Site icon Vistara News

Kambala Sports : ಬೆಂಗಳೂರು ಕಂಬಳಕ್ಕೆ 1 ಕೋಟಿ ರೂ. ಘೋಷಿಸಿದ ಸಿಎಂ; ಬರಲಿದ್ದಾರೆ ಲಕ್ಷ ಲಕ್ಷ ಜನ!

Kambala sports pre event in bangalore

ಬೆಂಗಳೂರು: ಇದೇ ಪ್ರಥಮ ಬಾರಿಗೆ ರಾಜಧಾನಿ ಬೆಂಗಳೂರಿನಲ್ಲಿ ನಡೆಯಲಿರುವ ‘ಬೆಂಗಳೂರು ಕಂಬಳ’ಕ್ಕೆ (Bangalore Kambala) ಕನಿಷ್ಠ 3ರಿಂದ 5 ಲಕ್ಷ ಜನರು ಬರುವ ನಿರೀಕ್ಷೆ ಇದ್ದು, ಅದಕ್ಕೆ ತಕ್ಕಂತೆ ತಯಾರಿ ಮಾಡಿಕೊಳ್ಳಲಾಗುತ್ತಿದೆ. ಇನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರು ಈ ಕಂಬಳಕ್ಕೆ (Kambala Sports) ಸರ್ಕಾರದ ವತಿಯಿಂದ ಒಂದು ಲಕ್ಷ ರೂಪಾಯಿ ಘೋಷಣೆ ಮಾಡಿದ್ದಾರೆ ಎಂದು ಬೆಂಗಳೂರು ಕಂಬಳ ಸಮಿತಿ (ರಿ.) ಗೌರವಾಧ್ಯಕ್ಷ ಕೆ. ಪ್ರಕಾಶ್ ಶೆಟ್ಟಿ ಹೇಳಿದರು.

ನ. 25, 26ರಂದು ಅರಮನೆ ಮೈದಾನದಲ್ಲಿ ನಡೆಯಲಿರುವ ಬೆಂಗಳೂರು ಕಂಬಳ ತಯಾರಿ ಸಲುವಾಗಿ ಶನಿವಾರ ಸಂಜೆ ಬೆಂಗಳೂರಿನ ಬಂಟರ ಸಂಘದಲ್ಲಿ ಕರಾವಳಿಯ ವಿವಿಧ ಜಾತಿ-ಭಾಷಾ ಸಂಘಟನೆಗಳ ಜತೆ ನಡೆದ ಬೃಹತ್ ಸಮಾಲೋಚನಾ ಸಭೆ ಬಳಿಕ ಆಯೋಜಿಸಿದ ಬಹಿರಂಗ ಸಮಾವೇಶದಲ್ಲಿ ಕೆ. ಪ್ರಕಾಶ್ ಶೆಟ್ಟಿ ಈ ವಿಷಯ ತಿಳಿಸಿದರು.

Kambala sports pre event in bangalore

ಇದು ಐತಿಹಾಸಿಕ ಕಾರ್ಯಕ್ರಮವಾಗಿದ್ದು, ಕರಾವಳಿಯ ಸಮಸ್ತ ಸಮುದಾಯದವರು ಒಂದೆಡೆ ಒಗ್ಗಟ್ಟಾಗಿ ಸೇರುವ ಬೃಹತ್ ವೇದಿಕೆ ಇದಾಗಲಿದೆ. ಇಂದಿನ ಸಮಾಲೋಚನಾ ಸಭೆಯಲ್ಲಿ ಕರಾವಳಿಯ ವಿವಿಧ ಭಾಷೆ-ಜಾತಿಗಳ 50ಕ್ಕೂ ಅಧಿಕ ಸಂಘಟನೆಗಳು ಭಾಗಿಯಾಗಿದ್ದು ಅವರೊಂದಿಗೆ ಕಾರ್ಯಕ್ರಮದ ರೂಪುರೇಷೆ ಬಗ್ಗೆ ಮಾತುಕತೆ ನಡೆಸಲಾಗಿದೆ ಎಂದು ಕೆ. ಪ್ರಕಾಶ್ ಶೆಟ್ಟಿ ಹೇಳಿದರು.

150ಕ್ಕೂ ಅಧಿಕ ಕೋಣಗಳ ನೋಂದಣಿ

ಬೆಂಗಳೂರು ಕಂಬಳಕ್ಕೆ ಈಗಾಗಲೇ 150ಕ್ಕೂ ಅಧಿಕ ಕೋಣಗಳ ನೋಂದಣಿ ಆಗಿದ್ದು, ಆ ಎಲ್ಲ ಕೋಣಗಳನ್ನು ನ.23ರಂದು ಉಪ್ಪಿನಂಗಡಿಯಲ್ಲಿ ಬೀಳ್ಕೊಡುಗೆ ಮಾಡಿ ಕಳಿಸಿಕೊಡಲಾಗುವುದು ಎಂದು ಕಂಬಳ ಸಮಿತಿ ಅಧ್ಯಕ್ಷ, ಶಾಸಕ ಅಶೋಕ್ ರೈ ತಿಳಿಸಿದರು. ಅಷ್ಟೂ ಕೋಣಗಳನ್ನು ಹಾಸನ ಹಾಗೂ ನೆಲಮಂಗಲದಲ್ಲಿ ಅದ್ಧೂರಿಯಾಗಿ ಸ್ವಾಗತಿಸಿಕೊಳ್ಳಲಾಗುವುದು. ಅಲ್ಲದೆ ಪ್ರತಿ ತಾಲೂಕಲ್ಲೂ ಸ್ವಾಗತ-ಬೀಳ್ಕೊಡುಗೆ ಇರಲಿದೆ ಎಂದು ಕೆ. ಪ್ರಕಾಶ್ ಶೆಟ್ಟಿ ಹೇಳಿದರು.

Kambala sports pre event in bangalore

70 ಎಕರೆ ಜಾಗದಲ್ಲಿ ಕಂಬಳ

ಸಮಿತಿ ಕಾರ್ಯಾಧ್ಯಕ್ಷ, ಸಂಗೀತ ನಿರ್ದೇಶಕ ಗುರುಕಿರಣ್ ಮಾತನಾಡಿ, ಬೆಂಗಳೂರು ಕಂಬಳ ಬೆಂಗಳೂರಿನ ಅರಮನೆ ಮೈದಾನದ 70 ಎಕರೆ ಜಾಗದಲ್ಲಿ ನಡೆಯಲಿದೆ ಎಂದು ತಿಳಿಸಿದರು.

ಥೀಮ್‌ ಸಾಂಗ್‌ ಬಿಡುಗಡೆ

‘ಬೆಂಗಳೂರು ಕಂಬಳ ನಮ್ಮ ಕಂಬಳ’ ಎಂಬ ಥೀಮ್ ಸಾಂಗ್ ಇದೇ ಸಂದರ್ಭದಲ್ಲಿ ಬಿಡುಗಡೆ ಮಾಡಲಾಯಿತು. ಈ ಥೀಮ್ ಸಾಂಗ್‌ ವಿ.ಮನೋಹರ್ ಸಾಹಿತ್ಯ, ಗುರುಕಿರಣ್ ಸಂಗೀತ ಸಂಯೋಜನೆ, ಮಣಿಕಾಂತ್ ಕದ್ರಿ ಪ್ರೋಗ್ರಾಮಿಂಗ್‌ನಲ್ಲಿ ಮೂಡಿ ಬಂದಿದೆ.

ಒಂದು ಕೋಟಿ ರೂ. ಘೋಷಿಸಿದ ಸಿಎಂ

ಬೆಂಗಳೂರು ಕಂಬಳಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 1 ಕೋಟಿ ರೂ. ಅನುದಾನ ಘೋಷಿಸಿದ್ದಾರೆ ಎಂದು ಕಂಬಳ ಸಮಿತಿ ಉಪಾಧ್ಯಕ್ಷ ಗುಣರಂಜನ್ ಶೆಟ್ಟಿ ತಿಳಿಸಿದ್ದಾರೆ.

ಐಶ್ವರ್ಯಾ ರೈ, ಅನುಷ್ಕಾ ಶೆಟ್ಟಿ ಭಾಗಿ

ಬೆಂಗಳೂರು ಕಂಬಳಕ್ಕೆ ಬಾಲಿವುಡ್ ನಟಿ ಐಶ್ವರ್ಯಾ ರೈ, ಕರಾವಳಿ ಬೆಡಗಿ ಅನುಷ್ಕಾ ಶೆಟ್ಟಿ ಸೇರಿದಂತೆ ವಿವಿಧ ಚಿತ್ರರಂಗಗಳಲ್ಲಿ ಇರುವ ಕರಾವಳಿ ಮೂಲದ ಸಿನಿಮಾತಾರೆಯರು ಆಗಮಿಸಲಿದ್ದಾರೆ ಎಂದು ಸಮಿತಿ ಸಂಘಟನಾ ಅಧ್ಯಕ್ಷ ಉಮೇಶ್ ಶೆಟ್ಟಿ ತಿಳಿಸಿದ್ದಾರೆ.

ಇದನ್ನೂ ಓದಿ: Karnataka Live News : ರಾಜ್ಯದಲ್ಲಿನ ಪ್ರಮುಖ ಬೆಳವಣಿಗೆಗಳ ಲೇಟೆಸ್ಟ್ ಮಾಹಿತಿ; ರಾಜ್ಯಾದ್ಯಂತ ಭಾರಿ ಮಳೆ ಸಾಧ್ಯತೆ!

ಬೆಂಗಳೂರು ಕಂಬಳಕ್ಕೆ ಆಭರಣ ಜುವೆಲ್ಲರ್ಸ್ ಅವರು ಶೀರ್ಷಿಕೆ ಪ್ರಾಯೋಜಕರಾಗಿದ್ದು, ಆಭರಣ ಜುವೆಲ್ಲರ್ಸ್‌ನ ವ್ಯವಸ್ಥಾಪಕ ನಿರ್ದೇಶಕ ಪ್ರಕಾಶ್ ಕಾಮತ್, ಬೆಂಗಳೂರು ಕಂಬಳ ಸಮಿತಿ ಗೌರವ ಸಲಹೆಗಾರ ಉಪೇಂದ್ರ ಶೆಟ್ಟಿ ಉಪಸ್ಥಿತರಿದ್ದರು.

Exit mobile version