ಬಳ್ಳಾರಿ: ಲೋಕಸಭಾ ಸಾರ್ವತ್ರಿಕ ಚುನಾವಣೆಗೆ (Lok Sabha Election 2024) ಸಂಬಂಧಿಸಿದಂತೆ, ಶನಿವಾರ ನಡೆದ ನಾಮಪತ್ರಗಳ ಪರಿಶೀಲನೆಯಲ್ಲಿ ಬಳ್ಳಾರಿ (ಪ.ಪಂ) ಲೋಕಸಭಾ ಕ್ಷೇತ್ರಕ್ಕೆ ಸಲ್ಲಿಸಿದ್ದ 11 ಅಭ್ಯರ್ಥಿಗಳ ನಾಮಪತ್ರಗಳು ಕ್ರಮಬದ್ಧವಾಗಿವೆ ಎಂದು ಜಿಲ್ಲಾ ಚುನಾವಣಾಧಿಕಾರಿ ಆಗಿರುವ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ತಿಳಿಸಿದ್ದಾರೆ.
ಇದನ್ನೂ ಓದಿ: Video Viral: ಜಲ ತರಂಗ್‌ನಲ್ಲಿ ಮಹಿಳೆ ನುಡಿಸಿದ ಐಗಿರಿ ನಂದಿನಿ ವಿಡಿಯೋ ವೈರಲ್
ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಚುನಾವಣಾಧಿಕಾರಿಗಳ ಕಾರ್ಯಾಲಯದಲ್ಲಿ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ, ಶನಿವಾರ ನಾಮಪತ್ರಗಳ ಪರಿಶೀಲನೆ ನಡೆಸಿದರು.
ಕ್ರಮಬದ್ಧವಾಗಿ ನಾಮನಿರ್ದೇಶಿತರಾದ ಉಮೇದುವಾರರ ಪಟ್ಟಿ
ಮಾನ್ಯತೆ ಪಡೆದ ರಾಷ್ಟ್ರೀಯ ಮತ್ತು ರಾಜ್ಯ ರಾಜಕೀಯ ಪಕ್ಷಗಳ ಅಭ್ಯರ್ಥಿಗಳಾದ ಇಂಡಿಯನ್ ನ್ಯಾಷನಲ್ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಈ. ತುಕಾರಾಮ್, ಬಹುಜನ ಸಮಾಜ ಪಾರ್ಟಿಯ ಅಭ್ಯರ್ಥಿ ವಾಲ್ಮೀಕಿ ಕೃಷ್ಣಪ್ಪ ಮತ್ತು ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ಬಿ. ಶ್ರೀರಾಮುಲು ಈ ಅಭ್ಯರ್ಥಿಗಳ ನಾಮಪತ್ರ ಕ್ರಮಬದ್ಧವಾಗಿವೆ.
ನೋಂದಾಯಿತ ರಾಜಕೀಯ ಪಕ್ಷಗಳ ಅಭ್ಯರ್ಥಿಗಳಾದ (ಮಾನ್ಯತೆ ಪಡೆದ ರಾಷ್ಟ್ರೀಯ ಮತ್ತು ರಾಜ್ಯ ರಾಜಕೀಯ ಪಕ್ಷಗಳನ್ನು ಹೊರತುಪಡಿಸಿ) ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಅಭ್ಯರ್ಥಿ ಸಿ. ಚನ್ನವೀರ, ಸೋಷಿಯಲಿಸ್ಟ್ ಯುನಿಟಿ ಸೆಂಟರ್ ಆಫ್ ಇಂಡಿಯಾ (ಕಮ್ಯುನಿಷ್ಟ್) ಪಕ್ಷದ ಅಭ್ಯರ್ಥಿ ಎ.ದೇವದಾಸ್, ಪ್ರಹರ್ ಜನಶಕ್ತಿ ಪಾರ್ಟಿಯ ಅಭ್ಯರ್ಥಿ ಮಂಜಪ್ಪ, ನವಭಾರತ್ ಸೇನ ಪಕ್ಷದ ಅಭ್ಯರ್ಥಿ ಜಿ. ಸ್ವಾಮಿ ಅವರ ನಾಮಪತ್ರ ಕ್ರಮಬದ್ಧವಾಗಿವೆ.
ಪಕ್ಷೇತರ ಅಭ್ಯರ್ಥಿಗಳಾದ ಅರುಣ್ ಎಸ್. ಹಿರೇಹಾಳ್, ವೈ. ಪಂಪಾಪತಿ, ಬಿ. ಭಾಗ್ಯಲಕ್ಷ್ಮಿ, ವೀರೇಶ ಅವರ ನಾಮಪತ್ರ ಕ್ರಮಬದ್ಧವಾಗಿವೆ.
ಇದನ್ನೂ ಓದಿ: SRH vs DC: ವಿಸ್ಫೋಟಕ ಬ್ಯಾಟಿಂಗ್ ಮೂಲಕ ದಾಖಲೆ ಬರೆದ ಸನ್ರೈಸರ್ಸ್ ತಂಡ
ಏ.22 ರಂದು ನಾಮಪತ್ರಗಳನ್ನು ಹಿಂಪಡೆಯಲು ಕೊನೆಯ ದಿನವಾಗಿದ್ದು, ಮೇ 7 ರಂದು ಮತದಾನ ನಡೆಯಲಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.