ಹುಬ್ಬಳ್ಳಿ: ರಾಜ್ಯ ಕಾಂಗ್ರೆಸ್ ಸರ್ಕಾರವನ್ನು (Congress Government) ಬೀಳಿಸಲು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ (Pralhad Joshi) ಸೇರಿದಂತೆ ಬಿಜೆಪಿಯ ಪ್ರಮುಖರು ಶಾಸಕರಿಗೆ 50ರಿಂದ 100 ಕೋಟಿ ರೂ. ಆಮಿಷವೊಡ್ಡಿದ್ದಾರೆ ಎಂದು ಆರೋಪಿಸಿದ್ದ ಕಾಂಗ್ರೆಸ್ ಶಾಸಕ ರವಿಕುಮಾರ ಗೌಡ (ರವಿ ಗಣಿಗ) ವಿರುದ್ಧ ಬಿಜೆಪಿ ದೂರು ದಾಖಲಿಸಿದೆ.
ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಪಿ. ರಾಜೀವ್ ಅವರು ಹುಬ್ಬಳ್ಳಿ ಉಪನಗರ ಪೊಲೀಸ್ ಠಾಣೆಯಲ್ಲಿ ಭಾನುವಾರ ಸಂಜೆ ಕಾಂಗ್ರೆಸ್ ಶಾಸಕ ರವಿಕುಮಾರ ವಿರುದ್ಧ ದೂರು ನೀಡಿದ್ದಾರೆ.
ಕಾಂಗ್ರೆಸ್ ಶಾಸಕ ರವಿಕುಮಾರ ಗೌಡ (ರವಿ ಗಣಿಗ) ಅವರು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸೇರಿದಂತೆ ನಾಲ್ಕಾರು ಮುಖಂಡರು ಕಾಂಗ್ರೆಸ್ ಸರ್ಕಾರ ಬೀಳಿಸಲು ಶಾಸಕರಿಗೆ 50ರಿಂದ 100 ಕೋಟಿ ರೂ. ಆಮಿಷವೊಡ್ಡುತ್ತಿದ್ದಾರೆ ಎಂಬುದು ಶುದ್ಧ ಸುಳ್ಳು ಎಂದು ರಾಜೀವ್ ಸ್ಪಷ್ಟಪಡಿಸಿದ್ದಾರೆ. ಕಾಂಗ್ರೆಸ್ ಶಾಸಕ ರವಿಕುಮಾರ, ರಾಜಕೀಯ ದುರುದ್ದೇಶದಿಂದ ನಿರಾಧಾರವಾಗಿ ಹೀಗೆ ಆರೋಪ, ಅಪಪ್ರಚಾರದಲ್ಲಿ ತೊಡಗಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ: Job Alert: ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್‌ನಲ್ಲಿದೆ ಉದ್ಯೋಗಾವಕಾಶ; ಐಟಿಐ, ಡಿಪ್ಲೋಮಾ ಪಾಸಾದವರು ಅರ್ಜಿ ಸಲ್ಲಿಸಿ
ತೇಜೋವಧೆ ಯತ್ನ
ಸಚಿವ ಪ್ರಲ್ಹಾದ್ ಜೋಶಿ ಮತ್ತು ಬಿಜೆಪಿ ನಾಯಕರ ತೇಜೋವಧೆ ಮಾಡುವ ದುರುದ್ದೇಶದಿಂದ ಶಾಸಕ ರವಿಕುಮಾರ ಹೀಗೆ ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಪಿ. ರಾಜೀವ್ ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಇದನ್ನೂ ಓದಿ: Train services : ಎಸ್‌ಎಂವಿಟಿ ಬೆಂಗಳೂರು ಮತ್ತು ಕಲಬುರಗಿ ನಡುವೆ ವಿಶೇಷ ರೈಲು ಸೇವೆ
ಕಾಂಗ್ರೆಸ್ ಶಾಸಕ ರವಿಕುಮಾರ ಅವರ ಈ ಹೇಳಿಕೆ ಭ್ರಷ್ಟಾಚಾರ ತಡೆ ಕಾಯ್ದೆ ವಿರುದ್ಧವಾಗಿದ್ದು, ಅಲ್ಲದೇ, ಬಿಜೆಪಿ ಬದ್ಧತೆಗೆ ಧಕ್ಕೆ ತರುವಂತಿದೆ. ಭ್ರಷ್ಟಾಚಾರಕ್ಕೆ ಪ್ರೇರಣೆ ನೀಡುವಂತಿದೆ. ಭಾರತೀಯ ನ್ಯಾಯ ಸಂಹಿತೆ ಕಾಯ್ದೆಯಡಿ ಇದು ಅಪರಾಧವಾಗಿದ್ದರಿಂದ ಇವರ ವಿರುದ್ಧ ಕ್ರಮ ಕೈಗೊಳ್ಳುವಂತೆ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ ದೂರಿನಲ್ಲಿ ಒತ್ತಾಯಿಸಿದ್ದಾರೆ.