Site icon Vistara News

Brand Bengaluru: ನಿಮ್ಮ ಬೆಂಗಳೂರು ಹೇಗಿರಬೇಕು ನೀವೇ ತಿಳಿಸಿ: ಸರ್ಕಾರಕ್ಕೆ ಸಲಹೆ ನೀಡಲು ಇನ್ನು 9 ದಿನ ಮಾತ್ರ ಬಾಕಿ!

Brand Bengaluru portal 1

#image_title

ಬೆಂಗಳೂರು: ರಾಜಧಾನಿ ಬೆಂಗಳೂರು ಇಡೀ ವಿಶ್ವದಲ್ಲೇ ಪ್ರಸಿದ್ಧಿ ಪಡೆದಿದ್ದರೂ ಇಲ್ಲಿನ ಸಮಸ್ಯೆಗಳಿಗೆ ಲೆಕ್ಕವಿಲ್ಲ. ಮಳೆ ಬಂದರೆ ಸಾಕು ತುಂಬಿಕೊಳ್ಳುವ ನೀರು, ಸದಾ ಸಂಚಾರ ದಟ್ಟಣೆ, ರಿಯಲ್‌ ಎಸ್ಟೇಟ್‌ ಸಮಸ್ಯೆ ಸೇರಿ ಅನೇಕ ದೋಷಗಳಿಂದ ಜನರು ಬಸವಳಿದಿದ್ದಾರೆ. ಬೆಂಗಳೂರು ಹೇಗಿರಬೇಕು (Brand Bengaluru) ಎಂಬ ಮಾಸ್ಟರ್‌ ಪ್ಲಾನ್‌ ರೂಪಿಸುವ ಮುನ್ನ ಸಾರ್ವಜನಿಕರಿಂದ ಸಲಹೆಗಳನ್ನು ಸರ್ಕಾರ ಆಹ್ವಾನಿಸಿದೆ.

ಬೆಂಗಳೂರಿನ ಅಭಿವೃದ್ಧಿ ವಿಚಾರದಲ್ಲಿ ಸಲಹೆ ನೀಡಲು ಈಗಾಗಲೆ ಉದ್ಯಮಿಗಳು ಸಂಘ ಸಂಸ್ಥೆಗಳು, ಸೆಲೆಬ್ರಿಟಿಗಳು, ತಜ್ಞರು, ಕ್ರೀಡಾಪಟುಗಳಿಂದ ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆದ ಡಿಸಿಎಂ ಡಿ.ಕೆ. ಶಿವಕುಮಾರ್‌ ಸಲಹೆ ಪಡೆದಿದ್ದಾರೆ. ಇದಕ್ಕೆ ಪೂರಕವಾಗಿ ಸಾರ್ವಜನಿಕರಿಂದಲೂ ಸಲಹೆಗಳನ್ನು ಪಡೆಯಲು ಸರ್ಕಾರ ಮುಂದಾಗಿದೆ. ಬೆಂಗಳೂರಿನ ನಾಗರಿಕರು ಸೇರಿ ಹಾಗೂ ವಿದೇಶದಲ್ಲಿರುವ ಕನ್ನಡಿಗರು ಸಹ ಬೆಂಗಳೂರಿನ ಅಭಿವೃದ್ಧಿ ವಿಚಾರವಾಗಿ ತಮ್ಮ ಸಲಹೆಗಳನ್ನು ನೀಡಲು www.brandbengaluru.karnataka.gov.in ವೆಬ್‌ಸೈಟ್‌ ರೂಪಿಸಲಾಗಿದೆ. ಇಲ್ಲಿ ಜೂನ್ 30ರ ಒಳಗಾಗಿ ಸಲಹೆ ನೀಡಲು ಅವಕಾಶವಿದೆ. ಈ ಲಿಂಕ್‌ ಒತ್ತಿದರೆ ಅಲ್ಲಿ ಮೊಬೈಲ್‌ ಸಂಖ್ಯೆ ನಮೂದಿಸಲು ತಿಳಿಸಲಾಗುತ್ತದೆ. ಮೊಬೈಲ್‌ಗೆ ಆಗಮಿಸಿದ ಒಟಿಪಿ ನಮೂದಿಸಿದರೆ ಸಲಹೆಗಳ ಪುಟ ತೆರೆದುಕೊಳ್ಳುತ್ತದೆ.

ಅದರಲ್ಲಿ ಸಂಚಾರಯುಕ್ತ ಬೆಂಗಳೂರು, ಹಸಿರು ಬೆಂಗಳೂರು, ಜನಹಿತ ಬೆಂಗಳೂರು, ಸ್ವಚ್ಛ ಬೆಂಗಳೂರು, ಆರೋಗ್ಯಕರ ಬೆಂಗಳೂರು, ಜಲ ಸಂರಕ್ಷಾ ಬೆಂಗಳೂರು, ಟೆಕ್ ಬೆಂಗಳೂರು ವಿಭಾಗಗಳಲ್ಲಿ ಸಲಹೆಗೆ ಅವಕಾಶ ನೀಡಲಾಗಿದೆ. ಕೆಲವು ಆಯ್ಕೆಗಳನ್ನು ನೀಡಲಾಗಿದ್ದು, ಅದರ ಜತೆಗೆ ನೂತನ ಸಲಹೆಗಳನ್ನೂ ನೀಡಲು ಸಾಧ್ಯವಿದೆ.

ವಾಹನ ಸಂಚಾರ ದಟ್ಟಣೆ, ಮೆಟ್ರೋ ಸಂಪರ್ಕ ವಿಸ್ತರಣೆ, ಮೊನೊ ರೈಲು, ಉಪನಗರ ರೈಲು, ರಸ್ತೆ ಅಗಲೀಕರಣ, ಎಲಿವೇಟೆಡ್ ರಸ್ತೆ, ನೈಸ್ ರಸ್ತೆಯನ್ನು ವರ್ತುಲ ರಸ್ತೆ ಆಗಿ ಮಾರ್ಪಾಡು ಮಾಡುವುದು, ನಗರದಲ್ಲಿ ಸುರಂಗ ರಸ್ತೆಗಳ ನಿರ್ಮಾಣದಂತಹ ಅನೇಕ ಸಲಹೆಗಳೂ ಈಗಾಗಲೆ ತಜ್ಞರ ಸಭೆಯಿಂದ ಹೊರಹೊಮ್ಮಿವೆ.

ಸ್ವಚ್ಛತೆ, ಪರಿಸರ ವಿಚಾರದಲ್ಲಿ ಕಸ ವಿಲೇವಾರಿ ಹಾಗೂ ಕೊಳಚೆ ನೀರು ನಿರ್ವಹಣೆ, ಕೊಳಚೆ ನೀರು ಪರಿಷ್ಕರಣೆ ಮತ್ತು ಮರುಬಳಕೆ, ಕಾವೇರಿ ನೀರು ಪೂರೈಕೆ, ಕೊಳಗೇರಿ ಪ್ರದೇಶ ಅಭಿವೃದ್ಧಿ ಸೇರಿದಂತೆ ದಕ್ಷ ಆಡಳಿತ, ಭ್ರಷ್ಟಾಚಾರ ನಿಯಂತ್ರಣದ ಬಗ್ಗೆಯೂ ಅನೇಕರು ಸಲಹೆ ನೀಡಿದ್ದಾರೆ.

ಪೋರ್ಟಲ್‌ ಉದ್ಘಾಟನೆ ಮಾಡಿ ಮಾತನಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್‌,ಕೆಲವು ದೊಡ್ಡ ನಾಯಕರ ಮನೆಗೆ ಹೋಗಿ ಚರ್ಚೆ ಮಾಡಲು ತೀರ್ಮಾನಿಸಿದ್ದೇನೆ. ಮಾಜಿ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ್ದು, ಇನ್ನು ಕೆಲವರನ್ನು ಭೇಟಿ ಮಾಡಬೇಕು. ಬೊಮ್ಮಾಯಿ ಅವರ ಸಮಯ ಕೇಳಿದ್ದು, ಅವರು ಬ್ಯುಸಿ ಇದ್ದ ಕಾರಣ ಭೇಟಿ ಮಾಡಿಲ್ಲ. ಅವರ ವಿಚಾರಧಾರೆಗಳನ್ನು ತಿಳಿಯಬೇಕು. ಬೆಂಗಳೂರಿನ ಸಂಚಾರದಟ್ಟಣೆ ಬಗ್ಗೆ ಎಲ್ಲರೂ ಮಾತನಾಡುತ್ತಾರೆ. ಆದರೆ ಬೇರೆ ನಗರಗಳ ಬಗ್ಗೆ ಹೆಚ್ಚು ಮಾತನಾಡುವುದಿಲ್ಲ. ಕಾರಣ ಬೆಂಗಳೂರನ್ನು ಇಡೀ ವಿಶ್ವ ನೋಡುತ್ತಿದೆ.

ಬೆಂಗಳೂರಿನಲ್ಲಿ ಪಾದಚಾರಿ ಮಾರ್ಗದಲ್ಲಿ ಅಂಗಡಿ ಇಟ್ಟುಕೊಳ್ಳಲಾಗಿದೆ. ಈ ಬಗ್ಗೆ ಗಮನ ಹರಿಸಬೇಕು. ಸಂಚಾರ ದಟ್ಟಣೆ ವಿಚಾರವಾಗಿ ನಿವೃತ್ತ ಟ್ರಾಫಿಕ್ ಪೊಲೀಸರ ಅಭಿಪ್ರಾಯ ಪಡೆಯುತ್ತೇನೆ. ಅನುಭವದ ಆಧಾರದ ಮೇಲೆ ಬರುವ ಸಲಹೆಗಳಿಗೆ ಹೆಚ್ಚಿನ ತೂಕ ಇರುತ್ತದೆ. ಸುರಂಗ ಮಾರ್ಗ ನಿರ್ಮಾಣದ ಬಗ್ಗೆ ಸಲಹೆ ಬಂದಿದ್ದು, ನಮ್ಮ ರಾಜ್ಯದವರು ಮುಂಬೈನಲ್ಲಿ ಸುರಂಗ ರಸ್ತೆ ನಿರ್ಮಿಸುತ್ತಿದ್ದಾರೆ. ಪಕ್ಕದ ರಾಜ್ಯದವರು ಕಾಶ್ಮೀರದಲ್ಲಿ ಸುರಂಗ ಮಾರ್ಗ ನಿರ್ಮಿಸುತ್ತಿದ್ದಾರೆ. ಬೆಂಗಳೂರು ಅಭಿವೃದ್ಧಿಗೆ ರಾಜಕೀಯ ಇಚ್ಛಾಶಕ್ತಿ ಮುಖ್ಯ.

ರಸ್ತೆ ಗುಂಡಿ ವಿಚಾರವಾಗಿ ಪ್ರತ್ಯೇಕ ಯೋಜನೆ ರೂಪಿಸುತ್ತೇವೆ. ತ್ಯಾಜ್ಯ ವಿಲೇವಾರಿ ಕುರಿತು ಅಧಿಕಾರಿಗಳ ಸಭೆ ಮಾಡಿದ್ದೇನೆ. ಈ ಬಗ್ಗೆ ಉತ್ತಮ ನಿರ್ವಹಣೆ ಮಾಡುತ್ತಿರುವ ಸ್ಥಳಗಳಿಗೆ ಭೇಟಿ ನೀಡಿ ಅಧ್ಯಯನ ಮಾಡಲು ತೀರ್ಮಾನಿಸಿದ್ದೇವೆ. ಚೆನ್ನೈ, ಇಂದೋರ್ ಸೇರಿದಂತೆ ಅನೇಕ ಕಡೆಗಳಲ್ಲಿ ಉತ್ತಮ ತ್ಯಾಜ್ಯ ನಿರ್ವಹಣೆ ಬಗ್ಗೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ನಾವು ಈ ವಿಚಾರದಲ್ಲಿ ದೀರ್ಘಾವಧಿಯ ಯೋಜನೆ ರೂಪಿಸಿಕೊಳ್ಳಬೇಕು. ಕಾನೂನು ಮಿತಿ, ಭೂಪ್ರದೇಶದ ಮಿತಿಯಲ್ಲಿ ನಾವು ಯೋಜನೆ ರೂಪಿಸಬೇಕು.

ಕೇವಲ ಕಸ ತೆಗೆದುಕೊಂಡು ಹೋಗಿ ಸುರಿದರೆ ಆಗುವುದಿಲ್ಲ. ತ್ಯಾಜ್ಯದ ಬೆಟ್ಟ ನಿರ್ಮಿಸಿದರೆ ಸಮಸ್ಯೆ ಬಗೆಹರಿಯುವುದಿಲ್ಲ. ಇದು ಒಂದು ದಿನ ಅಥವಾ ವರ್ಷದಲ್ಲಿ ಬದಲಾವಣೆ ತರಲು ಆಗುವುದಿಲ್ಲ. ಆದರೂ ಕಾಲಮಿತಿ ನಿಗದಿ ಮಾಡಿಕೊಂಡು ಕೆಲಸ ಮಾಡಬೇಕಿದೆ. ಬೆಂಗಳೂರಿನ ಜನಸಂಖ್ಯೆ 1.30 ಕೋಟಿ ಇದೆ. 50 ಲಕ್ಷದಷ್ಟು ಮಂದಿ ಬೆಂಗಳೂರಿಗೆ ಬಂದು ಹೋಗುತ್ತಿದ್ದಾರೆ. ರಾಜ್ಯ ಹಾಗೂ ದೇಶಕ್ಕೆ ಬೆಂಗಳೂರಿನಿಂದ ಹೆಚ್ಚಿನ ಪ್ರಮಾಣದ ಹಣ ತೆರಿಗೆ ರೂಪದಲ್ಲಿ ಹೋಗುತ್ತಿದೆ. ಬೆಂಗಳೂರಿಗೆ ಉದ್ಯೋಗ, ಶಿಕ್ಷಣಕ್ಕಾಗಿ ಬಂದವರು ಮತ್ತೆ ತಮ್ಮ ಊರಿಗೆ ಹೋಗುತ್ತಿಲ್ಲ. ಇಲ್ಲೇ ನೆಲೆಸುತ್ತಿದ್ದಾರೆ.

ಹೀಗಾಗಿ ನಮ್ಮ ಪ್ರಣಾಳಿಕೆಯಲ್ಲಿ ಬೆಂಗಳೂರಿನ ಹೊರೆ ತಪ್ಪಿಸಲು 2-3ನೇ ದರ್ಜೆ ನಗರಗಳ ಅಭಿವೃದ್ಧಿ, ಎಲ್ಲಾ ಪಂಚಾಯ್ತಿ ಮಟ್ಟದಲ್ಲಿ ಉನ್ನತ ಗುಣಮಟ್ಟದ ಶಿಕ್ಷಣ ನೀಡುವ ಬಗ್ಗೆ ಕಾರ್ಯಕ್ರಮ ರೂಪಿಸಿದ್ದೇವೆ. ಕಳೆದ ಬಾರಿಯ ಬಜೆಟ್ ಅನ್ನು ಹೆಚ್ಚಿನ ಬದಲಾವಣೆ ಮಾಡಲು ಆಗುವುದಿಲ್ಲ. ಹೀಗಾಗಿ ಇದಕ್ಕೆ ಹೊಸ ರೂಪ ನೀಡಲು ಮುಖ್ಯಮಂತ್ರಿಗಳು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಪಾಲಿಕೆ ಮಟ್ಟದಲ್ಲಿ ಸಂಪನ್ಮೂಲ ಕ್ರೂಢೀಕರಣದ ಬಗ್ಗೆ ಪ್ರಶ್ನಿಸಿದಾಗ, ‘ನಾನು ಈ ವಿಚಾರವಾಗಿ ಚರ್ಚೆ ಮಾಡಿದ್ದೇನೆ. ಕೆಲವರು ತೆರಿಗೆ ವಂಚನೆ ಮಾಡುತ್ತಿದ್ದಾರೆ. ಇಂತಹ ಪ್ರಕರಣಗಳಲ್ಲಿ ಏನು ಮಾಡಬಹುದು ಎಂದು ಚರ್ಚೆ ಮಾಡುತ್ತಿದ್ದೇನೆ ಎಂದು ಡಿ.ಕೆ. ಶಿವಕುಮಾರ್‌ ತಿಳಿಸಿದರು.

Exit mobile version