Site icon Vistara News

Lok Sabha Election 2024 : ರೈತರೇಕೆ ಬಿಜೆಪಿಗೆ ಮತ ಹಾಕಬೇಕು, ಬಿಎಸ್‌ವೈ ಗುಂಡು ಹೊಡೆಸಿದ್ದಕ್ಕಾ? : ಮೋದಿಗೆ ಸಿದ್ದರಾಮಯ್ಯ ಪ್ರಶ್ನೆ

Lok Sabha Election 2024 Siddaramaiah Narendra Modi

ಬೆಂಗಳೂರು: ಶಿವಮೊಗ್ಗದಲ್ಲಿ ನಡೆಯುವ ಬಿಜೆಪಿ ಚುನಾವಣಾ (Lok Sabha Election 2024) ಪ್ರಚಾರ ರ‍್ಯಾಲಿಯಲ್ಲಿ (PM Modi in Shivamogga) ಭಾಗವಹಿಸುವ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರಿಗೆ ಮುಖ್ಯಮಂತ್ರಿ ಸಿಎಂ ಸಿದ್ದರಾಮಯ್ಯ (CM Siddaramaiah) ಹಲವು ಪ್ರಶ್ನೆಗಳನ್ನು ಕೇಳಿದ್ದಾರೆ (Siddaramaiah Questions Modi). ರಸಗೊಬ್ಬರ ಕೇಳಿದ ರೈತರ ಮೇಲೆ ಗೋಲಿಬಾರ್‌ ಮಾಡಿಸಿ (Golibar on Farmers) ಅಮಾಯಕ ರೈತರನ್ನು ಬಲಿ ಪಡೆದಿದ್ದ ಯಡಿಯೂರಪ್ಪನವರ ಮಗನಿಗೆ ಮತ ನೀಡಿ ಎನ್ನಲು ನಿಮ್ಮ ಆತ್ಮಸಾಕ್ಷಿ ಒಪ್ಪುವುದೇ? ಎನ್ನುವುದ ಅವರ ಮುಖ್ಯ ಪ್ರಶ್ನೆ.

ಮೋದಿಗೆ ಸಿಎಂ ಸಿದ್ದರಾಮಯ್ಯ ಅವರ ಸರಣಿ ಪ್ರಶ್ನೆಗಳು

ನೀರಾವರಿ ಯೋಜನೆಗಳಲ್ಲಿ ಅನ್ಯಾಯ, ಬಿಡುಗಡೆಯಾಗದ ಬರ ಪರಿಹಾರ, ನರೇಗಾ ಕೆಲಸದ ದಿನಗಳ ಹೆಚ್ಚಳಕ್ಕೆ ಸಿಗದ ಅನುಮತಿ ಹೀಗೆ ರಾಜ್ಯದ ರೈತರಿಗೆ ಬಿಜೆಪಿಯಿಂದ ಸಾಲು ಸಾಲು ಅನ್ಯಾಯವಾಗಿದೆ. ಹೀಗಿರುವಾಗ ರಾಜ್ಯದ ರೈತರು ಯಾಕೆ ಬಿಜೆಪಿಯನ್ನು ಬೆಂಬಲಿಸಬೇಕು? – ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ.

ರಸಗೊಬ್ಬರ ಕೇಳಿದ್ದಕ್ಕೆ ಗುಂಡು ಹೊಡೆದರಲ್ಲ, ಅವರಿಗೆ ರೈತರು ಮತ ಹಾಕಬೇಕಾ?

ರೈತ ಚಳವಳಿಗಳ ತವರುನೆಲ ಶಿವಮೊಗ್ಗಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸ್ವಾಗತ. ಬಿ.ಎಸ್ ಯಡಿಯೂರಪ್ಪ ಅವರು ಹಿಂದೊಮ್ಮೆ ರೈತರ ಸಾಲ ಮನ್ನಾದ ಭರವಸೆ ನೀಡಿ ನಂತರ ಮುಖ್ಯಮಂತ್ರಿಯಾದ ಮೇಲೆ ನಮ್ಮ ಸರ್ಕಾರದ ಬಳಿ ನೋಟ್‌ ಪ್ರಿಂಟ್‌ ಮಾಡುವ ಮೆಷಿನ್‌ ಇಲ್ಲ ಎಂದು ಹೇಳಿದ್ದರು. ಹಾವೇರಿಯಲ್ಲಿ ರಸಗೊಬ್ಬರ ಕೇಳಿದ ರೈತರ ಮೇಲೆ ಗೋಲಿಬಾರ್‌ ಮಾಡಿಸಿ ಅಮಾಯಕ ರೈತರನ್ನು ಬಲಿ ಪಡೆದಿದ್ದರು. ಇಂದು ಅದೇ ಯಡಿಯೂರಪ್ಪನವರ ಮಗನಿಗೆ ಮತ ನೀಡಿ ಎನ್ನಲು ನಿಮ್ಮ ಆತ್ಮಸಾಕ್ಷಿ ಒಪ್ಪುವುದೇ?

ರೈತರ ಸಾಲ ಮನ್ನಾ ಮಾಡುವ ಮಾತು ಉಳಿಸಿಕೊಳ್ಳದವರನ್ನು ಬೆಂಬಲಿಸಬೇಕಾ?

2018ರ ವಿಧಾನಸಭಾ ಚುನಾವಣಾ ಪ್ರಣಾಳಿಕೆಯಲ್ಲಿ ರಾಜ್ಯದ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಮೊದಲ ಸಂಪುಟ ಸಭೆಯಲ್ಲಿಯೇ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿನ 1 ಲಕ್ಷದ ವರೆಗಿನ ರೈತರ ಸಾಲ ಮನ್ನಾ ಮಾಡುವ ಭರವಸೆ ನೀಡಿದ್ದರು. ಅಧಿಕಾರ ಸಿಕ್ಕ ಮೇಲೆ ಕೊಟ್ಟ ಮಾತನ್ನು ಈಡೇರಿಸದೆ, ತಮಗೆ ದ್ರೋಹ ಬಗೆದ ಬಿಜೆಪಿಯನ್ನು ನಾಡಿನ ರೈತರು ಯಾಕೆ ಬೆಂಬಲಿಸಬೇಕು?

ಬರ ಪರಿಹಾರಕ್ಕೆ ನಯಾ ಪೈಸೆ ಕೊಡದವರಿಗೆ ಕೊಡಬೇಕಾ ಮತ?

ರಾಜ್ಯದಲ್ಲಿ ಬರ ಘೋಷಣೆ ಮಾಡಿ 6 ತಿಂಗಳುಗಳ ಕಳೆದಿದೆ. ರೂ.18,177 ಕೋಟಿ ಪರಿಹಾರದ ಹಣ ಬಿಡುಗಡೆಗೆ ಒತ್ತಾಯಿಸಿ ಹಲವು ಬಾರಿ ಪತ್ರ ಬರೆದಿದ್ದೇನೆ. ಖುದ್ದಾಗಿ ತಮ್ಮನ್ನು ಹಾಗೂ ಗೃಹ ಸಚಿವ ಅಮಿತ್‌ ಶಾ ಅವರನ್ನು ಭೇಟಿ ಮಾಡಿ ಮನವಿ ಮಾಡಿದ್ದೇನೆ. ಆದರೂ ಈ ವರೆಗೆ ನಯಾಪೈಸೆ ಪರಿಹಾರದ ಹಣ ಬಿಡುಗಡೆ ಆಗಿಲ್ಲ. ರಾಜ್ಯದ ರೈತರ ಮೇಲೆ ಯಾಕಿಷ್ಟು ದ್ವೇಷ?

ಬರದಿಂದ ಜನರು ಗುಳೆ ಹೋಗುವುದನ್ನು ತಪ್ಪಿಸಲು ನರೇಗಾ ಯೋಜನೆಯಡಿ ಕೆಲಸದ ದಿನಗಳನ್ನು 100 ರಿಂದ 150ಕ್ಕೆ ಹೆಚ್ಚಳ ಮಾಡಬೇಕು ಎಂದು ಕೇಂದ್ರ ಸರ್ಕಾರದ ಬಳಿ ಮನವಿ ಮಾಡಿದರೂ ಈ ವರೆಗೆ ಯಾವುದೇ ಸ್ಪಂದನೆ ದೊರೆತಿಲ್ಲ.

ಭದ್ರಾ ಮೇಲ್ದಂಡೆ ಯೋಜನೆಗೆ ಒಂದು ನಯಾ ಪೈಸೆಯೂ ಬಂದಿಲ್ಲ!

ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಸರ್ಕಾರ ಬಜೆಟ್‌ ನಲ್ಲಿ ರೂ.5,300 ಕೋಟಿ ಅನುದಾನ ಘೋಷಿಸಿ ವರ್ಷಗಳೇ ಕಳೆದರೂ ಈ ವರೆಗೆ ನಯಾಪೈಸೆ ರಾಜ್ಯಕ್ಕೆ ಬಂದಿಲ್ಲ. ಮಹದಾಯಿ ಮತ್ತು ಮೇಕೆದಾಟು ಯೋಜನೆಗಳಿಗೆ ಕೇಂದ್ರದ ಅನುಮತಿ ಸಿಗದೆ ನೆನೆಗುದಿಗೆ ಬಿದ್ದಿವೆ. ಕಾವೇರಿ ನೀರು ಹಂಚಿಕೆ ವಿಷಯದಲ್ಲಿ ಸಂಕಷ್ಟಸೂತ್ರ ರಚನೆಗೆ ಮಧ್ಯಸ್ಥಿಕೆ ವಹಿಸದೆ ಕೇಂದ್ರ ಸರ್ಕಾರ ನಾಡಿನ‌ ರೈತರನ್ನು ಕೈಬಿಟ್ಟಿತ್ತು.
ರಾಜ್ಯದ ರೈತರಿಗೆ ಮಾತ್ರ ಯಾಕೆ ಈ ಸಾಲು ಸಾಲು ಅನ್ಯಾಯಗಳು?

ಇದನ್ನೂ ಓದಿ : Modi in Shivamogga LIVE : ಮಲೆನಾಡಿನಲ್ಲಿ ಮೋದಿ ಮತ ಶಿಕಾರಿ, ಬಿಸಿಲಲ್ಲೂ ರಣೋತ್ಸಾಹ : ಇಲ್ಲೇ LIVE ನೋಡಿ

ಕೃಷಿ ಕ್ಷೇತ್ರವನ್ನು ಶ್ರೀಮಂತ ಉದ್ಯಮಿಗಳ ಕೈಗೆ ಕೊಟ್ಟಿದ್ದಕ್ಕಾಗಿ ಬೆಂಬಲಿಸಬೇಕಾ:

ದೇಶದ ಕೃಷಿ ಕ್ಷೇತ್ರವನ್ನು ಅದಾನಿ, ಅಂಬಾನಿಯಂತಹ ಉದ್ಯಮಿಗಳ ಕೈಗಿಡುವ ದುಷ್ಟ ಆಲೋಚನೆಯೊಂದಿಗೆನ ಎಪಿಎಂಸಿ ತಿದ್ದುಪಡಿ ಕಾಯ್ದೆ ಸೇರಿದಂತೆ 3 ರೈತ ವಿರೋಧಿ ಕಾಯ್ದೆಗಳನ್ನು ಕೇಂದ್ರ ಸರ್ಕಾರ ಜಾರಿ ಮಾಡಿತು. ಈ ಕಾಯ್ದೆಗಳನ್ನು ವಾಪಾಸು ಪಡೆಯುವಂತೆ ಹೋರಾಟ ಮಾಡುತ್ತಿದ್ದ 750ಕ್ಕೂ ಹೆಚ್ಚು ರೈತರು ಅನಾರೋಗ್ಯ, ಹವಾಮಾನ ವೈಪರಿತ್ಯ, ಪೊಲೀಸ್‌ ದೌರ್ಜನ್ಯಗಳಿಗೆ ಬಲಿಯಾದರು. ಇವರಿಗೆ ನ್ಯಾಯ ಕೊಡಿಸಬೇಕಾದವರು ನೀವಲ್ಲವೇ ನರೇಂದ್ರ ಮೋದಿ ಅವರೇ?- ಎಂದು ಸಿದ್ದರಾಮಯ್ಯ ಕೇಳಿದ್ದಾರೆ.

Exit mobile version