಿದೆಯೇ ಎಂಬ ಪ್ರಶ್ನೆಗೂ ಅವರು ಉತ್ತರಿಸಿದರು.

ʻʻ”ನೆನ್ನೆ, ಮೊನ್ನೆ ಸತೀಶ್ ಜಾರಕಿಹೊಳಿ ಮತ್ತು ನಾನು ಜೊತೆಯಲ್ಲಿಯೇ ಕುಳಿತು ಮಾತನಾಡಿದ್ದೇವೆ. ನಾನು ಬಂದಿರುವುದು ಖಾಸಗಿ ಕಾರ್ಯಕ್ರಮಕ್ಕೆ. ಲಕ್ಷ್ಮಿ ಹೆಬ್ಬಾಳಕರ್ ಅವರು ನಾಮಕರಣ ಕಾರ್ಯಕ್ರಮ ನಿಮಿತ್ತ ಭದ್ರಾವತಿಯಲ್ಲಿ ಇದ್ದಾರೆ‌. ಕೌಜಲಗಿ ಅವರಿಗೆ ಆರೋಗ್ಯ ಸರಿಯಿಲ್ಲ‌. ದಿಢೀರ್ ಎಂದು ನಿನ್ನೆ ರಾತ್ರಿ ಈ ಕಾರ್ಯಕ್ರಮ ನಿಗದಿಯಾದ ಕಾರಣಕ್ಕೆ ಬಂದಿದ್ದೇನೆ. ಎಲ್ಲರಿಗೂ ಅವರದೇ ಆದ ವೈಯಕ್ತಿಕ ಕೆಲಸಗಳು ಇರುತ್ತವೆ” ಎಂದು ಹೇಳಿದರು.

ಸತೀಶ್ ಜಾರಕಿಹೊಳಿ ಹಾಗೂ ನಿಮ್ಮ ನಡುವೆ ಬಿರುಕು ಮೂಡಿದೆಯೇ ಎಂದು ಕೇಳಿದಾಗ “ನಮ್ಮ ನಡುವೆ ಯಾವುದೇ ಬಿರುಕಿಲ್ಲ. ನನ್ನನ್ನು ಸ್ವಾಗತಿಸಲು ಬರಲಿಲ್ಲ, ಅದು ಇದು, ಎಂದು ನೀವೇ ಏನೇನೋ ಹೇಳುತ್ತೀರಿ?. ಇದೆಲ್ಲಾ ಕೇವಲ ಮಾಧ್ಯಮಗಳ ಸೃಷ್ಟಿ” ಎಂದರು.

“ನಮ್ಮಲ್ಲಿ ಯಾರ ಬಗ್ಗೆಯೂ ಮುನಿಸಿಲ್ಲ. ಎಲ್ಲಾ ಶಾಸಕರು ನಮ್ಮವರೇ. ನಿಮಗೂ ಹಾಗೂ ಬಿಜೆಪಿಯವರಿಗೆ ಒಂದು ಸುದ್ದಿ ಬೇಕು, ಅದಕ್ಕೆ ಹೀಗೆಲ್ಲಾ ಹೇಳುತ್ತೀರಿ” ಎಂದರು. ಸತೀಶ್ ಜಾರಕಿಹೊಳಿ ಅವರು ಶಾಸಕರ ಜೊತೆ ಪ್ರವಾಸ ಮಾಡುತ್ತೇನೆ ಎಂದು ಹೇಳಿದ್ದಾರೆ, ಹೌದು. ಈ ವಿಚಾರವಾಗಿ ನಾವಿಬ್ಬರೂ ಚರ್ಚಿಸಿದೆವು ಎಂದರು.

“ಹುಕ್ಕೇರಿ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರನ್ನು ಭೇಟಿ ಮಾಡಲು, ಈ ಭಾಗದ ನೀರಾವರಿ ಯೋಜನೆಗಳ ಪ್ರಗತಿ ಪರಿಶೀಲನೆ ಮಾಡಲು ಹಾಗೂ ಮುಖ್ಯವಾಗಿ ಹುಕ್ಕೇರಿ ಮಠದ ಕಾರ್ಯಕ್ರಮಕ್ಕೆ ಬಂದಿದ್ದೇನೆ” ಎಂದು ಶಿವಕುಮಾರ್ ಅವರು ಸ್ಪಷ್ಟವಾಗಿ ಹೇಳಿದರು.

ಜೆ.ಎಚ್‌. ಪಟೇಲರ ಕತೆಯನ್ನು ಸೂಚ್ಯವಾಗಿ ಹೇಳಿದ ಡಿ.ಕೆ.ಶಿ!

ಬೆಳಗಾವಿಯಿಂದಲೇ ಕಾಂಗ್ರೆಸ್ ಬಂಡಾಯ ಆರಂಭ ಎಂದು ಬಿಜೆಪಿಯವರು ಹೇಳುತ್ತಿದ್ದಾರೆ ಎಂದು ಕೇಳಿದಾಗ, “ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಬಿರುಕಿಲ್ಲ. 136 ಶಾಸಕರೂ ನಮ್ಮವರೇ. ನಮ್ಮಲ್ಲಿ ಬಿರುಕಿದೆ ಎಂದು ಹೇಳುವ ಬಿಜೆಪಿ ನಾಯಕರು ಒಮ್ಮೆ ಜೆ.ಎಚ್. ಪಟೇಲರ ಭಾಷಣ ಕೇಳಿಸಿಕೊಳ್ಳಲಿ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದರು. “ಜೆ.ಎಚ್. ಪಟೇಲರ ಸರ್ಕಾರದ ವಿರುದ್ದ ಅವಿಶ್ವಾಸ ನಿರ್ಣಯ ಮಂಡನೆ ಆದಾಗ ಅವರು ಒಂದು ಭಾಷಣ ಮಾಡಿದ್ದರು. ಹೋರಿ ಮತ್ತು ನಾಯಿ ಕತೆ. ಅದನ್ನು ನೀವು ಕೇಳಿದ್ದೀರಾ? ಅದನ್ನು ಬಿಜೆಪಿಯವರಿಗೆ ಕೇಳಿಸಿಕೊಳ್ಳಲು ಹೇಳಿ” ಎಂದು ತಿರುಗೇಟು ನೀಡಿದರು.

Exit mobile version