Site icon Vistara News

ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ತ್ವರಿತ ಅನುಮತಿ ನೀಡಿ: ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್

ಗಣೇಶ ಮೂರ್ತಿ

ಬೆಂಗಳೂರು: ನಗರದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪಿಸಲು ಬರುವ ಅರ್ಜಿಗಳನ್ನು ಪರಿಶೀಲಿಸಿ ತ್ವರಿತವಾಗಿ ಅನುಮತಿ ನೀಡಲು ಅಧಿಕಾರಿಗಳಿಗೆ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಸೂಚನೆ ನೀಡಿದರು.

ಗಣೇಶ ಚತುರ್ಥಿ ಆಚರಣೆ ಸಂಬಂಧ ಶುಕ್ರವಾರ ನಡೆದ ವರ್ಚುವಲ್ ಸಭೆಯಲ್ಲಿ ಮಾತನಾಡಿದ ಅವರು, ಗಣೇಶೋತ್ಸವ ಆಚರಣೆಗೆ ಅನುಕೂಲವಾಗುವ ದೃಷ್ಟಿಯಿಂದ ಬಿಬಿಎಂಪಿ, ಬೆಸ್ಕಾಂ, ಪೊಲೀಸ್ ಹಾಗೂ ಅಗ್ನಿಶಾಮಕ ಇಲಾಖೆಯನ್ನೊಳಗೊಂಡ ಅಧಿಕಾರಿಗಳು 63 ಉಪ ವಿಭಾಗಗಳಲ್ಲಿ ಏಕಗವಾಕ್ಷಿ ಪದ್ಧತಿಯಲ್ಲಿ ಅನುಮತಿ ನೀಡುವ ವ್ಯವಸ್ಥೆ ಕಲ್ಪಿಸಿದ್ದು, ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಬಂದಂತಹ ಅರ್ಜಿಗಳನ್ನು ಪರಿಶೀಲಿಸಿ ತ್ವರಿತವಾಗಿ ಅನುಮತಿ ನೀಡಲು ಸೂಚನೆ ನೀಡಿದರು.

ನಗರದಲ್ಲಿ ಗಣೇಶ ಮೂರ್ತಿಗಳನ್ನು ವಿಸರ್ಜಿಸುವ ಪ್ರಮುಖ ಕಲ್ಯಾಣಿಗಳಾದ ಹಲಸೂರು, ಯಡಿಯೂರು, ಸ್ಯಾಂಕಿ, ಹೆಬ್ಬಾಳ ಸೇರಿ ಇನ್ನಿತರ ಪ್ರಮುಖ ಕಲ್ಯಾಣಿಗಳನ್ನು ಸ್ವಚ್ಛತೆ ಮಾಡಿ ಎಲ್ಲ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು. ಕಲ್ಯಾಣಿಗಳ ಬಳಿ ಪ್ರತ್ಯೇಕ ತಂಡಗಳನ್ನು ನಿಯೋಜಿಸಿಕೊಳ್ಳಿ ಹಾಗೂ ನುರಿತ ಈಜುಗಾರರಿರಬೇಕು. ಮುಂಜಾಗ್ರತಾ ಕ್ರಮವಾಗಿ ಎಸ್‌ಡಿಆರ್‌ಎಫ್ ಹಾಗೂ ಅಗ್ನಿಶಾಮಕ ವಾಹನ ಹಾಗೂ ಅಗತ್ಯ ಸಿಬ್ಬಂದಿ ವ್ಯವಸ್ಥೆ ಕಲ್ಪಿಸಲು ಕೂಡಲೇ ಪತ್ರ ಬರೆಯಬೇಕು ಯೋಜನಾ ವಿಭಾಗದ ವಿಶೇಷ ಆಯುಕ್ತರಿಗೆ ಸೂಚನೆ ನೀಡಿದರು.

ಇದನ್ನೂ ಓದಿ | ಚಾಮರಾಜ ಪೇಟೆ ಮೈದಾನದಲ್ಲಿ ಗಣೇಶ ಹಬ್ಬಕ್ಕೆ ಗ್ರೀನ್‌ ಸಿಗ್ನಲ್‌: ಸರಕಾರದ ವಿವೇಚನೆಗೆ ಬಿಟ್ಟದ್ದು ಎಂದ ಹೈಕೋರ್ಟ್‌

ಗಣೇಶ ಮೂರ್ತಿಗಳನ್ನು ವಿಸರ್ಜನೆ ಮಾಡುವ ವೇಳೆ ಗಣೇಶ ಮೂರ್ತಿಗಳಿಗೆ ಯಾವುದೇ ರೀತಿಯ ವಿಘ್ನ, ಲೋಪವಾಗದಂತೆ ವಿಸರ್ಜಿಸಲು ಹೆಚ್ಚುವರಿ ಸಿಬ್ಬಂದಿಯನ್ನು ನಿಯೋಜನೆ ಮಾಡಿಕೊಳ್ಳಬೇಕು. ವಿಸರ್ಜನಾ ಸ್ಥಳದಲ್ಲಿ ಭದ್ರತಾ ಧೃಷ್ಟಿಯಿಂದ ಪಾಲಿಕೆ ಅಧಿಕಾರಿಗಳು, ಮಾರ್ಷಲ್‌ಗಳ ನಿಯೋಜನೆ, ಬ್ಯಾರಿಕೇಡಿಂಗ್, ದೀಪಗಳ ಅಳವಡಿಕೆ, ಸಿಸಿ ಟಿವಿ, ಕ್ರೇನ್ ಮತ್ತಿತರ ಅಗತ್ಯ ವ್ಯವಸ್ಥೆಗಳನ್ನು ಮಾಡಿಕೊಂಡು ಯಾವುದೇ ರೀತಿಯ ಸಮಸ್ಯೆಯಾಗದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಸೂಚಿಸಿದರು.

ಕಲ್ಯಾಣಿಗಳ ವ್ಯವಸ್ಥೆ ಇಲ್ಲದಿರುವ ಕಡೆ ಹೆಚ್ಚುವರಿಯಾಗಿ ತಾತ್ಕಾಲಿಕ ಮೊಬೈಲ್ ಟ್ಯಾಂಕರ್‌ಗಳ ವ್ಯವಸ್ಥೆ ಮಾಡಿಕೊಳ್ಳಬೇಕು. ಗಣೇಶ ಮೂರ್ತಿಗಳನ್ನು ವಿಸರ್ಜನೆ ಮಾಡಲು ತೆರಳುವ ಮಾರ್ಗದಲ್ಲಿ ವಿದ್ಯುತ್ ದೀಪಗಳು ಸರಿಯಾಗಿರುವಂತೆ ನೋಡಿಕೊಳ್ಳಬೇಕು. ವಿಸರ್ಜನಾ ಸ್ಥಳದಲ್ಲಿ ಸಂಗ್ರಹವಾಗುವ ತ್ಯಾಜ್ಯವನ್ನು ಘನತ್ಯಾಜ್ಯ ವಿಭಾಗದಿಂದ ತ್ವರಿತವಾಗಿ ವಿಲೇವಾರಿ ಮಾಡಲು ಸೂಚನೆ ನೀಡಿದರು.

ಬಿಬಿಎಂಪಿ ವ್ಯಾಪ್ತಿಯಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪಿಸಿಲು 63 ಉಪ ವಿಭಾಗಗಳಲ್ಲಿ ಏಕಗವಾಕ್ಷಿ ಕೇಂದ್ರಗಳು ಹಾಗೂ ಗಣೇಶ ಮೂರ್ತಿ ವಿಸರ್ಜನೆ ಮಾಡುವ ಸಲುವಾಗಿ 421 ತಾತ್ಕಾಲಿಕ ಮೊಬೈಲ್ ಟ್ಯಾಂಕ್ ಮತ್ತು 37 ತಾತ್ಕಾಲಿಕ ಕಲ್ಯಾಣಿಗಳ ವ್ಯವಸ್ಥೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.

ಸಭೆಯಲ್ಲಿ ವಲಯ ಆಯುಕ್ತರು, ವಲಯ ಜಂಟಿ ಆಯುಕ್ತರು, ಆಡಳಿತದ ವಿಭಾಗದ ಉಪ ಆಯುಕ್ತರು, ಮುಖ್ಯ ಅಭಿಯಂತರರು ಹಾಗೂ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.

ಇದನ್ನೂ ಓದಿ | ಚಾಮರಾಜಪೇಟೆ ಮೈದಾನ | 3 ದಿನ ಅದ್ಧೂರಿ ಗಣೇಶೋತ್ಸವ ಆಚರಣೆಗೆ ನಾಗರಿಕ ವೇದಿಕೆ ಒಕ್ಕೂಟ ರೆಡಿ

Exit mobile version