ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC) ಯಲ್ಲಿನ 2,500 ನಿರ್ವಾಹಕ ಹುದ್ದೆಗಳಿಗೆ ಭಾನುವಾರ (ಸೆ.1) ರಾಜ್ಯದ ಆರು ಜಿಲ್ಲೆಗಳ 50 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, ಈ ಸಲುವಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸಕಲ ಸಿದ್ಧತೆ ಮಾಡಿಕೊಂಡಿದೆ.
ಹೈದರಾಬಾದ್ ಕರ್ನಾಟಕದವರಿಗಾಗಿ ಜುಲೈ 14 ರಂದು ಪರೀಕ್ಷೆ ನಡೆಸಲಾಗಿತ್ತು. ಹೈದರಾಬಾದ್ ಕರ್ನಾಟಕವಲ್ಲದ ಇತರರಿಗೆ ಭಾನುವಾರ ಪರೀಕ್ಷೆ ನಡೆಯಲಿದ್ದು, ಕಟ್ಟುನಿಟ್ಟಿನ ನಿಗಾಕ್ಕೆ ಕ್ರಮ ತೆಗೆದುಕೊಳ್ಳಲಾಗಿದೆ. ಇದರಲ್ಲಿ ಹೈದರಾಬಾದ್ ಕರ್ನಾಟಕದವರೂ ಬರೆಯಬಹುದು ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಈ ಪರೀಕ್ಷೆಗೆ 23,000 ಮಂದಿ ಅರ್ಜಿ ಸಲ್ಲಿಸಿದ್ದಾರೆ. ಅಭ್ಯರ್ಥಿಗಳಿಗೆ ಡ್ರೆಸ್ ಕೋಡ್ ಇದ್ದು ಆ ಪ್ರಕಾರವೇ ಎಲ್ಲರೂ ಪರೀಕ್ಷೆಗೆ ಹಾಜರಾಗಬೇಕು ಎಂದು ಅವರು ಸೂಚಿಸಿದ್ದರೆ. ಬೆಂಗಳೂರು, ಬಳ್ಳಾರಿ, ಧಾರವಾಡ, ಕಲ್ಬುರ್ಗಿ, ದಾವಣಗೆರೆ, ಮಂಡ್ಯ ಜಿಲ್ಲೆಗಳಲ್ಲಿ ಪರೀಕ್ಷೆ ನಡೆಯಲಿದೆ. ಬೆಳಿಗ್ಗೆ ಮತ್ತು ಮಧ್ಯಾಹ್ನ ಎರಡು ಪತ್ರಿಕೆಗಳಿಗೆ ಪರೀಕ್ಷೆ ನಡೆಯಲಿದೆ ಎಂದು ಅವರು ವಿವರಿಸಿದ್ದಾರೆ.