ಬೆಂಗಳೂರು: ರಾಜಧಾನಿಯಲ್ಲಿ ಟ್ರಾಫಿಕ್ ಪೊಲೀಸರು ಎಲ್ಲೆಂದರಲ್ಲಿ ವಾಹನಗಳನ್ನು ತಡೆದು ಪರಿಶೀಲನೆ ನಡೆಸುವಂತಿಲ್ಲ ಎಂದು ಬೆಂಗಳೂರು ನಗರ ಸಂಚಾರ ಪೊಲೀಸರಿಗೆ ಸೂಚನೆ ನೀಡಲಾಗಿದೆ. ಡಿಜಿ ಹಾಗೂ ಐಜಿಪಿ ಪ್ರವೀಣ್ ಸೂದ್ ಟ್ವೀಟ್ ಮೂಲಕ ಈ ಸೂಚನೆ ನೀಡಿದ್ದಾರೆ.
ರಾಜಧಾನಿಯ ಟ್ರಾಫಿಕ್ ಸಮಸ್ಯೆ (Bangalore Traffic) ನಿರ್ವಹಣೆಯ ಕುರಿತು ಚರ್ಚಿಸಲು ಮಹತ್ವದ ಸಭೆ ನಡೆಸಲಾಗಿದ್ದು, ಆ ಬಳಿಕ ಈ ಸೂಚನೆ ನೀಡಲಾಗಿದೆ.
ಸಂಚಾರಿ ಪೊಲೀಸರು ಸಾರ್ವಜನಿಕರ ವಾಹನಗಳನ್ನು ಪರಿಶೀಲಿಸುವ ನಿಟ್ಟಿನಲ್ಲಿ ಎಲ್ಲೆಂದರಲ್ಲಿ ಗಾಡಿಗೆ ಕೈ ಅಡ್ಡಹಾಕಿ ನಿಲ್ಲಿಸುತ್ತಿದ್ದಾರೆ ಎಂದು ಸಾರ್ವಜನಿಕರು ದೂರು ನೀಡಿದ್ದರು. ಈ ಬಗ್ಗೆ ಪೊಲೀಸ್ ಆಯುಕ್ತ ಪ್ರವೀಣ್ ಸೂದ್ ಪೊಲೀಸರಿಗೆ ಸೂಚನೆ ನೀಡಿದ್ದಾರೆ. ಡ್ರಂಕ್ & ಡ್ರೈವ್ ಮಾಡುವವರ ಪರಿಶೀಲನೆ ನಡೆಸಬಹುದು ಹಾಗೂ ತಕ್ಷಣ ಟ್ರಾಫಿಕ್ ನಿಯಮ ಉಲ್ಲಂಘಿಸಿದ್ದು ಮೇಲ್ನೋಟಕ್ಕೆ ಸಾಬೀತಾಗಿದ್ದರೆ ಅಂಥವರನ್ನು ತಡೆಯಬಹುದು ಹೊರತಾಗಿ ಎಲ್ಲೆಂದರಲ್ಲಿ ವಾಹನ ತಡೆದು ದಾಖಲೆ ಪರಿಶೀಲಿಸುವಂತಿಲ್ಲ ಎಂದು ಪ್ರವೀಣ್ ಸೂದ್ ತಿಳಿಸಿದ್ದಾರೆ.
ಇದಕ್ಕೆ ಪ್ರತಿಕ್ರಿಯಿಸಿದ ಬೆಂಗಳೂರು ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ, ಸಾರ್ವಜನಿಕರು ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸೂಚನೆ ನೀಡಿದ್ದಾರೆ. ಅಲ್ಲದೆ, ನಿಯಮ ಉಲ್ಲಂಘನೆ ಆಗಿದ್ದು ಕಂಡುಬಂದಲ್ಲಿ ಕಠಿಣ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.
ಬೆಂಗಳೂರಿನಲ್ಲಿ ಟ್ರಾಫಿಕ್ ಸಮಸ್ಯೆ ಹೆಚ್ಚಾಗುತ್ತಿದ್ದು ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲು ಪ್ರವೀಣ್ ಸೂದ್ ಹಾಗೂ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್ ಗೋಯಲ್ ಸಮ್ಮುಖದಲ್ಲಿ ಸಭೆ ನಡೆಸಲಾಯಿತು. ಸಂಚಾರ ದಟ್ಟಣೆ ನಿರ್ವಹಣೆಯ ಕುರಿತು ಸುದೀರ್ಘ ಚರ್ಚೆ ನಡೆಸಲಾಯಿತು. ಈ ವೇಳೆ ನಗರಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ, ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಅಧ್ಯಕ್ಷ ಜಯರಾಂ, ಬಿಎಂಆರ್‌ಸಿಎಲ್‌ನ ಎಂಡಿ ಅಂಜುಂ ಪರ್ವೇಜ್, ಬಿಡಿಎ ಆಯುಕ್ತ ರಾಜೇಶ್ ಗೌಡ, ಸಂಚಾರಿ ಪೊಲೀಸ್ ಜಂಟಿ ಆಯುಕ್ತ ರವಿಕಾಂತೇ ಗೌಡ, ಸ್ಮಾರ್ಟ್ ಸಿಟಿ ಎಂಡಿ ರಾಜೇಂದ್ರ ಚೋಳನ್, ಬಿಎಂಟಿಸಿ ನಿರ್ದೇಶಕ ಸೂರ್ಯಸೇನ್ ಸೇರಿದಂತೆ ಪ್ರಮುಖ ಅಧಿಕಾರಿಗಳು ಭಾಗಿಯಾಗಿದ್ದರು.
ಇದನ್ನೂ ಓದಿ: ಬೆಂಗಳೂರಿನಲ್ಲಿ ಇನ್ನೂ 4 ಹೊಸ ಫ್ಲೈಓವರ್; ಕಡಿಮೆ ಆಗಲಿದೆಯೇ ಟ್ರಾಫಿಕ್ ಕಿರಿಕಿರಿ?