Site icon Vistara News

Tiger Nail : ಹುಲಿ ಉಗುರು ಧರಿಸಿದ ಅರಣ್ಯಾಧಿಕಾರಿಗಳ ಸಸ್ಪೆಂಡ್; ಸಚಿವ ಈಶ್ವರ್‌ ಖಂಡ್ರೆ ಸೂಚನೆ

Tiger Nail and Eshwar Khandre

ಬೆಂಗಳೂರು: ರಾಜ್ಯದಲ್ಲಿ ಹುಲಿ ಉಗುರಿನ (Tiger Nail) ಲಾಕೆಟ್ ಇರುವ ಸರ ಧರಿಸಿರುವವರ ವಿರುದ್ಧ ಅರಣ್ಯ ಇಲಾಖೆ (Forest department) ಸಮರ ಸಾರಿದೆ. ಈಗ ರಾಜಕಾರಣಿಗಳು, ಸೆಲೆಬ್ರಿಟಿಗಳು, ಉದ್ಯಮಿಗಳು, ರೌಡಿಶೀಟರ್‌ಗಳು ಸೇರಿದಂತೆ ಅನೇಕರಿಗೆ ಈ ಹುಲಿ ಉಗುರು ಪರಚುತ್ತಿದೆ. ಹೀಗಾಗಿ ಎಲ್ಲರಿಗೂ ಸಂಕಷ್ಟ ತಂದೊಡ್ಡಿದೆ. ದಿನ ಬೆಳಗಾದರೆ ಒಬ್ಬೊಬ್ಬರ ಮನೆಗೆ ಅರಣ್ಯ ಇಲಾಖೆ ಅಧಿಕಾರಿಗಳು ಹೋಗಿ ಪರಿಶೀಲನೆ ನಡೆಸಿ ಬರುತ್ತಿದ್ದಾರೆ. ಈಗ ಸ್ವತಃ ಅರಣ್ಯಾಧಿಕಾರಿಗಳೇ ದೊಡ್ಡ ಗಂಡಾಂತರ ಎದುರಾಗಿದೆ. ಹುಲಿ ಉಗುರು ಧರಿಸಿದ್ದ ಅರಣ್ಯಾಧಿಕಾರಿಗಳನ್ನು ಅಮಾನತು ಮಾಡುವಂತೆ ಅರಣ್ಯ ಸಚಿವ ಈಶ್ವರ ಖಂಡ್ರೆ (Ishwar Khandre) ಸೂಚನೆ ನೀಡಿದ್ದಾರೆ.

ಡಿಆರ್‌ಎಫ್‌ಒ ದರ್ಶನ್ ಹುಲಿ ಉಗುರು ಧರಿಸಿದ್ದ ಬಗ್ಗೆ ದೂರು ದಾಖಲಾಗಿತ್ತು. ಅಲ್ಲದೆ, ಚಿಕ್ಕಬಳ್ಳಾಪುರ ಆರ್‌ಎಫ್‌ಒ ಮುನಿರಾಜ್ ಕೂಡ ಹುಲಿ ಉಗುರಿನ ಪೆಂಡೆಂಟ್ ಧರಿಸಿದ್ದರು. ಇಬ್ಬರ ಕುರಿತು ಅರಣ್ಯ ಇಲಾಖೆಗೆ ದೂರು ದಾಖಲಾಗಿತ್ತು.

ಇದನ್ನೂ ಓದಿ: Karnataka Weather : ಬೆಂಗಳೂರು ಸೇರಿದಂತೆ ಹಲವೆಡೆ ಇನ್ನೆರಡು ದಿನ ಉರಿ ಬಿಸಿಲು!

ಈ ಸಂಬಂಧ ಸಚಿವ ಈಶ್ವರ್‌ ಖಂಡ್ರೆ ಅವರು ಪಿಸಿಸಿಎಫ್ ಪುಷ್ಕರ್ ಕುಮಾರ್‌ಗೆ ಕರೆ ಮಾಡಿ ತನಿಖೆಯನ್ನು ಪ್ರಗತಿಯಲ್ಲಿ ಇಟ್ಟು ಅವರನ್ನು ಅಮಾನತು ಮಾಡುವಂತೆ ಸೂಚನೆ ನೀಡಿದ್ದಾರೆ. ಇನ್ನು ಡಿಆರ್‌ಎಫ್‌ಒ ದರ್ಶನ್ ವಿಚಾರಣೆಗೆ ಹಾಜರಾಗದೆ ಇರುವ ಬಗ್ಗೆ ಸಚಿವರಿಗೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಇದಕ್ಕೆ ಮೊಬೈಲ್‌ನಲ್ಲಿಯೇ ಪ್ರತಿಕ್ರಿಯೆ ನೀಡಿದ ಸಚಿವ ಈಶ್ವರ್ ಖಂಡ್ರೆ ಅವರು, ಕೂಡಲೇ ಸಸ್ಪೆಂಡ್‌ ಮಾಡುವಂತೆ ಸೂಚನೆ ನೀಡಿದ್ದಾರೆ. ಅರಣ್ಯಾಧಿಕಾರಿಗಳ ವಿರುದ್ಧವೂ ಕ್ರಮ ಕೈಗೊಳ್ಳಬೇಕು ಎಂದು ಹೇಳಿದ್ದಾರೆ.

ಸರ್ಕಾರಕ್ಕೆ ಮರಳಿಸಲು ಅಂತಿಮ ಚಾನ್ಸ್?‌

ವರ್ತೂರು ಸಂತೋಷ್‌ (Varthuru Santhosh) ಅವರ ಕೊರಳಲ್ಲಿದ್ದ ಹುಲಿಯ ಉಗುರನ್ನು ಟಿವಿ ಪರದೆಯ ಮೇಲೆ ನೋಡಿ ಕೇಸು ದಾಖಲಿಸಿಕೊಂಡು, ಬಿಗ್‌ ಬಾಸ್‌ ಮನೆಗೇ ಹೋಗಿ ಬಂಧಿಸಿದ್ದ ಅರಣ್ಯ ಇಲಾಖೆ ಈಗ ಸಾಲು ಸಾಲು ದೂರುಗಳು ಬರುತ್ತಿರುವ ಹಿನ್ನೆಲೆಯಲ್ಲಿ ದಿಕ್ಕು ತೋಚದಂತಾಗಿದೆ. ಈ ಹಂತದಲ್ಲಿ ಶಿಕ್ಷೆಯ ಬದಲು ಜಾಗೃತಿ ಮೂಡಿಸಲು ಮುಂದಾಗಿದೆ. ಜತೆಗೆ ಈಗ ಇರುವ ವನ್ಯಜೀವಿ (Wild life) ಸಂಬಂಧಿತ ವಸ್ತುಗಳನ್ನು ಸರ್ಕಾರಕ್ಕೆ ಒಪ್ಪಿಸಲು ಒಂದು ಅಂತಿಮ ದಿನವನ್ನು ನಿಗದಿಪಡಿಸುವ ಸಾಧ್ಯತೆ ಕಂಡುಬಂದಿದೆ.

ರಾಜ್ಯದಲ್ಲಿ ಹಲವಾರು ಮಂದಿಯ ಮೇಲೆ ದೂರುಗಳು ಬರುತ್ತಿವೆ. ಇವುಗಳನ್ನು ಪರಿಶೀಲಿಸಿದಾಗ ಬಹುತೇಕರಿಗೆ ಇದು ಅಪರಾಧ ಎಂಬ ಅರಿವೇ ಇಲ್ಲ ಎಂಬುದು ಗೋಚರವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಅಕ್ರಮವಾಗಿ ವನ್ಯಜೀವಿ ಉತ್ಪನ್ನಗಳನ್ನು ಇಟ್ಟುಕೊಂಡಿರುವವರು ಅವುಗಳನ್ನು ಸರ್ಕಾರಕ್ಕೆ ಮರಳಿಸಲು ಕೊನೆಯ ಅವಕಾಶ ನೀಡುವ ಕಾನೂನು ಸಾಧ್ಯತೆಗಳನ್ನು ಪರಾಮರ್ಶಿಸಲಾಗುತ್ತಿದೆ ಎಂದು ಅರಣ್ಯ, ವನ್ಯಜೀವಿ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ.

ತಮ್ಮ ಪೂರ್ವಜರು ಹೊಂದಿದ್ದ ವನ್ಯಜೀವಿ ಅಂಗಾಂಗದಿಂದ ಮಾಡಿದ ಟ್ರೋಫಿ, ಫಲಕ, ಪೆಂಡೆಂಟ್ ಸೇರಿದಂತೆ ಯಾವುದೇ ಉತ್ಪನ್ನಗಳನ್ನು ಅರಣ್ಯ ಇಲಾಖೆಯಿಂದ ದೃಢೀಕರಿಸಿಕೊಂಡು ಮಾಲೀಕತ್ವದ ಹಕ್ಕು ಪಡೆದುಕೊಳ್ಳಲು 2003ರವರೆಗೆ ಹಲವು ಅವಕಾಶ ನೀಡಲಾಗಿತ್ತು. ಹಲವರು ತಮ್ಮ ಬಳಿ ಇದ್ದ ವನ್ಯಜೀವಿ ಉತ್ಪನ್ನಗಳಿಗೆ ಮಾಲೀಕತ್ವದ ಹಕ್ಕು ಪಡೆದಿದ್ದಾರೆ. ಇನ್ನೂ ಅನೇಕರು ದೃಢೀಕರಣ ಮತ್ತು ಪ್ರಮಾಣ ಪತ್ರ ಪಡೆದಿಲ್ಲ ಎಂದು ಹೇಳಿದರು.

ಹೀಗೆ ಮಾಡುವುದು ಅಪರಾಧ ಎಂದೇ ಅವರಿಗೆ ತಿಳಿದಿಲ್ಲ

ಗ್ರಾಮೀಣ ಪ್ರದೇಶದ ಕೆಲವರ ಮನೆಗಳಲ್ಲಿ ಜಿಂಕೆ ಚರ್ಮ, ಆನೆ ದಂತದಿಂದ ಮಾಡಿದ ಕಲಾಕೃತಿಗಳು, ಜಿಂಕೆ ಮತ್ತು ಸಾರಂಗದ ಕೊಂಬು ಇತ್ಯಾದಿಗಳನ್ನು ಇಟ್ಟುಕೊಂಡಿರುತ್ತಾರೆ. ಇದು ಅಪರಾಧ ಎಂಬುದೂ ಅವರಿಗೆ ತಿಳಿದಿಲ್ಲ. ವರ್ತೂರು ಸಂತೋಷ ಪ್ರಕರಣ ವರದಿಯಾದ ಬಳಿಕ, ವನ್ಯಜೀವಿ ಉತ್ಪನ್ನಗಳ ಅಕ್ರಮ ದಾಸ್ತಾನಿನ ಬಗ್ಗೆ ಹೆಚ್ಚಾಗಿ ದೂರುಗಳು ಬರುತ್ತಿವೆ. ಕಾನೂನಿನ ಅರಿವಿಲ್ಲದ ಶ್ರೀಸಾಮಾನ್ಯರಿಗೆ ಆಗುವ ತೊಂದರೆ ತಪ್ಪಿಸಲು ಒಂದು ಬಾರಿ ಕೊನೆಯದಾಗಿ ಇಂತಹ ಅಕ್ರಮ ಸಂಗ್ರಹಣೆ/ದಾಸ್ತಾನಿನ ಬಗ್ಗೆ ಘೋಷಣೆ ಮಾಡಿಕೊಳ್ಳಲು ಮತ್ತು ಸರ್ಕಾರಕ್ಕೆ ಮರಳಿಸಲು ಅವಕಾಶ ನೀಡುವ ಬಗ್ಗೆ ಪರಾಮರ್ಶಿಸಿ, ಇದಕ್ಕೆ ಇತಿಶ್ರೀ ಹಾಡಲು ನಿರ್ಧರಿಸಲಾಗಿದೆ ಎಂದು ವಿವರಿಸಿದರು.

ಮನೆಯಲ್ಲಿ ಜಿಂಕೆ ಕೊಂಬು ಇಟ್ಟುಕೊಳ್ಳುವುದೂ ಅಪರಾಧ

ಅಳಿವಿನಂಚಿನಲ್ಲಿರುವ, ಅಮೂಲ್ಯ ಮತ್ತು ಅಪರೂಪದ ವನ್ಯ ಜೀವಿಗಳಾದ ಹುಲಿ, ಚಿರತೆ, ಚಿಂಕಾರ, ಕೃಷ್ಣಮೃಗ, ಸಾಂಬಾರ್, ಕರಡಿ ಸೇರಿದಂತೆ ಹಲವು ಕಾಡು ಪ್ರಾಣಿಗಳನ್ನು ಪರಿಶಿಷ್ಟ 1ರಲ್ಲಿ ಪಟ್ಟಿ ಮಾಡಲಾಗಿದ್ದು, ಇಂತಹ ಪ್ರಾಣಿಗಳನ್ನು ಕೊಲ್ಲುವುದು, ಬೇಟೆ ಆಡುವುದು, ಅಂತಹ ಪ್ರಾಣಿಗಳ ದೇಹದ ಯಾವುದೇ ಭಾಗದಿಂದ ತಯಾರಿಸಿದ ವಸ್ತುವನ್ನು ಅಲಂಕಾರಿಕವಾಗಿ ಮನೆಯಲ್ಲಿಡುವುದು, ಧರಿಸುವುದು ಕೂಡ ಅಪರಾಧವಾಗಿರುತ್ತದೆ ಎಂದು ತಿಳಿಸಿದರು.

ಗಣ್ಯರೂ ಸೇರಿ ಎಲ್ಲರ ಮೇಲೂ ಕಾನೂನು ಪ್ರಕಾರ ಕ್ರಮ

ಕಾನೂನಿನ ಮುಂದೆ ಯಾರೂ ದೊಡ್ಡವರಲ್ಲ. ಎಲ್ಲರಿಗೂ ಕಾನೂನು ಸಮಾನವಾಗಿರುತ್ತದೆ. ಈ ಹಿನ್ನೆಲೆಯಲ್ಲಿ ಈಗಾಗಲೇ ಗಣ್ಯರೂ ಸೇರಿದಂತೆ ಹಲವರಿಗೆ ನೋಟಿಸ್ ನೀಡಲಾಗಿದೆ. ಅಧಿಕಾರಿಗಳು ಕಾನೂನು ರೀತ್ಯ ಮತ್ತು ಆಯಾ ಸಂದರ್ಭಕ್ಕೆ ಅನುಗುಣವಾಗಿ ತಮ್ಮ ವಿವೇಚನಾಧಿಕಾರ ಬಳಸಿ ಕ್ರಮ ಜರುಗಿಸಲಿದ್ದಾರೆ ಎಂದು ಖಂಡ್ರೆ ಹೇಳಿದ್ದಾರೆ.

ಚಿತ್ರನಟರು, ಗಣ್ಯರು ನಕಲಿ ಲಾಕೆಟ್ ಕೂಡ ಧರಿಸದಂತೆ ಮನವಿ

ಚಿತ್ರನಟರು, ಗಣ್ಯರು ನಕಲಿ ಹುಲಿ ಉಗುರಿನ ಲಾಕೆಟ್ ಕೂಡ ಧರಿಸಿದರೂ ಇತರರಿಗೆ ಪ್ರೇರಣೆ ಸಿಗುತ್ತದೆ. ಅವರಿಗೆ ಸಾವಿರಾರು ಅಭಿಮಾನಿಗಳು ಇರುತ್ತಾರೆ. ಅವರು ಕೂಡ ತಮ್ಮ ನಾಯಕನಂತೆ ಹುಲಿ ಉಗುರಿನ ಲಾಕೆಟ್ ದರ ಧರಿಸಲು ಬಯಸುತ್ತಾರೆ. ಆಗ ಬೇಡಿಕೆ ಹೆಚ್ಚುತ್ತದೆ. ವನ್ಯಜೀವಿಗಳ ಹತ್ಯೆ ಆಗುತ್ತದೆ. ಇದಕ್ಕೆ ಪರೋಕ್ಷ ಕುಮ್ಮಕ್ಕು ನೀಡಿದಂತೆ ಆಗುತ್ತದೆ. ಹೀಗಾಗಿ ಸಾಮಾಜಿಕ ಬದ್ಧತೆಯ ದೃಷ್ಟಿಯಿಂದ ಗಣ್ಯರು, ನಟರು ನಕಲಿ ಪೆಂಡೆಂಟ್ ಕೂಡ ಧರಿಸಬಾರದು ಎಂದು ಮನವಿ ಮಾಡಿದ್ದಾರೆ.

ಇದನ್ನೂ ಓದಿ: Operation Kamala : ಮತ್ತೆ ಆಪರೇಷನ್‌ ಕಮಲ; ಸಂತೋಷ್‌ ಟೀಮ್‌ನಿಂದ 50 ಕೋಟಿ ರೂ. ಆಫರ್?

ಏನಾದರೂ ದೂರು ಇದ್ದರೆ ಈ ನಂಬರ್‌ಗೆ ಕರೆ ಮಾಡಿ: 1926 ಹೆಲ್ಪ್ ಲೈನ್

ಅರಣ್ಯ ಇಲಾಖೆಗೆ 1926 ಎಂಬ ಸಹಾಯವಾಣಿ ಇದ್ದು ಸಾರ್ವಜನಿಕರು ಈ ಸಂಖ್ಯೆಗೆ ಕರೆ ಮಾಡಿ ದೂರು ದಾಖಲಿಸಲು, ಅರಣ್ಯ ಇಲಾಖೆಗೆ ಸಂಬಂಧಿಸಿದ ಮಾಹಿತಿ ಪಡೆಯಲು ಅವಕಾಶವಿದೆ ಎಂದು ಈಶ್ವರ ಖಂಡ್ರೆ ತಿಳಿಸಿದ್ದಾರೆ.

ಚಿನ್ನಾಭರಣ ಅಂಗಡಿಗಳಲ್ಲಿ ಫಲಕ ಹಾಕಲು ಸೂಚನೆ

ಎಲ್ಲ ಚಿನ್ನಾಭರಣ ಮಳಿಗೆಗಳಲ್ಲಿ ತಮ್ಮಲ್ಲಿ ವನ್ಯಜೀವಿಯ ಯಾವುದೇ ಆಭರಣ ತಯಾರಿಸುವುದಿಲ್ಲ, ಮಾರಾಟ ಮಾಡುವುದಿಲ್ಲ. ಇದು ಶಿಕ್ಷಾರ್ಹ ಅಪರಾಧ ಎಂಬ ಫಲಕ ಹಾಕುವಂತೆ ತಯಾರಕರಿಗೆ ಸೂಚಿಸಲಾಗುವುದು ಎಂದು ಈಶ್ವರ ಖಂಡ್ರೆ ತಿಳಿಸಿದ್ದಾರೆ.

Exit mobile version