ಯಲಹಂಕ: ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ, ಯಲಹಂಕ ಮತ್ತು ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಚುನಾವಣಾ ಪ್ರಚಾರ ಕೈಗೊಂಡು ಮತಯಾಚನೆ (Lok Sabha Election 2024) ನಡೆಸಿದರು.
ಹಿರಿಯ ಕಾಂಗ್ರೆಸ್ ಮುಖಂಡ ಕೇಶವ್ ರಾಜಣ್ಣ, ಮಾಜಿ ಶಾಸಕ ಪ್ರಸನ್ನ ಕುಮಾರ್, ಮುಖಂಡರಾದ ಗೋಪಾಲ್ ಕೃಷ್ಣ, ಪಕ್ಷದ ಹಿರಿಯ ನಾಯಕರು, ಯುವ ಸಮೂಹದೊಂದಿಗೆ ಯಲಹಂಕದ ಆವಲಹಳ್ಳಿ, ಸಿಂಗನಾಯಕನ ಹಳ್ಳಿ, ರಾಜಾನಕುಂಟೆ, ಕಾಕೋಳು, ಅರೆಕರೆ, ಹುರುಳಿ ಚಿಕ್ಕನಹಳ್ಳಿ ಮತ್ತು ಸೊನ್ನೇನಹಳ್ಳಿ, ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಮಂಚೇನಹಳ್ಳಿಯಲ್ಲಿ ಭರ್ಜರಿ ಪ್ರಚಾರ ನಡೆಸಿದರು. ಯುವಕರಿಂದ ಬೈಕ್ ರೋಡ್ ಶೋ ನಡೆಸಲಾಯಿತು.
ಇದನ್ನೂ ಓದಿ: Everest Spices: ಸಿಂಗಾಪುರ ಬಳಿಕ ಹಾಂಕಾಂಗ್‌ನಲ್ಲೂ ಎವರೆಸ್ಟ್, ಎಂಡಿಎಚ್ ಮಸಾಲೆ ಪೌಡರ್ ಬ್ಯಾನ್!
ಯಲಹಂಕದ ಕಸಘಟ್ಟಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮತಯಾಚನೆ ನಡೆಸಿದ ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ, ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ, ಗೌರವ ಸಲ್ಲಿಸಿದರು.
ನಂತರ ಮಾತನಾಡಿದ ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ, ಕಾಂಗ್ರೆಸ್ ಗ್ಯಾರೆಂಟಿ ಯೋಜನೆಗಳ ಬಗ್ಗೆ ಜನರಲ್ಲಿ ಹೆಚ್ಚಿನ ಜಾಗೃತಿ ಮೂಡಿಸಲಾಗುತ್ತಿದೆ. ಬಿಜೆಪಿ ಸರ್ಕಾರದ ಬೆಲೆ ಏರಿಕೆ, ರೈತ ವಿರೋಧಿ ನೀತಿ, ದುರಾಡಳಿತದಿಂದ ಜನ ಸಾಮಾನ್ಯರ ಬದುಕು ದುರ್ಬರವಾಗಿದೆ. ನುಡಿದಂತೆ ನಡೆಯುತ್ತಿರುವ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿ, ಹಸ್ತದ ಗುರುತಿಗೆ ಮತ ನೀಡಿ, ಆಶೀರ್ವದಿಸುವಂತೆ ಅವರು ಮತದಾರರಲ್ಲಿ ಮನವಿ ಮಾಡಿದರು.
ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕೃಷಿ ಆಧಾರಿತ ಕೈಗಾರಿಕೆಗಳ ಸ್ಥಾಪನೆ, ಎಚ್.ಎನ್. ವ್ಯಾಲಿ ಯೋಜನೆಯಡಿ ಮೂರನೇ ಹಂತದ ಶುದ್ದೀಕರಣಕ್ಕೆ ಕ್ರಮ ಕೈಗೊಳ್ಳಲಾಗುವುದು. ಯಲಹಂಕದ ರೈತರ ಸಂತೆ ಮಾದರಿಯಲ್ಲಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಎರಡು ಕಡೆಗಳಲ್ಲಿ ರೈತ ಸಂತೆಗಳ ಸ್ಥಾಪನೆ, ದೇವನಹಳ್ಳಿ ಮತ್ತು ಹೊಸಕೋಟೆ ಕೆರೆಗಳಿಗೆ ಎಚ್.ಎನ್. ವ್ಯಾಲಿ ಯೋಜನೆ ವಿಸ್ತರಣೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
ಇದನ್ನೂ ಓದಿ: Leopard Attack: ನೂರಕ್ಕೂ ಹೆಚ್ಚು ಕುರಿಗಳ ಜತೆಯೇ ಎರಡು ಗಂಟೆ ಇದ್ದ ಚಿರತೆ!
ನೆಲಮಂಗಲ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯ ಕೆರೆಗಳಿಗೆ ನೀರು ಹರಿಸಲು ರೂಪಿಸಿರುವ ವೃಷಭಾವತಿ ಯೋಜನೆಗೆ ಹೆಚ್ಚಿನ ಅನುದಾನ ಒದಗಿಸುವ ಜತೆಗೆ ಎತ್ತಿನ ಹೊಳೆ ಯೋಜನೆ ಜಾರಿಗೆ ಪ್ರಾಮಾಣಿಕ ಪ್ರಯತ್ನ ನಡೆಸುತ್ತೇನೆ. ಚಿಕ್ಕಬಳ್ಳಾಪುರ ಕ್ಷೇತ್ರದ ಅಭಿವೃದ್ಧಿ ತಮ್ಮ ಹೊಣೆಯಾಗಿದ್ದು, ಇದಕ್ಕಾಗಿ ಹಗಲಿರುಳು ಶ್ರಮಿಸುತ್ತೇನೆ ಎಂದು ಹೇಳಿದರು.