Site icon Vistara News

Press Club Awards: ಡಿಕೆಶಿಗೆ ಪ್ರೆಸ್‌ಕ್ಲಬ್ ʼವರ್ಷದ ವ್ಯಕ್ತಿ ಪ್ರಶಸ್ತಿʼ ಪ್ರದಾನ; ಸಿಎಂ ಮೆಚ್ಚುಗೆ

Press Club Awards

ಬೆಂಗಳೂರು: ಪ್ರೆಸ್‌ ಕ್ಲಬ್ ಆಫ್ ಬೆಂಗಳೂರು (Press Club Of Bangalore) ವತಿಯಿಂದ ಮಾಧ್ಯಮ ಕ್ಷೇತ್ರದಲ್ಲಿ ಅಪ್ರತಿಮ ಸೇವೆ ಸಲ್ಲಿಸಿದ 29 ಮಂದಿಗೆ ಭಾನುವಾರ ಪ್ರೆಸ್‌ಕ್ಲಬ್ ಜೀವಮಾನ ಸಾಧನೆ ಪ್ರಶಸ್ತಿ (Press Club Awards) ನೀಡಿ ಗೌರವಿಸಲಾಯಿತು. ಇದೇ ವೇಳೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರಿಗೆ ಪ್ರೆಸ್‌ಕ್ಲಬ್ ʼವರ್ಷದ ವ್ಯಕ್ತಿ ಪ್ರಶಸ್ತಿʼ, ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ, ಕಾರ್ಮಿಕ ಸಚಿವರಾದ ಸಂತೋಷ್ ಎಸ್. ಲಾಡ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಕೆ.ಗೋವಿಂದರಾಜು ಅವರಿಗೆ ಪ್ರೆಸ್‌ಕ್ಲಬ್ ವಿಶೇಷ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಬೆಂಗಳೂರು ಪ್ರೆಸ್ ಕ್ಲಬ್ ಆವರಣದಲ್ಲಿ ಆಯೋಜಿಸಿದ್ದ ವರ್ಷದ ವ್ಯಕ್ತಿ ವಿಶೇಷ ಪ್ರಶಸ್ತಿ ಹಾಗೂ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಸರ್ವೋಚ್ಚ ನ್ಯಾಯಾಲಯದ ವಿಶ್ರಾಂತ ನ್ಯಾಯಮೂರ್ತಿ ಶಿವರಾಜ್ ಪಾಟೀಲ್ ಅವರು ಪ್ರಶಸ್ತಿ ಪ್ರದಾನ ಮಾಡಿದರು. ಈ ವೇಳೆ ಸಿಎಂ ಸಿದ್ದರಾಮಯ್ಯ ಅವರು 2024ರ ಪ್ರೆಸ್ ಕ್ಲಬ್ ಡೈರಿಯನ್ನು ಬಿಡುಗಡೆ ಗೊಳಿಸಿದರು.

ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಸಾರಥ್ಯವಹಿಸಿ ಪಕ್ಷ ಅಧಿಕಾರ ಸೂತ್ರ ಹಿಡಿಯಲು ಕಾರಣವಾದ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಅವರನ್ನು ವರ್ಷದ ವ್ಯಕ್ತಿ ಪ್ರಶಸ್ತಿಗೆ ಪ್ರೆಸ್‌ಕ್ಲಬ್ ಸದಸ್ಯರು ಆಯ್ಕೆ ಮಾಡಿದ್ದಾರೆ. ಅದೇ ರೀತಿ ರಾಜಕೀಯ ಹಾಗೂ ಶಿಕ್ಷಣ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆಗೆ ಹಿರಿಯ ರಾಜಕಾರಣಿ ಶಾಸಕ ಹಾಗೂ ಮಾಜಿ ಸಚಿವ ಶ್ರೀ ಶಾಮನೂರು ಶಿವಶಂಕರಪ್ಪ ಅವರಿಗೆ ಪ್ರೆಸ್‌ಕ್ಲಬ್ ವಿಶೇಷ ಪ್ರಶಸ್ತಿ ನೀಡಲಾಗಿದೆ.

ಪತ್ರಿಕಾ ವಿತರಕರಿಗೆ ಅಪಘಾತವಿಮೆ ಯೋಜನೆ ಪ್ರಕಟಿಸಿದ ಹಿನ್ನೆಲೆಯಲ್ಲಿ ಕಾರ್ಮಿಕ ಸಚಿವ ಸಂತೊಷ್ ಲಾಡ್ ಹಾಗೂ ಏಷ್ಯಾ ಬ್ಯಾಸ್ಕೇಟ್ ಬಾಲ್ ಫೆಡರೇಷನ್ ಅಧ್ಯಕ್ಷರಾಗಿ ಆಯ್ಕೆಗೊಂಡ ಮೊದಲ ಕನ್ನಡಿಗ ಡಾ. ಕೆ. ಗೋವಿಂದರಾಜು ಅವರಿಗೆ ಪ್ರೆಸ್‌ಕ್ಲಬ್ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

ಡಿ.ಕೆ.ಶಿವಕುಮಾರ್ ಚತುರ ಸಂಘಟಕ: ಸಿಎಂ ಸಿದ್ದರಾಮಯ್ಯ ಮೆಚ್ಚುಗೆ

ಪ್ರೆಸ್‌ ಕ್ಲಬ್‌ ವರ್ಷದ ವ್ಯಕ್ತಿ ಪ್ರಶಸ್ತಿ 2023ಕ್ಕ ನಮ್ಮ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಆಯ್ಕೆ ಮಾಡಲಾಗಿದೆ. ಪ್ರಶಸ್ತಿ ಪುರಸ್ಕೃತರಾದ ಡಿ.ಕೆ.ಶಿವಕುಮಾರ್ ಅವರು ಚತುರ ಸಂಘಟಕರು ಮತ್ತು ಕ್ರಿಯಾಶೀಲ ವ್ಯಕ್ತಿ ಎಂದು ಸಿಎಂ ಸಿದ್ದರಾಮಯ್ಯ ಮೆಚ್ಚುಗೆ ಸೂಚಿಸಿದರು.

ವರ್ಷದ ವ್ಯಕ್ತಿ ವಿಶೇಷ ಪ್ರಶಸ್ತಿ ಹಾಗೂ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದ ಅವರು, ಸಂವಿಧಾನವೇ ನಮ್ಮ ಧರ್ಮ. ರಾಜಕೀಯ ಧರ್ಮ ಅನುಸರಿಸುವುದೇ ಸಂವಿಧಾನಕ್ಕೆ ಕೊಡುವ ಗೌರವ. ಸುದೀರ್ಘ ಮತ್ತು ಅರ್ಥಪೂರ್ಣ ಚರ್ಚೆಯ ಬಳಿಕ ನಮ್ಮ ಈ ಸಂವಿಧಾನ ಜಾರಿಯಾಗಿದೆ. ಆದ್ದರಿಂದ ಈ ಸಂವಿಧಾನವನ್ನು ಗೌರವಿಸುವುದು, ಪಾಲಿಸುವುದು ಎಲ್ಲಾ ರಾಜಕೀಯ ಪಕ್ಷಗಳ, ವ್ಯಕ್ತಿಗಳ ಕರ್ತವ್ಯ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಇದನ್ನೂ ಓದಿ | Wood Smuggling: ವಿಕ್ರಮ್ ಸಿಂಹ ಕೇಸ್‌ನಲ್ಲಿ ಕಾನೂನು ಪ್ರಕಾರ ಕ್ರಮ: ಸಿಎಂ ಸಿದ್ದರಾಮಯ್ಯ

ಅವಕಾಶ ವಂಚಿತರ ಪರವಾಗಿ, ಧ್ವನಿ ಇಲ್ಲದವರ ಪರವಾಗಿ ದ್ವನಿ ಎತ್ತಿ ಬೆಂಬಲಿಸುವುದು, ವಸ್ತುನಿಷ್ಠವಾಗಿ ಸುದ್ದಿಗಳನ್ನು ವರದಿ ಮಾಡುವುದು ಪತ್ರಿಕಾ ವೃತ್ತಿಯ ಮೂಲಭೂತ ಮೌಲ್ಯ. ಈ ಮೌಲ್ಯಗಳನ್ನು ಪಾಲಿಸುವುದೇ ಸಂವಿಧಾನಕ್ಕೆ ಕೊಡುವ ಗೌರವ. ಇದನ್ನು ಬಿಟ್ಟು ನನ್ನ ಕಾರಿನ ಮೇಲೆ ಕಾಗೆ ಕುಳಿತದ್ದನ್ನು ದೊಡ್ಡ ಚರ್ಚೆ ಮಾಡಿ ಮೌಡ್ಯ ಬೆಳೆಸಿದಂತಹ ರೀತಿಯಲ್ಲಿ ಕೆಲಸ ಮಾಡಬೇಡಿ ಎಂದು ಕಿವಿ ಮಾತು ಹೇಳಿದರು.

ಯಾವುದೇ ಸರ್ಕಾರ ತಪ್ಪು ಮಾಡಿದರೂ ಅದನ್ನು ಹೇಳುವ ಧೈರ್ಯ ಪತ್ರಕರ್ತರಿಗೆ ಇರಬೇಕು. ಸ್ವಾತಂತ್ರ್ಯಪೂರ್ವದಲ್ಲಿ ದೇಶದ ಅಭಿವೃದ್ಧಿಯ ಚರ್ಚೆ ಮತ್ತು ಕನಸು ಇತ್ತು. ಈಗ ಮಾಧ್ಯಮ ಉದ್ಯಮಿಗಳ ಕೈಗೆ ಸಿಕ್ಕಿಕೊಂಡಿದೆ. ಉದ್ಯಮಿಗಳಿಗೆ ಸಮಾಜಮುಖಿಯಾದ ಯಾವ ಕಾಳಜಿಗಳೂ ಇರುವುದಿಲ್ಲ. ಈ ಬಗ್ಗೆ ಪತ್ರಕರ್ತ ಸಮೂಹ ಎಚ್ಚರ ವಹಿಸಬೇಕು ಎಂದರು.

ನನ್ನನ್ನು ಜೆಡಿಎಸ್‌ನಿಂದ ಉಚ್ಚಾಟಣೆ ಮಾಡಿದರೇ ಹೊರತು ನಾನು ಜೆಡಿಎಸ್ ಬಿಡಲಿಲ್ಲ. ಹೀಗಾಗಿ ವರದಿ, ವಿಶ್ಲೇಷಣೆ ಮಾಡುವಾಗ ನಾನು ಜೆಡಿಎಸ್ ಪಕ್ಷ ತೊರೆದೆ ಎಂದು ಬರೆಯುವುದು ಸರಿಯಲ್ಲ ಎಂದರು.

ಇದನ್ನೂ ಓದಿ | Ram Mandir: ರಾಮ ಮಂದಿರ ಕಟ್ಟಿರುವುದು ಸಂತೋಷದ ವಿಷಯ ಎಂದ ಸಿದ್ದರಾಮಯ್ಯ!

ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್, ಉಪ ಮುಖ್ಯಮಂತ್ರಿಗಳ ಮಾಧ್ಯಮ ಸಂಯೋಜಕರಾದ ತ್ಯಾಗರಾಜ್ ಸೇರಿ ಹಲವು ಪ್ರಮುಖರು ವೇದಿಕೆಯಲ್ಲಿದ್ದರು.

ಪ್ರೆಸ್‌ಕ್ಲಬ್ ಜೀವಮಾನ ಸಾಧನೆ ಪ್ರಶಸ್ತಿ ಪರಸ್ಕೃತರು

Exit mobile version