ಬೆಂಗಳೂರು: ಹಾವೇರಿಯಲ್ಲಿ ನಡೆಯುವ ೮೬ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ (Kannada Sahitya Sammelana) ಭಾಗವಹಿಸುವಂತೆ ಮಾಜಿ ಮುಖ್ಯಮಂತ್ರಿ ಹಾಗೂ ಹಾಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ನಾಡೋಜ ಡಾ. ಮಹೇಶ ಜೋಶಿ ಆಹ್ವಾನ ನೀಡಿದರು.
ಸಮಸ್ತ ಕನ್ನಡಿಗರ ಹೆಮ್ಮೆಯ ಕನ್ನಡ ಸಾಹಿತ್ಯ ಪರಿಷತ್ ನಡೆಸುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಜನವರಿ ೬, ೭ ಹಾಗೂ ೮ ರಂದು ಆಯೋಜಿಸಿದ್ದು, ಸಮ್ಮೇಳನದ ಸಮಾರೋಪ ಸಮಾರಂಭಕ್ಕೆ ಮುಖ್ಯ ಅತಿಥಿಗಳಾಗಿ ಭಾಗವಹಿಸುವಂತೆ ನಾಡೋಜ ಡಾ. ಮಹೇಶ ಜೋಶಿ ಮನವಿ ಮಾಡಿಕೊಂಡರು.
ಇದನ್ನೂ ಓದಿ | Kannada Sahitya Sammelana | ಸಾಹಿತ್ಯ ಸಮ್ಮೇಳನದ ಪ್ರತಿನಿಧಿಗಳ ನೋಂದಣಿ ಅವಧಿ ವಿಸ್ತರಣೆ, ನೇರ ನೋಂದಣಿಗೆ ಅವಕಾಶ
ಆಮಂತ್ರಣ ಸ್ವೀಕರಿಸಿ ಮಾತನಾಡಿದ ಸಿದ್ದರಾಮಯ್ಯ, ಕಳೆದ ಎರಡು ವರ್ಷಗಳಿಂದ ಭಾರಿ ನಿರೀಕ್ಷೆಯಲ್ಲಿದ್ದ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಈಗ ಮುಹೂರ್ತ ಫಿಕ್ಸ್ ಆಗಿದೆ. ಹಾವೇರಿಯಲ್ಲಿ ನಡೆಯಲಿರುವ ಸಮ್ಮೇಳನವು ಕನ್ನಡಿಗರ ಪಾಲಿನ ಹೆಮ್ಮೆಯ ಕಾರ್ಯಕ್ರಮವಾಗಬೇಕಿದೆ. ಆ ನಿಟ್ಟಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ ಮಾಡುತ್ತಿರುವ ಕಾರ್ಯ ಸ್ವಾಗತಾರ್ಹ. ಮುಂದಿನ ಅಧಿವೇಶನದಲ್ಲಿ ಸಮಗ್ರ ಕನ್ನಡ ಭಾಷಾ ಅಭಿವೃದ್ಧಿ ವಿಧೇಯಕ-೨೦೨೨ ಅನ್ನು ಕಾನೂನು ಮಾಡಲು ಸರ್ಕಾರ ಮುಂದಾಗಿದೆ. ಈ ವಿಧೇಯಕವನ್ನು ಕಾನೂನು ಮಾಡುವಲ್ಲಿ ಸರ್ಕಾರಕ್ಕೆ ಬೆಂಬಲ ನೀಡುತ್ತೇವೆ ಎಂದ ಅವರು, ಹೆಮ್ಮೆಯಿಂದ ಸಾಹಿತ್ಯ ಸಮ್ಮೇಳನದಲ್ಲಿ ಭಾಗವಹಿಸುವುದಾಗಿ ತಿಳಿಸಿದರು.
ನಾಡೋಜ ಡಾ. ಮಹೇಶ ಜೋಶಿ ಮಾತನಾಡಿ, ಕನ್ನಡಿಗರ ಹೆಮ್ಮೆಯ ನುಡಿ ಜಾತ್ರೆಯನ್ನು ಅರ್ಥಗರ್ಭಿತವಾಗಿ ನಡೆಸುವ ನಿಟ್ಟಿನಲ್ಲಿ ಸಿದ್ಧತೆಗಳು ನಡೆಯುತ್ತಿವೆ. ವಿದೇಶದಲ್ಲಿ ಇರುವ ಕನ್ನಡಿಗರು ಸಾಹಿತ್ಯ ಸಮ್ಮೇಳನದಲ್ಲಿ ಸಕ್ರಿಯವಾಗಿ ಭಾಗವಹಿಸುತ್ತಿದ್ದಾರೆ. ಅನಿವಾಸಿ ಭಾರತೀಯರಿಗೆ ಈ ಬಾರಿಯ ಸಮ್ಮೇಳನದಲ್ಲಿ ವಿಶೇಷ ಗೌರವ ನೀಡಲಿದ್ದೇವೆ. ಜತೆಗೆ ಈ ಬಾರಿ ಸಮ್ಮೇಳನದ ಪುಸ್ತಕ ಮಳಿಗೆಗಳಲ್ಲಿ ಕೇವಲ ಕನ್ನಡ ಪುಸ್ತಕಗಳನ್ನೇ ಪ್ರದರ್ಶನ ಮತ್ತು ಮಾರಾಟ ಮಾಡುವ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದರು.
ಇದನ್ನೂ ಓದಿ | Kannada Sahitya Sammelana | ಬಿಎಸ್‌ವೈಗೆ ಕನ್ನಡ ಸಾಹಿತ್ಯ ಪರಿಷತ್‌ನಿಂದ ಅಕ್ಷರ ಜಾತ್ರೆಗೆ ಆಹ್ವಾನ