ಬೆಂಗಳೂರು: ಮನೆಯಿಂದ ಕೆಲಸಕ್ಕೆ ಹೊರಟವನ ಪ್ರಾಣವನ್ನೇ ಕೆಎಸ್‌ಆರ್‌ಟಿಸಿ ಬಸ್ ಬಲಿ (HIT AND RUN) ಪಡೆದಿದೆ. ಬೆಂಗಳೂರಿನ ರಾಜಾಜಿನಗರ ಯುರೊಕಿಡ್ಸ್ ಸ್ಕೂಲ್ ಸಮೀಪ ಸ್ಕೂಟರ್‌ಗೆ ಕೆಎಸ್‌ಆರ್‌ಟಿಸಿ ಬಸ್ (KSRTC Bus) ಡಿಕ್ಕಿ ಹೊಡೆದಿದೆ. ಪರಿಣಾಮ ಸವಾರ ಸ್ಥಳದಲ್ಲೇ (Road Accident) ಮೃತಪಟ್ಟಿದ್ದಾರೆ.
ವಿಜಯ (29) ಮೃತ ದುರ್ದೈವಿ. ವಿಜಯ ವೈಂಡಿಂಗ್ ಕೆಲಸ ಮಾಡುತ್ತಿದ್ದ. ಕೆಲಸಕ್ಕಾಗಿ ಮನೆಯಿಂದ ಸ್ಕೂಟರ್‌ನಲ್ಲಿ ಹೊರಟಿದ್ದ. ಈ ವೇಳೆ ಹಿಂದಿನಿಂದ ವೇಗವಾಗಿ ಬಂದ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಕೆಳಗೆ ಬಿದ್ದ ವಿಜಯ ತಲೆ ಮೇಲೆ ಬಸ್ ಚಕ್ರ ಹರಿದಿದೆ. ಪರಿಣಾಮ ಮುಖವೇ ಅಪ್ಪಚ್ಚಿಯಾಗಿ ವಿಜಯ ತೀವ್ರ ರಕ್ತಸ್ರಾವವಾಗಿ ಮೃತಪಟ್ಟಿದ್ದಾರೆ.
ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಈ ಸಂಬಂಧ ರಾಜಾಜಿನಗರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಹಿಟ್ ಆ್ಯಂಡ್ ರನ್ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅಪಘಾತ ನಡೆದ ಸ್ಥಳದಲ್ಲಿ ಸಿಸಿಟಿವಿಯಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ.
ಇದನ್ನೂ ಓದಿ: Shivamogga News : ಮೂತ್ರ ವಿಸರ್ಜನೆ ಮಾಡುವಾಗ ತುಂಡಾದ ಸ್ಲ್ಯಾಬ್; ಚರಂಡಿಗೆ ಬಿದ್ದು ವ್ಯಕ್ತಿ ಸಾವು
ಟಯರ್ ಸ್ಫೋಟಗೊಂಡು ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಕಾರು
ಬೆಂಗಳೂರಿನ ಲಾಲ್‌ಬಾಗ್ ರಸ್ತೆಯಲ್ಲಿ ಬರುತ್ತಿದ್ದಾಗ ಕಾರಿನ ಟಯರ್ ಸ್ಫೋಟಗೊಂಡು ಕಾಂಪೌಂಡ್‌ಗೆ ಡಿಕ್ಕಿ ಹೊಡೆದಿದೆ. ಲಾಲ್‌ಬಾಗ್ ಕಡೆಯಿಂದ ಜಯನಗರ ಕಡೆಗೆ ಹೋಗುತ್ತಿದ್ದ ಇನ್ನೋವಾ ಕಾರಿನ ಟಯರ್ ಸ್ಫೋಟಗೊಂಡಿದೆ. ಇದರಿಂದಾಗಿ ಚಾಲಕನ ನಿಯಂತ್ರಣ ತಪ್ಪಿ ಅಡ್ಡಾದಿಡ್ಡಿ ಬಂದು ಮನೆಯ ಕಾಂಪೌಂಡ್‌ಗೆ ಡಿಕ್ಕಿ ಹೊಡೆದಿದೆ. ಕಾರು ಡಿಕ್ಕಿ ಹೊಡೆಯುವ ದೃಶ್ಯವು ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಕಾರು ಗುದ್ದಿದ ರಭಸಕ್ಕೆ ಕಾಂಪೌಂಡ್ ಪುಡಿ ಪುಡಿಯಾಗಿದೆ. ಪಕ್ಕದಲ್ಲಿಯೇ ಇದ್ದ ಆಟೋಗೂ ಹಾನಿಯಾಗಿದೆ. ಇನ್ನೂ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿ ಕೂದಲೆಳೆಯಲ್ಲಿ ಪಾರಾಗಿದ್ದಾರೆ. ಅದೃಷ್ಟವಶಾತ್ ಕಾರು ಜಖಂಗೊಂಡಿದೆ. ಆದರೆ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ವಿವಿಪುರಂ ಸಂಚಾರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ನಿಂತಿದ್ದ ಕ್ಯಾಂಟರ್‌ಗೆ ಆಂಬ್ಯುಲೆನ್ಸ್ ಡಿಕ್ಕಿ, ಮೂವರಿಗೆ ಗಾಯ
ಬೆಂಗಳೂರಿನ ಬನ್ನೇರುಘಟ್ಟ ರಸ್ತೆಯಲ್ಲಿ ನಿಂತಿದ್ದ ಕ್ಯಾಂಟರ್ ವಾಹನಕ್ಕೆ ಆಂಬ್ಯುಲೆನ್ಸ್ ಡಿಕ್ಕಿ ಹೊಡೆದಿದೆ. ಪರಿಣಾಮ ಮೂವರು ಗಾಯಗೊಂಡಿದ್ದಾರೆ. ರೋಗಿಯನ್ನು ಪಿಕಪ್ ಮಾಡಲು ವೇಗವಾಗಿ ಹೋಗುತ್ತಿದ್ದಾಗ ನಿಯಂತ್ರಣ ತಪ್ಪಿ ಕ್ಯಾಂಟರ್‌ಗೆ ಡಿಕ್ಕಿಯಾಗಿದೆ. ಆಂಬ್ಯುಲೆನ್ಸ್‌ವೊಳಗೆ ಇದ್ದ ಮೂವರು ಗಾಯಗೊಂಡಿದ್ದು, ಎಲ್ಲರನ್ನೂ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮೈಕೋ ಲೇಔಟ್ ಸಂಚಾರ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ