Site icon Vistara News

Hanuman Flag: ಹನುಮ ಧ್ವಜ ವಿವಾದ; ಶಾಸಕ ಗಣಿಗ ರವಿಕುಮಾರ್‌ ನಿವಾಸದ ಮುಂದೆ ಶ್ರೀರಾಮಸೇನೆ ಪ್ರೊಟೆಸ್ಟ್‌

Sri Ram Sene protests in front of MLA Ganiga Ravikumars residence

ಬೆಂಗಳೂರು/ಮಂಡ್ಯ : ಮಂಡ್ಯದ ಕೆರಗೋಡು ಗ್ರಾಮದಲ್ಲಿ (Keregodu Village) ಹನುಮ ಧ್ವಜ ತೆರವು (Hanuman Flag) ವಿಚಾರದಲ್ಲಿ ಸ್ಥಳೀಯ ಶಾಸಕರ ಕೈವಾಡವಿದೆ ಎಂದು ಆಕ್ರೋಶಗಳು ಕೇಳಿ ಬಂದಿವೆ. ಈ ಹಿನ್ನೆಲೆಯಲ್ಲಿ ಶಾಸಕ ರವಿಕುಮಾರ್ ಪಿ. ಗಣಿಗ ಮನೆ ಮುಂದೆ ಶ್ರೀರಾಮಸೇನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಬೆಂಗಳೂರಿನ ಬಸವೇಶ್ವರನಗರದ ಕಮಲಾನಗರದಲ್ಲಿರುವ ಶಾಸಕರ ನಿವಾಸ ಮುಂದೆ ಕೂತು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಶ್ರೀರಾಮಸೇನೆ ಕಾರ್ಯಕರ್ತರು ಘೋಷಣೆ ಕೂಗಿದರು. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಬಸವೇಶ್ವರ ನಗರ ಪೊಲೀಸರು ಪ್ರತಿಭಟನಾ ನಿರತರನ್ನು ವಶಕ್ಕೆ ಪಡೆದುಕೊಂಡರು.

ತುರ್ತು ಸುದ್ದಿಗೋಷ್ಠಿ ಕರೆದ ಶಾಸಕ ರವಿಕುಮಾರ್‌

ಕೆರಗೋಡು ಗ್ರಾಮದಲ್ಲಿ ಹನುಮ ಧ್ವಜ ವಿವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಡ್ಯ ಶಾಸಕ ಪಿ.ರವಿಕುಮಾರ್ ಮಂಡ್ಯದ ಪತ್ರಕರ್ತರ ಸಂಘದಲ್ಲಿ ತುರ್ತು ಸುದ್ದಿಗೋಷ್ಠಿ ಕರೆದಿದ್ದಾರೆ. ಹನುಮ ಧ್ವಜ ತೆರವು ವಿಚಾರದಲ್ಲಿ ತಮ್ಮ ಮೇಲಿರುವ ಆರೋಪ ಸಂಬಂಧ ಸ್ಪಷ್ಟನೆ ನೀಡುವ ಸಾಧ್ಯತೆ ಇದೆ.

ಇದನ್ನೂ ಓದಿ: Hanuman Flag: ಹನುಮ ಧ್ವಜ ಕಿಚ್ಚು; ಕೆರಗೋಡು ಗ್ರಾಮದಲ್ಲಿ 144 ಸೆಕ್ಷನ್‌ ಜಾರಿ

ಏನಿದು ಹನುಮ ಧ್ವಜ ವಿವಾದ

ಅಯೋಧ್ಯೆಯಲ್ಲಿ ಬಾಲಕರಾಮನ ಪ್ರಾಣ ಪ್ರತಿಷ್ಠಾಪನೆ ಸ್ಮರಣಾರ್ಥವಾಗಿ ಮಂಡ್ಯ ತಾಲೂಕಿನ ಕೆರಗೋಡು ಗ್ರಾಮದಲ್ಲಿ ಧ್ವಜಸ್ತಂಭವನ್ನು ಗ್ರಾಮಸ್ಥರು ನಿರ್ಮಿಸಿದ್ದರು. 108 ಅಡಿ ಸ್ತಂಭದಲ್ಲಿ ಕೇಸರಿ ಬಣ್ಣದ ಹನುಮ ಧ್ವಜವನ್ನು ಹಿಂದೂಪರ ಸಂಘಟನೆ ಕಾರ್ಯಕರ್ತರು ಹಾರಿಸಿದ್ದರು. ಧ್ವಜ ಹಾರಿಸಲು ಕೆಲವು ಷರತ್ತುಗಳನ್ನು ಗ್ರಾಮ ಪಂಚಾಯತ್ ವಿಧಿಸಿತ್ತು. ಅದರ ಪ್ರಕಾರ ಕಾರ್ಯಕ್ರಮ ಮುಗಿದ ಮೇಲೆ ಅದನ್ನು ಇಳಿಸಬೇಕಾಗಿತ್ತು.

ಆದರೆ, ಗ್ರಾಮಸ್ಥರು ಷರತ್ತಿನಂತೆ ಧ್ವಜ ಇಳಿಸಿರಲಿಲ್ಲ. ಬಳಿಕ ಕೆಲವರು ಧ್ವಜ ಇಳಿಸುವಂತೆ ದೂರು ನೀಡಿದ್ದರು. ತಾಲೂಕು ಆಡಳಿತದ ಸೂಚನೆಯಂತೆ ಧ್ವಜ ಇಳಿಸಲು ಮುಂದಾಗಿತ್ತು. ತಾಲೂಕು ಪಂಚಾಯತ್​ ಕಾರ್ಯನಿರ್ವಹಣಾಧಿಕಾರಿ ವೀಣಾ ನೇತೃತ್ವದಲ್ಲಿ ಧ್ವಜ ಇಳಿಸಲು ಮುಂದಾಗಲಾಗಿತ್ತು. ಈ ವೇಳೆ ಕೆರಳಿದ ಹಿಂದೂಪರ ಸಂಘಟನೆ ಕಾರ್ಯಕರ್ತರು ಪ್ರತಿಭಟನೆ ಆರಂಭಿಸಿದ್ದರು.

ಸರ್ಕಾರಿ ಜಾಗದಲ್ಲಿ ಧ್ವಜಸ್ತಂಭ ನಿರ್ಮಾಣ ಮಾಡಲಾಗುತ್ತಿರುವ ಕಾರಣ ತೆರವು ಮಾಡಬೇಕು ಎಂದು ತಾ.ಪಂ ಅಧಿಕಾರಿ ವೀಣಾ ಅವರು ಹಿಂದೂಪರ ಸಂಘಟನೆ ಕಾರ್ಯಕರ್ತರ ಮನವೊಲಿಸಲು ಮುಂದಾಗಿದ್ದರು. ವೀಣಾ ಅವರ ಮಾತಿಗೆ ಸಿಟ್ಟಿಗೆದ್ದ ಗ್ರಾಮಸ್ಥರಿಂದ ಪ್ರತಿಭಟನೆ ಹೆಚ್ಚಿಸಿದ್ದರು. ಜೈ ಶ್ರೀರಾಮ್, ಜೈ ಹನುಮಾನ್ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದರು. ಪ್ರಾಣ ಬೇಕಾದರೂ ಬಿಡುವೆವು. ಧ್ವಜ ಇಳಿಸಲ್ಲ ಎಂದು ಪಟ್ಟು ಹಿಡಿದಿದ್ದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Exit mobile version