ಬೆಂಗಳೂರು: ರಾಜಸ್ಥಾನದ ಉದಯಪುರದಲ್ಲಿ ನಡೆದ ಕನ್ಹಯ್ಯ ಲಾಲ್ ಶಿರಚ್ಛೇದ ಪ್ರಕರಣವನ್ನು (Rajasthan Murder) ಖಂಡಿಸಿ ದೇಶದೆಲ್ಲೆಡೆ ಕಾಂಗ್ರೆಸ್ ಏಕೆ ಪ್ರತಿಭಟನೆ ಮಾಡಿಲ್ಲ ಎಂಬ ಪ್ರಶ್ನೆಗೆ ಕಾಂಗ್ರೆಸ್ ನಾಯಕರು ಉತ್ತರಿಸಬೇಕು ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಎನ್. ರವಿಕುಮಾರ್ ಆಗ್ರಹಿಸಿದರು.
ಉದಯಪುರದಲ್ಲಿ ನಡೆದ ಟೇಲರ್ ಕನ್ಹಯ್ಯ ಲಾಲ್ ಅವರ ಹತ್ಯೆಯನ್ನು ಖಂಡಿಸಿ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ವತಿಯಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಶನಿವಾರ ಆಯೋಜಿಸಿದ್ದ ಪ್ರತಿಭಟನೆಯಲ್ಲಿ ಮಾತನಾಡಿದರು. ಹತ್ಯೆ ಮಾಡಿದ ಕೊಲೆಗಡುಕರನ್ನು ಕೂಡಲೇ ರಸ್ತೆ ಮಧ್ಯದಲ್ಲಿ ಗಲ್ಲಿಗೇರಿಸಬೇಕು. ಕೊಲೆಗಡುಕರು ಮತ್ತು ಭಯೋತ್ಪಾದನೆಯನ್ನು ಬೆಂಬಲಿಸುವ ಕಾಂಗ್ರೆಸ್ ಪಕ್ಷದಿಂದ ಅಲ್ಪಸಂಖ್ಯಾತ ಬಂಧುಗಳು ದೂರ ಸರಿದು, ಬಿಜೆಪಿಯನ್ನು ಬೆಂಬಲಿಸಬೇಕು ಎಂದು ಮನವಿ ಮಾಡಿದರು.
ರಾಜ್ಯದಲ್ಲಿ ಸಿದ್ದರಾಮಯ್ಯ ಅವರೂ ಪಿಎಫ್‍ಐ, ಎಸ್‍ಡಿಪಿಐ ಮತ್ತಿತರ ಸಂಘಟನೆಗಳ 1,600 ಜನರ ಮೇಲಿದ್ದ ಪ್ರಕರಣಗಳನ್ನು ರದ್ದು ಮಾಡಿದ್ದರು. ಅವರ ಈ ದ್ವಿಮುಖ ನೀತಿಯನ್ನು ಬಿಜೆಪಿ ಖಂಡಿಸುತ್ತದೆ. ಬಿಗ್ ಬ್ರದರ್ ಡಿ.ಕೆ. ಶಿವಕುಮಾರ್ ಅವರಿಗೆ ಅಲ್ಪಸಂಖ್ಯಾತರ ಏಳಿಗೆ ಬೇಕಿಲ್ಲ. ಅವರ ಮತಗಳು ಮಾತ್ರ ಬೇಕಿದೆ ಎಂದು ಟೀಕಿಸಿದರು.
ಅಲ್ಪಸಂಖ್ಯಾತ ಮೋರ್ಚಾ ರಾಜ್ಯ ಅಧ್ಯಕ್ಷ ಸೈಯದ್ ಸಲಾಂ ಮಾತನಾಡಿ, ʻಕನ್ಹಯ್ಯ ಲಾಲ್ ಹಂತಕರಿಗೆ ಗಲ್ಲು ಶಿಕ್ಷೆ ವಿಧಿಸಬೇಕು. ಅಲ್ಲದೆ, ರಾಜಸ್ಥಾನದಲ್ಲಿ ಕಾನೂನು ಹಾಗೂ ಸುವ್ಯವಸ್ಥೆ ಹದಗೆಟ್ಟ ಕಾರಣ ರಾಷ್ಟ್ರಪತಿ ಆಳ್ವಿಕೆ ವಿಧಿಸಬೇಕುʼ ಎಂದು ಆಗ್ರಹಿಸಿದರು.
ಈ ಪ್ರತಿಭಟನೆಯಲ್ಲಿ ಪಕ್ಷದ ರಾಜ್ಯ ಕಾರ್ಯದರ್ಶಿ ಜಗದೀಶ್ ಹಿರೇಮನಿ, ಅಲ್ಪಸಂಖ್ಯಾತ ಮೋರ್ಚಾದ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಭಾಗವಹಿಸಿದ್ದರು.
ಇದನ್ನೂ ಓದಿ: Rajasthan murder: ಬಿಜೆಪಿಯೊಳಗೆ ನುಸುಳಲು ಸಂಚು ನಡೆಸಿದ್ದ ಕನ್ಹಯ್ಯ ಲಾಲ್ ಹಂತಕರು!