ಬೆಂಗಳೂರು: ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ (Panchamasali Reservation) ನೀಡದಿದ್ದರೆ ರಾಜ್ಯದ ಎಲ್ಲ 224 ವಿಧಾನಸಭಾ ಕ್ಷೇತ್ರದಲ್ಲೂ ಪ್ರವಾಸ ಮಾಡಿ ಜನರಿಗೆ ವಿಷಯ ತಿಳಿಸಲಾಗುವುದು ಎಂದು ಕೂಡಲಸಂಗಮ ಪಂಚಮಸಾಲಿ ಪೀಠದ ಶ್ರೀ ಜಯಮೃತ್ಯುಂಜಯ ಸ್ವಾಮೀಜಿ ಎಚ್ಚರಿಕೆ ನೀಡಿದ್ದಾರೆ.
ಮೀಸಲಾತಿಗೆ ಆಗ್ರಹಿಸಿ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸುತ್ತಿರುವ ಸ್ವಾಮೀಜಿ, ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ಮಾತನಾಡಿದರು. ಮತ್ತೊಮ್ಮೆ ರಾಜ್ಯ ಸರ್ಕಾರದ ವಿರುದ್ಧ ಗುಡುಗಿದ್ದಾರೆ.
ಮೀಸಲಾತಿ ವಿಚಾರದಲ್ಲಿ ಸಿಎಂ ಬಸವರಾಜ ಬೊಮ್ಮಾಯಿಯವರು ಮೂಗಿಗೆ ತುಪ್ಪ ಹಚ್ಚಿದ್ದಾರೆ. ನಾವು ಅವರ ಕ್ಷೇತ್ರದಲ್ಲಿ ಪ್ರತಿಭಟನೆ ಮಾಡಿದ್ದೇವೆ. ರಾಜ್ಯದಲ್ಲಿ ನಮಗೆ ನ್ಯಾಯ ಸಿಗುತ್ತಿಲ್ಲ. ಹೀಗಾಗಿ ಮೀಸಲಾತಿ ವಿಚಾರದಲ್ಲಿ ಪ್ರಧಾನಿಯವರಿಗೆ ಪತ್ರ ಬರೆಯಲಾಗಿದೆ ಎಂದರು. ಮೀಸಲಾತಿ ನೀಡದಿದ್ದರೆ 224 ವಿಧಾನ ಸಭಾ ಕ್ಷೇತ್ರಗಳಲ್ಲಿಯೂ ಪ್ರವಾಸ ಮಾಡುತ್ತೇವೆ. ಸಮುದಾಯದ ಮೀಸಲಾತಿ ಪರ ಯಾರಿದ್ದಾರೆ, ಯಾರಿಲ್ಲ ಎಂಬುದರ ಬಗ್ಗೆ ಜನರಿಗೆ ತಿಳಿಸುತ್ತೇವೆ ಎಂದಿದ್ದಾರೆ.