Site icon Vistara News

CM Siddaramaiah: ಮನುಸ್ಮೃತಿ ಜಾರಿ ಹುನ್ನಾರ ನಡೀತಿದೆ; ಸಂವಿಧಾನ ಪೀಠಿಕೆ ವಾಚನದ ವೇಳೆ ಸಿದ್ಧರಾಮಯ್ಯ ಎಚ್ಚರಿಕೆ

CM Siddaramaiah Constitution reading programme

ಬೆಂಗಳೂರು: ಸಂವಿಧಾನ ವಿರೋಧಿ ಶಕ್ತಿಗಳು ಸಂವಿಧಾನವನ್ನು (Indian Constitution) ನಾಶಗೊಳಿಸಿ ಮತ್ತೆ ಮನುಸ್ಮೃತಿ ಜಾರಿಗೆ ಹುನ್ನಾರ ನಡೆಸುತ್ತಿವೆ. ಈ ಬಗ್ಗೆ ಎಚ್ಚರ ಮತ್ತು ಜಾಗೃತಿ ಇರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ನಾಡಿಗೆ ಕರೆ ನೀಡಿದ್ದಾರೆ. ಸಮಾಜ ಕಲ್ಯಾಣ ಇಲಾಖೆ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ (International Democracy day) ಅಂಗವಾಗಿ ವಿಧಾನಸೌಧದಲ್ಲಿ ಆಯೋಜಿಸಿದ್ದ ಭಾರತದ ಸಂವಿಧಾನ ಪೀಠಿಕೆಯ ಜಾಗತಿಕ ವಾಚನದ (Reading the Preamble of Constitution) ಕಾರ್ಯಕ್ರಮವನ್ನು ಸಂವಿಧಾನ ಪೀಠಿಕೆ ಓದುವ ಮೂಲಕ ಉದ್ಘಾಟಿಸಿ ಮಾತನಾಡಿದರು.

ಸಂವಿಧಾನದ ನಾಶ ಮತ್ತು ಮನುಸ್ಮೃತಿಯ ಜಾರಿ ಎಂದರೆ ಶೇ. 90ರಷ್ಟು ಭಾರತೀಯರನ್ನು ಮತ್ತೆ ಗುಲಾಮಗಿರಿಗೆ ತಳ್ಳುವುದಾಗಿದೆ. ಇದಕ್ಕಾಗಿ ಬಹಳ ಕುತಂತ್ರಗಳು ನಡೆಯುತ್ತಿವೆ ಎಂದು ಎಚ್ಚರಿಸಿದರು.

We the people of India ಎನ್ನುವ ಮೂಲಕವೇ ನಮ್ಮ ಸಂವಿಧಾನ ತೆರೆದುಕೊಳ್ಳುತ್ತದೆ. ಸಂವಿಧಾನದ ಆಶಯಗಳನ್ನು ಪರಿಣಾಮಕಾರಿಯಾಗಿ ಅರ್ಥೈಸಿಕೊಂಡು ಪಾಲಿಸದಿದ್ದರೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ ಎಂದು ಸಿದ್ದರಾಮಯ್ಯ ನುಡಿದರು.

ಸಂವಿಧಾನ ಶಿಲ್ಪಿಗಳ ಭಾವಚಿತ್ರಕ್ಕೆ ಪುಷ್ಪಾರ್ಚನೆ

ಸಂವಿಧಾನದ ಸಮ ಸಮಾಜ ಮತ್ತು ಜಾತ್ಯತೀತ ತತ್ವದ ಆಶಯಗಳಂತೆಯೇ ನಮ್ಮ ಸರ್ಕಾರ ಸರ್ವರ ಏಳಿಗೆಯ ಕಾರ್ಯಕ್ರಮಗಳನ್ನು ಜಾರಿ ಮಾಡಿದೆ. ಜನರ ಹಣವನ್ನು ಮತ್ತೆ ಜನರ ಬದುಕಿಗೇ ಮರಳಿಸುವುದು ನಮ್ಮ ಕಾರ್ಯಕ್ರಮಗಳ ಉದ್ದೇಶವಾಗಿದೆ ಎಂದು ಸಿದ್ದರಾಮಯ್ಯ ವಿವರಿಸಿದರು.

ಸಂವಿಧಾನ ಜಾರಿಯಾದ ಬಳಿಕ ಭಾರತದಲ್ಲಿ ಅಧಿಕೃತವಾಗಿ ಪ್ರಜಾಪ್ರಭುತ್ವ ವ್ಯವಸ್ಥೆ ಜಾರಿಯಾಯಿತು ಎಂದು ನೆನಪಿಸಿಕೊಂಡ ಸಿದ್ದರಾಮಯ್ಯ ಅವರು, ಬುದ್ಧ, ಬಸವ ಕಾಲದಿಂದಲೂ ಪ್ರಜಾಪ್ರಭುತ್ವ ವ್ಯವಸ್ಥೆ ನಮ್ಮ ನೆಲದಲ್ಲಿ ರೂಪುಗೊಂಡಿದೆ ಎಂದರು.

ಸಂವಿಧಾನ ಜಾರಿ ಆಗುವ ಸಂದರ್ಭದಲ್ಲಿ ಪಾರ್ಲಿಮೆಂಟಿನಲ್ಲಿ ನಡೆದ ಚರ್ಚೆಗಳು ನಮ್ಮ ಸಂವಿಧಾನದ ಮಹತ್ವಕ್ಕೆ ಮತ್ತು ಸಂವಿಧಾನ ವಿರೋಧಿಗಳ ಮನಸ್ಥಿತಿಗೆ ಕನ್ನಡಿ ಹಿಡಿದಂತಿವೆ ಎಂದು ಆಕ್ರೋಶದಿಂದ ವಿವರಿಸಿದರು ಸಿದ್ದರಾಮಯ್ಯ.

ಸಂವಿಧಾನ ಓದು ಕಾರ್ಯಕ್ರಮದಲ್ಲಿ ಡಿ.ಕೆ. ಶಿವಕುಮಾರ್‌ ಮತ್ತು ಸಿದ್ದರಾಮಯ್ಯ

ಡಿಸಿಎಂ ಡಿ.ಕೆ.ಶಿವಕುಮಾರ್, ಸಮಾಜ ಕಲ್ಯಾಣ ಸಚಿವ ಎಚ್.ಸಿ.ಮಹದೇವಪ್ಪ, ಗೃಹ ಸಚಿವ ಜಿ.ಪರಮೇಶ್ವರ್, ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ, ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಮುನಿಯಪ್ಪ, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ ಹಾಗೂ ಸಚಿವರುಗಳಾದ ಮಂಕಾಳ ವೈದ್ಯ, ಸತೀಶ್ ಜಾರಕಿಹೊಳಿ, ಕೆ.ಜೆ.ಜಾರ್ಜ್, ಈಶ್ವರ್ ಖಂಡ್ರೆ, ವಿಧಾನಪರಿಷತ್ ಸಭಾಪತಿ ಹೊರಟ್ಟಿ,ಮುಖ್ಯಮಂತ್ರಿಗಳ ರಾಜಕೀಯ ಸಲಹೆಗಾರರಾದ ಗೋವಿಂದರಾಜು, ವಿಧಾನ ಪರಿಷತ್ ಸದಸ್ಯರಾದ ಸುದಾಮ್ ದಾಸ್ ಸೇರಿ 10 ಕ್ಕೂ ಹೆಚ್ಚು ಶಾಸಕರು, ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ, ಅಪರ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್ ಸೇರಿ ಪೊಲೀಸ್ ಅಧಿಕಾರಿಗಳು ಹಾಗೂ ಮುಖಂಡರು ಉಪಸ್ಥಿತರಿದ್ದರು.

ಹಲವಾರು ಕಾಲೇಜುಗಳ ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಸಮಾಜ ಕಲ್ಯಾಣ ಇಲಾಖೆ ವತಿಯಿಂದ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಸಂವಿಧಾನ ಪೀಠಿಕೆ ಓದು ಕಾರ್ಯಕ್ರಮ ನಡೆಯುತ್ತಿದೆ.

Exit mobile version