ಬೆಂಗಳೂರು: ಶ್ರೀ ಗುರುರಾಘವೇಂದ್ರ ಸಹಕಾರ ಬ್ಯಾಂಕ್, ವಸಿಷ್ಠ ಸೌಹಾರ್ದ ಸಹಕಾರಿ ಬ್ಯಾಂಕ್‌ಗಳ ಅವ್ಯವಹಾರ ಪ್ರಕರಣವನ್ನು ಸಿಬಿಐಗೆ ವಹಿಸಲು ಶಿಫಾರಸು ಮಾಡಲಾಗುವುದು ಎಂದು ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಹೇಳಿದ್ದಾರೆ.
ಶ್ರೀ ಗುರುರಾಘವೇಂದ್ರ ಸಹಕಾರ ಬ್ಯಾಂಕ್ ಅವ್ಯವಹಾರಗಳು ಮತ್ತು ಪುನಃಶ್ಚೇತನ ಹಾಗೂ ವಸಿಷ್ಠ ಸೌಹಾರ್ದ ಸಹಕಾರಿ ಬ್ಯಾಂಕ್ ಅವ್ಯವಹಾರಗಳ ಕುರಿತು ವಿಕಾಸಸೌಧದಲ್ಲಿ ನಡೆದ ಪರಾಮರ್ಶೆ ಸಭೆಯಲ್ಲಿ ಮಾತನಾಡಿದರು.
ಗುರುರಾಘವೇಂದ್ರ, ವಸಿಷ್ಠ ಸೌಹಾರ್ದ ಸೇರಿದಂತೆ ಇತರೆ ಯಾವುದೇ ಬ್ಯಾಂಕ್‌ಗಳಲ್ಲಿ ನಡೆದಿರುವ ಅವ್ಯವಹಾರಗಳಿದ್ದರೆ ಆ ಪ್ರಕರಣಗಳನ್ನು ಸಹ ಸಿಬಿಐಗೆ ವಹಿಸಲು ಶಿಫಾರಸು ಮಾಡಲಾಗುತ್ತದೆ. ಈ ಕುರಿತು ನಿರ್ಣಯ ಸಿದ್ಧಪಡಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಹಗರಣದ ತನಿಖೆ ಆರಂಭವಾಗಿ ಮೂರು ವರ್ಷವಾದರೂ ಸಾಲ ವಸೂಲಾತಿ ಆಗುತ್ತಿಲ್ಲ. ಸಭೆಗಳು ಮಾತ್ರ ನಡೆಯುತ್ತಿವೆಯೇ ಹೊರತು ಯಾವುದೇ ಫಲಿತಾಂಶ ಬರುತ್ತಿಲ್ಲ. ಪ್ರಕರಣವನ್ನು ಸಿಬಿಐಗೆ ವಹಿಸಿದರೆ ಸಮಸ್ಯೆ ಏನು ಎಂದು ಗುರುರಾಘವೇಂದ್ರ ಬ್ಯಾಂಕ್ ನ ಆಡಳಿತಾಧಿಕಾರಿಯನ್ನು ಪ್ರಶ್ನಿಸಿದರು.
ಸರ್ಕಾರದ ಮೇಲೆ ಠೇವಣಿದಾರರು ವಿನಾಕಾರಣ ಆರೋಪ ಮಾಡುತ್ತಿದ್ದಾರೆ. ಹೀಗಾಗಿ ಠೇವಣಿದಾರರ ಹಿತಾಸಕ್ತಿ ಕಾಪಾಡುವ ದೃಷ್ಟಿಯಿಂದ ಪ್ರಕರಣವನ್ನು ಸಿಬಿಐಗೆ ವಹಿಸಲಾಗುವುದು. ಸಂಪುಟದಲ್ಲಿ ಈ ಕುರಿತು ಪ್ರಸ್ತಾವನೆ ಮಂಡಿಸಲಾಗುವುದು ಎಂದು ಸಚಿವರು ಹೇಳಿದರು.
ಈ ಪ್ರಕರಣದಲ್ಲಿ ಯಾರನ್ನು ರಕ್ಷಿಸುವ ಪ್ರಶ್ನೆಯೇ ಇಲ್ಲ. ಅಧಿಕಾರಿಗಳು ಸಮರ್ಥರಿದ್ದು ತನಿಖೆ ನಡೆಸುತ್ತಿದ್ದಾರೆ. ಆದರೆ ಸಾಲ ವಸೂಲಾತಿಯಲ್ಲಿ ವಿಳಂಬವಾಗುತ್ತಿದೆ. ಹೀಗಾಗಿ ಸಿಬಿಐಗೆ ವಹಿಸಿದರೆ ಠೇವಣಿದಾರರಲ್ಲೂ ವಿಶ್ವಾಸ ಮೂಡಲಿದೆ ಎಂದರು.
ಸಚಿವರ ಈ ಮಾತಿಗೆ ಶಾಸಕರುಗಳಾದ ರವಿಸುಬ್ರಮಣ್ಯ, ಸೌಮ್ಯರೆಡ್ಡಿ, ವಿಧಾನಪರಿಷತ್ ಸದಸ್ಯರಾದ ಯು.ಬಿ.ವೆಂಕಟೇಶ್ ಅವರು ಸಹಮತ ವ್ಯಕ್ತಪಡಿಸಿದರು. ಸಭೆಯಲ್ಲಿ ಬ್ಯಾಂಕ್ ನ ಪುನಶ್ಚೇತನ, ಸಾಲ ವಸೂಲಾತಿಯಲ್ಲಿ ಆಗಿರುವ ಪ್ರಗತಿ ಕುರಿತು ಪರಾಮರ್ಶಿಸಲಾಯಿತು. ಈ ರೀತಿ ವಂಚನೆ ತಡೆಗೆ ಕಾನೂನಿನಲ್ಲಿ ತಿದ್ದಪಡಿ ತರುವ ಕುರಿತಂತೆ ಚರ್ಚಿಸಲಾಯಿತು.
ಇದನ್ನೂ ಓದಿ | Bank Fraud | ಸಹಕಾರಿ ಸಚಿವರ ಸಭೆಗೆ ಸೊಸೈಟಿ ಪ್ರತಿನಿಧಿಗಳನ್ನು ಆಹ್ವಾನಿಸಬೇಕು: ಡಾ. ಶಂಕರ ಗುಹಾ ದ್ವಾರಕಾನಾಥ್