ಬೆಂಗಳೂರು: ಕರ್ನಾಟಕದ ಸರ್ಕಾರದ ಭ್ರಷ್ಟಾಚಾರದ ವಿರುದ್ಧ ಹಾಗೂ ಇತ್ತೀಚೆಗೆ ಲೋಕಾಯುಕ್ತ ದಾಳಿ ಹಿನ್ನೆಲೆಯಲ್ಲಿ ಮಾರ್ಚ್ 9ರಂದು ಕರೆ ನೀಡಿದ್ದ ಕರ್ನಾಟಕ ಬಂದನ್ನು(Karnataka Bandh) ಕಾಂಗ್ರೆಸ್ ಹಿಂಪಡೆದಿದೆ.
ಈ ಕುರಿತು ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ ಹೇಳಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿಯ ನಡುವೆ ರಾಮಲಿಂಗಾರೆಡ್ಡಿ ಈ ಹೇಳಿಕೆ ನೀಡಿದ್ದಾರೆ.
ಫೆಬ್ರವರಿ 9ರಂದು ಬೆಳಗ್ಗೆ 9ರಿಂದ 11 ವರೆಗೆ ವ್ಯಾಪಾರ ವಹಿವಾಟುಗಳನ್ನು ಬಂದ್ ಮಾಡುವಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮನವಿ ಮಾಡಿದ್ದರು. ಶಾಲೆ, ಕಾಲೇಜು, ಆಸ್ಪತ್ರೆ ಸೇರಿ ಬೇರೆ ಯಾರಿಗೂ ತೊಂದರೆ ಆಗದಂತೆ ಕೇವಲ ಎರಡು ಗಂಟೆ ಬಂದ್ ಮಾಡಲಾಗುವುದು ಎಂದಿದ್ದರು.
ಆದರೆ ಅದೇ ದಿನ ದ್ವಿತೀಯ ಪಿಯು ಪರೀಕ್ಷೆ ಇರುವುದರಿಂದ ವಿದ್ಯಾರ್ಥಿಗಳಿಗೆ ತೊಂದರೆ ಆಗುತ್ತದೆ ಎಂಬ ಆಕ್ಷೇಪಗಳು ಕೇಳಿಬಂದಿದ್ದವು. ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲು, ಶೈಕ್ಷಣಿಕ ಸಾಮಗ್ರಿಗಳ ಖರೀದಿಗೆ ತೊಂದರೆ ಆಗಬಹುದು ಎಂದು ಸಾಮಾಜಿಕ ಜಾಲತಾಣದಲ್ಲೂ ಆಕ್ಷೇಪಗಳು ಕೇಳಿಬಂದಿದ್ದವು.
ಇದೀಗ ಆಕ್ಷೇಪಕ್ಕೆ ಮಣಿದಿರುವ ಕೆಪಿಸಿಸಿ, ಬಂದ್ ಹಿಂಪಡೆದಿದೆ. ಡಿ.ಕೆ. ಶಿವಕುಮಾರ್ ಅವರು ದೂರವಾಣಿ ಕರೆ ಮಾಡಿದ್ದರು, ಶೀಕ್ಷಣ ಸಂಸ್ಥೆಗಳಿಗೆ ತೊಂದರೆ ಆಗಬಾರದು ಎಂದು ಬಂದ್ ಹಿಂಪಡೆಯಲಾಗಿದೆ ಎಂದು ರಾಮಲಿಂಗಾ ರೆಡ್ಡಿ ತಿಳಿಸಿದ್ದಾರೆ.
ಇದನ್ನೂ ಓದಿ: Karnataka Bandh: ಬಿಜೆಪಿ ಸರ್ಕಾರದ ಭ್ರಷ್ಟಾಚಾರದ ವಿರುದ್ಧ ಮಾ.9ರಂದು ರಾಜ್ಯ ಬಂದ್: ಡಿ.ಕೆ. ಶಿವಕುಮಾರ್ ಘೋಷಣೆ
ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಡಿ.ಕೆ. ಶಿವಕುಮಾರ್, ಬಿಜೆಪಿ ಸರ್ಕಾರದ ಮಿತಿಮೀರಿದ ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಮುಖ್ಯಮಂತ್ರಿಗಳ ರಾಜೀನಾಮೆಗೆ ಆಗ್ರಹಿಸಿ ಮಾ.9 ರ ಬೆಳಗ್ಗೆ 9 ಗಂಟೆಯಿಂದ 11 ರವರೆಗೆ ಎರಡು ಗಂಟೆಗಳ ಕಾಲ ಸಾಂಕೇತಿಕ ಬಂದ್ ಮಾಡಲು ಕಾಂಗ್ರೆಸ್ ನಿರ್ಧರಿಸಿತ್ತು.
ಆದರೆ ಪರೀಕ್ಷೆಗಳು ಇರುವ ಕಾರಣ ಬಂದ್ ನಿಂದ ನಮಗೆ ತೊಂದರೆಯಾಗಲಿದೆ ಎಂದು ವಿದ್ಯಾರ್ಥಿಗಳು ಹಾಗೂ ಪೋಷಕರು ತಮ್ಮ ಅಭಿಪ್ರಾಯ ತಿಳಿಸಿದ್ದಾರೆ. ಅವರ ಹಿತ ನಮ್ಮ ಆದ್ಯತೆ. ಹೀಗಾಗಿ ಅವರ ಅಭಿಪ್ರಾಯಕ್ಕೆ ಗೌರವ ನೀಡಿ ಬಂದ್ ಕರೆ ವಾಪಸ್ ಪಡೆಯಲು ತೀರ್ಮಾನಿಸಿದ್ದೇವೆ ಎಂದು ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ.
ಬಂದ್ ಹಿಂಪಡೆಯಲಾಗಿದೆಯಾದರೂ, ಈ ಮೂಲಕ ಜನರ ಗಮನ ಸೆಳೆಯುವಲ್ಲಿ ಕಾಂಗ್ರೆಸ್ ಸಫಲವಾಗಿದೆ. ಬಂದ್‌ಗೆ ಕರೆ ನೀಡಿದ ಉದ್ದೇಶ, ಜನರಲ್ಲಿ ಬಿಜೆಪಿ ಸರ್ಕಾರದ ಭ್ರಷ್ಟಾಚಾರದ ಕುರಿತು ಜಾಗೃತಿ ಮೂಡಿಸುವುದಾಗಿತ್ತು. ಇದೀಗ ಆ ಕಾರ್ಯದಲ್ಲಿ ಸಫಲತೆ ಕಂಡಿದ್ದೇವೆ ಎಂದು ಕಾಂಗ್ರೆಸ್ ವಲಯದಲ್ಲಿ ಚರ್ಚೆ ನಡೆಯುತ್ತಿದೆ.