ಬೆಂಗಳೂರು: ಸುಪ್ರಸಿದ್ಧ ಮನೋರೋಗ ತಜ್ಞ ಡಾ. ಸಿ. ಆರ್. ಚಂದ್ರಶೇಖರ್ ಅವರಿಗೆ 2022 ವರ್ಷದ ಮಹಾತ್ಮಾ ಗಾಂಧಿ ಸೇವಾ ಪ್ರಶಸ್ತಿಯನ್ನು ಪ್ರಕಟಿಸಲಾಗಿದೆ.
ಕರ್ನಾಟಕ ಉಚ್ಚ ನ್ಯಾಯಾಲಯದ ವಿಶ್ರಾಂತ ನ್ಯಾಯಮೂರ್ತಿ ಎ. ವಿ. ಚಂದ್ರಶೇಖರ್ ಅಧ್ಯಕ್ಷತೆಯಲ್ಲಿ ರಚಿಸಲಾಗಿದ್ದ ಆಯ್ಕೆ ಸಮಿತಿಯ ತೀರ್ಮಾನವನ್ನು ಅಂಗೀಕರಿಸಿ ರಾಜ್ಯ ಸರ್ಕಾರ ಈ ಆದೇಶ ಹೊರಡಿಸಿದೆ.
ಅಕ್ಟೋಬರ್ 2ರ ಗಾಂಧಿ ಜಯಂತಿಯಂದು ನಗರದ ಗಾಂಧಿ ಭವನದಲ್ಲಿ ನಡೆಯಲಿರುವ ವಿಶೇಷ ಸಮಾರಂಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮನೋರೋಗ ತಜ್ಞ ಡಾ. ಸಿ. ಆರ್. ಚಂದ್ರಶೇಖರ್ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಪ್ರಶಸ್ತಿಯು 5 ಲಕ್ಷ ರೂ. ನಗದನ್ನು ಒಳಗೊಂಡಿರುತ್ತದೆ.
ಡಾ. ಸಿ. ಆರ್. ಚಂದ್ರಶೇಖರ್ ಅವರ ವ್ಯಕ್ತಿತ್ವ
ರಾಷ್ಟ್ರೀಯ ಮಾನಸಿಕ ಮತ್ತು ನರರೋಗಗಳ ವಿಜ್ಞಾನ ಸಂಸ್ಥೆಯಲ್ಲಿ (ನಿಮ್ಹಾನ್ಸ್) 45 ಕ್ಕೂ ಹೆಚ್ಚು ವರ್ಷ ವೈದ್ಯರಾಗಿ ಸೇವೆ ಸಲ್ಲಿಸಿ ಹಾಗೂ ವಿದ್ಯಾರ್ಥಿಗಳಿಗೆ ಬೋಧನೆ ಮಾಡಿರುವ ಚಂದ್ರಶೇಖರ್ ಅವರು 50 ಸಾವಿರಕ್ಕೂ ಹೆಚ್ಚು ಜನರಿಗೆ ಉಚಿತ ಚಿಕಿತ್ಸೆ ನೀಡಿದ್ದಾರೆ.
ಡಾ. ಸಿ. ಆರ್. ಚಂದ್ರಶೇಖರ್ ಅವರು 40 ಸಾವಿರಕ್ಕೂ ಹೆಚ್ಚು ಜನರಿಗೆ ಪತ್ರ ಮುಖೇನ ವೈದ್ಯಕೀಯ ಸಲಹೆ ಕೊಟ್ಟಿದ್ದಾರೆ. ಅಂತೆಯೇ, 30ಸಾವಿರಕ್ಕೂ ಹೆಚ್ಚು ಉಪನ್ಯಾಸಗಳನ್ನು ನೀಡಿದ್ದಾರೆ, 20 ಸಾವಿರಕ್ಕೂ ಹೆಚ್ಚು ಜನರಿಗೆ ಆಪ್ತ ಸಮಾಲೋಚಕರ ತರಬೇತಿ ನೀಡಿದ್ದಾರೆ.
ತಾವು ಸೇವೆ ಸಲ್ಲಿಸಿದ ನಿಮ್ಹಾನ್ಸ್ ಸಂಸ್ಥೆಗೆ 1.9 ಕೋಟಿ ರೂ. ದೇಣಿಗೆ ನೀಡಿ ಉದಾರತೆ ಮೆರೆದಿರುವ ಡಾ. ಸಿ.ಆರ್. ಚಂದ್ರಶೇಖರ್ ಅವರು ಒಂದು ಸಾವಿರಕ್ಕೂ ಹೆಚ್ಚು ಲೇಖನಗಳನ್ನು ಪತ್ರಿಕೆಗಳಲ್ಲಿ ಪ್ರಕಟಿಸಿದ್ದಾರೆ. ಕನ್ನಡ ಭಾಷೆಯಲ್ಲಿ 280 ಮತ್ತು ಆಂಗ್ಲ ಭಾಷೆಯಲ್ಲಿ 40 ಪುಸ್ತಕಗಳನ್ನು ಬರೆದಿದ್ದಾರೆ.
ಶುಭಾಶಯ ಕೋರಿಕೆ
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಪ್ರಧಾನ ಕಾರ್ಯದರ್ಶಿಯವರೂ ಆಗಿರುವ ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ್ ಪ್ರಸಾದ್ ಸೇರಿದಂತೆ ಹಲವು ಗಣ್ಯರು ಈ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ.
ಈ ಎಲ್ಲಾ ಗಮನಾರ್ಹ ಸಾಧನೆಗಳನ್ನು ಪರಿಗಣಿಸಿ ಡಾ. ಸಿ. ಆರ್. ಚಂದ್ರಶೇಖರ್ ಅವರಿಗೆ ಅತ್ಯಂತ ಅಭಿಮಾನ ಹಾಗೂ ಗೌರವಪೂರ್ವಕವಾಗಿ 2022ನೇ ಸಾಲಿನ ರಾಜ್ಯ ಸರ್ಕಾರದ ಪ್ರತಿಷ್ಠಿತ “ಮಹಾತ್ಮಾ ಗಾಂಧಿ ಸೇವಾ ಪ್ರಶಸ್ತಿ”ಯನ್ನು ಪ್ರದಾನ ಮಾಡಲಾಗುತ್ತಿದೆ ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತ ಡಾ ಪಿ. ಎಸ್. ಹರ್ಷ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ | ಸವಿಸ್ತಾರ ಅಂಕಣ | ನೆಹರೂ, ಗಾಂಧಿ, ಸಾವರ್ಕರ್ ಇತ್ಯಾದಿ: ನಡೆಯಲಿ ʼಸೀಮೋಲ್ಲಂಘನೆʼ, ನಿಲ್ಲಲಿ ʼಮೂರ್ತಿ ಭಂಜನೆʼ