ಮಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ವಿರುದ್ಧ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಸಿಎಂ ಮೇಲೆ ಕೊಲೆ ಆರೋಪ ಮಾಡಿರುವ ಅವರ ಮೇಲೆ ದೂರು ದಾಖಲಿಸಲು ಕಾಂಗ್ರೆಸ್ ಕಾರ್ಯಕರ್ತರು ಮುಂದಾಗಿದ್ದಾರೆ.
ಬೆಳ್ತಂಗಡಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ನಾಲಿಗೆ ಹರಿಬಿಟ್ಟ ಬಿಜೆಪಿ ಶಾಸಕ ಹರೀಶ್ ಪೂಂಜ, ʼ24 ಹಿಂದೂ ಕಾರ್ಯಕರ್ತರನ್ನು ಸಿದ್ದರಾಮಯ್ಯ ಹತ್ಯೆ ಮಾಡಿದ್ದಾರೆʼ ಎಂದಿದ್ದಾರೆ. ಹಿಂದೂ ಸಂಘಟನೆಗಳಲ್ಲಿ ಗುರುತಿಸಿಕೊಂಡಿದ್ದು ಕಾಂಗ್ರೆಸ್ ಪರ ಪ್ರಚಾರ ನಡೆಸಿದವರ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದ ಶಾಸಕ ಅವರ ವಿರುದ್ಧ ಕಿಡಿ ಕಾರಿದ್ದರು.
“ಸತ್ಯಜಿತ್ ಸುರತ್ಕಲ್ ಎಂಬ ಹಿಂದೂ ನಾಯಕ ಕಾಂಗ್ರೆಸ್ ಪರ ಪ್ರಚಾರ ಮಾಡಿದ್ದಾರೆ. 24 ಹಿಂದೂ ಕಾರ್ಯಕರ್ತರನ್ನು ಹತ್ಯೆ ಮಾಡಿದ ಸಿದ್ದರಾಮಯ್ಯಗೆ ನೀವು ವೋಟ್ ಕೇಳಿದ್ದೀರ. ಬಜರಂಗದಳ ಬ್ಯಾನ್ ಮಾಡುತ್ತೇವೆ ಎಂದ ಕಾಂಗ್ರೆಸ್ ಪರ ವೋಟ್ ಕೇಳಿದ್ದೀರ. ನಿಮ್ಮದು ಯಾವ ರೀತಿಯ ಹಿಂದುತ್ವ ಎಂದು ಜನ ಕೇಳುತ್ತಿದ್ದಾರೆʼʼ ಎಂದು ಶಾಸಕ ಪೂಂಜ ಆಕ್ರೋಶ ವ್ಯಕ್ತಪಡಿಸಿದ್ದರು. ಇದೀಗ ಬಿಜೆಪಿ ಶಾಸಕರ ಮಾತು ವಿವಾದಕ್ಕೆ ಕಾರಣವಾಗಿದೆ. ಸ್ವಯಂಪ್ರೇರಿತ ದೂರು ದಾಖಲಿಸಲು ಕಾಂಗ್ರೆಸ್ ಕಾರ್ಯಕರ್ತರು ಮುಂದಾಗಿದ್ದಾರೆ.