ಬೆಂಗಳೂರು: ಮಾಜಿ ಸಚಿವ ಬಿ. ನಾಗೇಂದ್ರ ನಿವಾಸದ ಮೇಲೆ ಇಡಿ ಅಧಿಕಾರಿಗಳು ದಾಳಿ (ED Raid) ನಡೆಸಿದ್ದು, ಈ ವೇಳೆ ನಾಗೇಂದ್ರ ಅವರ ಪಿಎ ಹರೀಶ್‌ರನ್ನು ವಶಕ್ಕೆ ಪಡೆದಿದ್ದಾರೆ. ಹೆಚ್ಚಿನ ವಿಚಾರಣೆಗಾಗಿ ಅವರನ್ನು ಇಡಿ ಕಚೇರಿಗೆ ಅಧಿಕಾರಿಗಳು ಕರೆದೊಯ್ದಿದ್ದಾರೆ. ಇನ್ನು ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ತನಿಖೆ ಎದುರಿಸುತ್ತಿರುವ ಮಾಜಿ ಸಚಿವ ನಾಗೇಂದ್ರ ಅವರ ಬಂಧನ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
ಬಿ. ನಾಗೇಂದ್ರ ಹಾಗೂ ಬಸವನಗೌಡ ದದ್ದಲ್ ನಿವಾಸಗಳ ಜತೆಗೆ ಮೂವರು ಯೂನಿಯನ್ ಬ್ಯಾಂಕ್ ಸಿಬ್ಬಂದಿ ಮನೆಯ ಮೇಲೂ ಇಡಿ ದಾಳಿ ನಡೆಸಿದೆ. ವಾಲ್ಮೀಕಿ ಅಭಿವೃದ್ಧಿ ನಿಗಮದ ಅವ್ಯವಹಾರವಾದ್ದರಿಂದ ವಸಂತನಗರದಲ್ಲಿರುವ ವಾಲ್ಮೀಕಿ ನಿಗಮದ ಕಚೇರಿಗೂ ಇಡಿ ರೇಡ್ ಮಾಡಿದೆ. ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಅಕ್ರಮ ಹಣ ವರ್ಗಾವಣೆ ಆರೋಪದ ಹಿನ್ನೆಲೆಯಲ್ಲಿ ಇಡಿ ದಾಳಿ ನಡೆಸಿ ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆದಿದೆ.
ಆರೋಪಿ ಸತ್ಯನಾರಾಯಣ್‌ನಿಂದ ವಾಲ್ಮೀಕಿ ನಿಗಮದ ಎಂ.ಡಿ. ಪದ್ಮನಾಭ್ ಹಣ ತಂದಿದ್ದರು ಎನ್ನಲಾಗಿದೆ. ಆ ಹಣದಲ್ಲಿ ನಾಗೇಂದ್ರ ಪಿಎ ಹರೀಶ್ 25 ಲಕ್ಷ ಹಣ ಪಡೆದಿದ್ದ. ದದ್ದಲ್ ಪಿಎ ಪಂಪಣ್ಣ ಕೂಡ 55 ಲಕ್ಷ ಹಣ ಪಡೆದಿದ್ದ. ಈ ಬಗ್ಗೆ ಪರಿಶೀಲನೆ ವೇಳೆ ಹರೀಶ್ ಬಾಯ್ಬಿಟ್ಟ ಹಿನ್ನೆಲೆಯಲ್ಲಿ ಆತನನ್ನು ಇಡಿ ವಶಕ್ಕೆ ಪಡೆದಿದೆ.
ಪ್ರಕರಣದಲ್ಲಿ ಸಚಿವ ನಾಗೇಂದ್ರ ಪರ 50 ರಿಂದ 60 ಕೋಟಿ ವ್ಯವಹಾರ ನಡೆದಿರುವ ಆರೋಪಗಳು ಕೇಳಿಬಂದ ಹಿನ್ನೆಲೆಯಲ್ಲಿ ಹೆಚ್ಚಿನ ವಿಚಾರಣೆಗೆ ಹರೀಶ್‌ನ ವಶಕ್ಕೆ ಪಡೆದಿದ್ದು, ಹರೀಶ್ ಹೇಳಿಕೆ ಆಧರಿಸಿ ಮಾಜಿ ಸಚಿವ ನಾಗೇಂದ್ರ ಬಂಧನ ಸಾಧ್ಯತೆ ಇದೆ ಎನ್ನಲಾಗಿದೆ.
ಮಾಜಿ ಸಚಿವ ಬಿ. ನಾಗೇಂದ್ರ (Ex minister B Nagendra) ಹಾಗೂ ಕಾಂಗ್ರೆಸ್ ಶಾಸಕ (Congress MLA) ಬಸವನಗೌಡ ದದ್ದಲ್ (Basavanagowda Daddal) ಅವರ ಮನೆಗಳ ಮೇಲೆ ಇಂದು ಮುಂಜಾನೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ದಾಳಿ (ED Raid) ನಡೆಸಿದ್ದಾರೆ.
ನಾಗೇಂದ್ರ ಅವರಿಗೆ ಸೇರಿದ ಡಾಲರ್ಸ್ ಕಾಲೋನಿಯ ಮನೆ ಮೇಲೆ ದಾಳಿ ಮಾಡಲಾಗಿದೆ. ಅವರ ಆಸ್ತಿಗಳಿರುವ ಬಿಇಎಲ್ ರೋಡ್, ಮತ್ತಿಕೆರೆ ಹಾಗೂ ಮಲ್ಲೇಶ್ವರಂ ಸೇರಿದಂತೆ ಬೆಂಗಳೂರಿನಲ್ಲಿ ನಾಲ್ಕು ಕಡೆ ದಾಳಿಗಳು ನಡೆದಿವೆ. ಬಳ್ಳಾರಿಯ ಅವರ ಮನೆಯ ಮೇಲೂ ದಾಳಿ ನಡೆಸಲಾಗಿದೆ. ಬೆಂಗಳೂರು ಹೊರತುಪಡಿಸಿ ರಾಯಚೂರು ಸೇರಿದಂತೆ ಬೇರೆ ಬೇರೆ ಜಿಲ್ಲೆಗಳಲ್ಲಿಯೂ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ಪ್ರಕರಣದಲ್ಲಿ ಸಿಬಿಐ ಮಧ್ಯೆ ಪ್ರವೇಶಿಸಬಹುದು ಎಂಬ ಮಾಹಿತಿ ದೊರೆತಿತ್ತು.
ವಾಲ್ಮೀಕಿ ನಿಗಮದ ಹಗರಣದಲ್ಲಿ 183 ಕೋಟಿ ರೂ. ಅವ್ಯವಹಾರ ನಡೆದಿತ್ತು. ಇದರ ವ್ಯಾಪ್ತಿ ಕೆಳಹಂತದ ಅಧಿಕಾರಿಗಳಿಂದ ಹಿಡಿದು ಮೇಲಿನವರೆಗೂ ವ್ಯಾಪಿಸಿತ್ತು. ಪ್ರಕರಣಕ್ಕೆ ಸಂಬಂಧಿಸಿ ಆತ್ಮಹತ್ಯೆ ಮಾಡಿಕೊಂಡ ಚಂದ್ರಶೇಖರ್ ಡೆತ್‌ನೋಟ್‌ನಲ್ಲಿಯೂ ಸಚಿವರ ಬಗ್ಗೆ ಉಲ್ಲೇಖ ಇದೆ.
ಇದನ್ನೂ ಓದಿ | ED Raid: ಇಡಿ- ಸಿಬಿಐ ಮೆಗಾ ದಾಳಿ; 80 ಅಧಿಕಾರಿಗಳಿಂದ ರೇಡ್, ಬ್ಯಾಂಕ್ ಸಿಬ್ಬಂದಿ ಮನೆ ಸೀಜ್! ಬೆಳಗ್ಗೆಯಿಂದ ಏನೇನಾಯ್ತು?
ಬ್ಯಾಂಕ್‌ಗಳಲ್ಲಿ ಬಹುಕೋಟಿ ಹಣ ಅಕ್ರಮ ನಡೆದಾಗ ಈ ವಿಚಾರದಲ್ಲಿ ರಾಜ್ಯ ಯಾವುದೇ ಒಪ್ಪಿಗೆ ನೀಡದೆಯೂ ಸಿಬಿಐ ಹಾಗೂ ಇಡಿ ಇದರಲ್ಲಿ ಮಧ್ಯೆ ಪ್ರವೇಶಿಸಿ ತನಿಖೆ ಕೈಗೆತ್ತಿಕೊಳ್ಳಬಹುದಾಗಿದೆ. ಎರಡೂ ಸಂಸ್ಥೆಗಳು ಈ ಪ್ರಕರಣದ ಬಗ್ಗೆ ಆಸಕ್ತಿ ವಹಿಸಿವೆ ಎಂದು ಗೊತ್ತಾಗಿತ್ತು. ಅಕ್ರಮ ನಡೆದ ಸಂದರ್ಭದಲ್ಲಿ ಬಿ. ನಾಗೇಂದ್ರ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವರಾಗಿದ್ದರು. ಶಾಸಕ ದದ್ದಲ್ ಈಗಲೂ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಇಡಿ ದಾಳಿ ಮಹತ್ವ ಪಡೆದಿದೆ.