ಆನೇಕಲ್: ಬೆಂಗಳೂರು ಹೊರವಲಯದ ಆನೇಕಲ್‌ನಲ್ಲಿ ಆರು ಮಂದಿ ರೋಗಿಗಳಲ್ಲಿ ಝಿಕಾ ವೈರಸ್ (Zika Virus) ಪತ್ತೆಯಾಗಿದೆ. ಜಿಗಣಿ ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯಲ್ಲಿ ಸೋಂಕು ಕಾಣಿಸಿಕೊಂಡಿದೆ.
ಆರು ಮಂದಿಗೆ ಚಳಿ, ಜ್ವರ ಮತ್ತು ಮೈಕೈ ನೋವಿನಿಂದ ಡೆಂಗ್ಯೂ ಜ್ವರದ ಲಕ್ಷಣಗಳು ಕಾಣಿಸಿಕೊಂಡಿದ್ದವು. ಡೆಂಗ್ಯೂ ರ‍್ಯಾಂಡಮ್ ಟೆಸ್ಟ್ ವೇಳೆ ಝಿಕಾ ವೈರಸ್ ಪತ್ತೆಯಾಗಿದೆ. ಸದ್ಯ ಮನೆಯಲ್ಲಿ ಎಲ್ಲರೂ ವಿಶ್ರಾಂತಿ ಪಡೆಯುತ್ತಿದ್ದಾರೆ. ಝಿಕಾ ವೈರಸ್ ಪತ್ತೆ ಹಿನ್ನೆಲೆ ಅಗತ್ಯ ಮುಂಜಾಗ್ರತಾ ಕ್ರಮಕೈಗೊಳ್ಳಲಾಗಿದೆ.
ಜಿಗಣಿ ಪ್ರಾಥಮಿಕ ಆರೋಗ್ಯ ಕೇಂದ್ರದ 3 ಕಿ.ಮೀ ರೇಡಿಯಸ್ ಕಂಟೋನ್ಮೆಂಟ್ ಝೋನ್ ಎಂದು ಘೋಷಣೆ ಮಾಡಲಾಗಿದೆ. ಸೊಳ್ಳೆಗಳ ಸಂತಾನೋತ್ಪತ್ತಿ ಆಗದಂತೆ ಕ್ರಮವಹಿಸಲಾಗಿದ್ದು, ಫಾಗಿಂಗ್, ಲಾರ್ವ ನಾಶ ಸೇರಿದಂತೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲಾಗುತ್ತಿದೆ ಎಂದು ತಾಲೂಕು ಆರೋಗ್ಯ ಅಧಿಕಾರಿ ಡಾ ರವಿ ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ:Karnataka Weather : ಭಾರಿ ಮಳೆ ಎಫೆಕ್ಟ್; ಹಳ್ಳ ದಾಟಲು ಹೋಗಿ ಕೊಚ್ಚಿ ಹೋದ 20ಕ್ಕೂ ಹೆಚ್ಚು ಕುರಿಗಳು
ರೋಗದ ಲಕ್ಷಣಗಳೇನು?
ಕಣ್ಣು ಕೆಂಪಾಗುವಿಕೆ, ತಲೆ ನೋವು, ವಿಪರೀತ ಜ್ವರ, ಕೀಲುಗಳಲ್ಲಿ ನೋವು, ಗಂಧೆಗಳು, ಸ್ನಾಯುಗಳಲ್ಲಿ ನೋವು ಕಾಣಿಸಿಕೊಳ್ಳಲಿದೆ.
ಝಿಕಾ ವೈರಸ್ ತಡೆಗಟ್ಟಲು ಏನು ಮಾಡಬೇಕು?
1) ನೀರು ಶೇಖರಣಾ ಪರಿಕರಗಳನ್ನು (ಟ್ಯಾಂಕ್, ಟಬ್ ಇತ್ಯಾದಿ) ಮುಚ್ಚಿಡಬೇಕು. ಅಲ್ಲದೆ, ವಾರಕ್ಕೊಮ್ಮೆ ಅವುಗಳನ್ನು ಸ್ವಚ್ಛಗೊಳಿಸಬೇಕು.
2) ಮನೆಯ ಸುತ್ತ-ಮುತ್ತ ನೀರು ನಿಲ್ಲದಂತೆ ಎಚ್ಚರವಹಿಸಬೇಕು. ಜತೆಗೆ ಘನತ್ಯಾಜ್ಯ ವಸ್ತುಗಳನ್ನು ಸೂಕ್ತ ರೀತಿಯಲ್ಲಿ ವಿಲೇವಾರಿ ಮಾಡಬೇಕು.
3) ಸ್ವಯಂ ರಕ್ಷಣಾ ವಿಧಾನಗಳನ್ನು ಅನುಸರಿಸಿ, ಮಕ್ಕಳು, ವಯೋವೃದ್ಧರು ವಿಶ್ರಾಂತಿ ಪಡೆಯುವಾಗ ಸೊಳ್ಳೆ ಪರದೆ, ಸೊಳ್ಳೆ ನಿರೋಧಕಗಳನ್ನು ಬಳಸಬೇಕು.
4) ಸೊಳ್ಳೆಗಳು ಸಾಮಾನ್ಯವಾಗಿ ಸಂತಾನೋತ್ಪತ್ತಿ ಮಾಡುವುದು ನಿಂತ ನೀರಲ್ಲಿ ಎಂಬುದು ಎಲ್ಲರಿಗೂ ತಿಳಿದಿರುವ ವಿಚಾರ. ಹೀಗಾಗಿ ಮನೆಯ ಸುತ್ತಲೂ ನೀರು ನಿಲ್ಲದಂತೆ ಮುಂಜಾಗ್ರತೆ ವಹಿಸಬೇಕು.
5) ಪ್ರತಿಯೊಬ್ಬ ವ್ಯಕ್ತಿಯೂ ಮುನ್ನೆಚ್ಚರಿಕೆಗಳನ್ನು ತೆಗೆದುಕೊಂಡರೆ, ವೈರಸ್ ಹರಡುವ ಸಾಧ್ಯತೆ ಕಡಿಮೆಯಾಗುತ್ತದೆ.
ರೋಗ ಲಕ್ಷಣಗಳು ಸೌಮ್ಯ ಹಾಗೂ ಸಾಧಾರಣ ಸ್ವರೂಪವಾಗಿದ್ದು, 2 ರಿಂದ 7 ದಿನಗಳವರೆಗೆ ಇರುತ್ತದೆ. ಗರ್ಭಿಣಿಯರು ವಿಶೇಷವಾಗಿ ಎಚ್ಚರಿಕೆ ವಹಿಸಬೇಕು. ರೋಗ ಲಕ್ಷಣಗಳಿಗೆ ಅನುಗುಣವಾಗಿ ಚಿಕಿತ್ಸೆ ನೀಡಲಾಗುತ್ತದೆ.
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ