ಬೆಂಗಳೂರು: ಶರಾವತಿ ವಿದ್ಯುತ್ ಯೋಜನೆಗೆ ಭೂಮಿ ಕಳೆದುಕೊಂಡ ಸಂತ್ರಸ್ತರಿಗೆ ನ್ಯಾಯ ಒದಗಿಸಲು ಶೀಗ್ರದಲ್ಲೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುತ್ತದೆ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.
ಶರಾವತಿ ಸಂತ್ರಸ್ತರ ಸಮಸ್ಯೆ ಕುರಿತು ವಿಧಾನಸಭೆಯಲ್ಲಿ ಉನ್ನತ ಮಟ್ಟದ ಸಭೆ ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. ಸಭೆಯಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ, ಶಾಸಕ ಹರತಾಳು ಹಾಲಪ್ಪ, ಸಂಸದ ಬಿ.ವೈ. ರಾಘವೇಂದ್ರ ಮುಂತಾದವರು ಭಾಗಿಯಾಗಿದ್ದರು.
ನಂತರ ಮಾತನಾಡಿದ ಯಡಿಯೂರಪ್ಪ, ಶರಾವತಿ ಹಿನ್ನೀರಿನಿಂದ ಭೂಮಿ ಕಳೆದುಕೊಂಡು ಸಂತ್ರಸ್ತರಾಗಿದ್ದಾರೆ. ಸಂತ್ರಸ್ತರಿಗೆ ಪುನರ್ವಸತಿ ಕಲ್ಪಿಸುವ ಕುರಿತು ಶಿವಮೊಗ್ಗದಲ್ಲಿ ಸಾಕಷ್ಟು ಆಗ್ರಹ ಕೇಳಿಬಂದಿದೆ. ಸಂತ್ರಸ್ತರಿಗೆ ವಸತಿ ಸೌಲಭ್ಯ ಕಲ್ಪಿಸುವ ಕುರಿತು ಸಭೆಯಲ್ಲಿ ಚರ್ಚೆ ಆಗಿದೆ.
ಶರವಾತಿ ಸಂತ್ರಸ್ತರಿಗೆ ತಾವು ಉಳುಮೆ ಮಾಡುತ್ತಿರುವ ಜಮೀನಿನ ಹಕ್ಕು ನೀಡುವುದು ಕಳೆದ 60 ವರ್ಷದಿಂದ ಉಳಿದಿದೆ. ಆರಗ ಜ್ಞಾನೇಂದ್ರ, ರಾಘವೇಂದ್ರ ಅವರು ಕೇಂದ್ರ ಸಚಿವ ಭೂಪೇಂದ್ರ ಯಾದವ್ ಅವರನ್ನು ಭೇಟಿ ಮಾಡಿದ್ದರು. ಪ್ರಸ್ತಾವನೆ ಸಲ್ಲಿಸಿ, ಸಮಸ್ಯೆ ಪರಿಹಾರ ಮಾಡುತ್ತೇವೆ ಎಂದು ಕೇಂದ್ರ ಸಚಿವರು ತಿಳಿಸಿದ್ದಾರೆ. ಈಗ ರಾಜ್ಯದಿಂದ ಪ್ರಸ್ತಾವನೆ ಸಲ್ಲಿಕೆಗೆ ಮುಂದಾಗಿದ್ದೇವೆ. ಇಂದು ಪ್ರಸ್ತಾವನೆ ಸಲ್ಲಿಸುತ್ತಿದ್ದೇವೆ. ಸಮಸ್ಯೆ ಬಗೆ ಹರಿಸುವ ಪ್ರಾಮಾಣಿಕ ಪ್ರಯತ್ನ ಮಾಡಲಿದ್ದೇವೆ ಎಂದರು.
ಇದನ್ನೂ ಓದಿ : Sharavathi Drowned Victim | ಶರಾವತಿ ಮುಳುಗಡೆ ಸಂತ್ರಸ್ತರ ಭೂಮಿ ಹಕ್ಕು ನೀಡುವ ಬಗ್ಗೆ ಅಧಿವೇಶನದಲ್ಲಿ ಗಮನ ಸೆಳೆದ ಸಂಸದ ರಾಘವೇಂದ್ರ
ರಾಜ್ಯಕ್ಕೆ ಬೆಳಕನ್ನು ನೀಡಿದ ಜನರು ತಮ್ಮ ಭೂಮಿ ಕಳೆದುಕೊಂಡು ತೊಂದರೆಯಲ್ಲಿದ್ದಾರೆ. ಈ ಬಗ್ಗೆ ಜಿಲ್ಲಾಡಳಿತ ಸರ್ವೇ ಮಾಡಿ ಪ್ರಸ್ತಾವನೆ ಸಿದ್ದಪಡಿಸಿದೆ. 9,119 ಎಕರೆ ಜಮೀನು ಹಕ್ಕು ನೀಡಲು ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಲು ತೀರ್ಮಾನ ಮಾಡಿದ್ದೇವೆ. ಹಿಂದಿನ ಸರ್ವೇಗೂ ಈಗಿನ ಸರ್ವೇಗೂ 700 ಎಕರೆ ವ್ಯತ್ಯಾಸ ಇತ್ತು, ಅದನ್ನ ಸರಿಪಡಿಸಿದ್ದೇವೆ. ಪ್ರೋಪೋಸಲ್ ಕಳುಹಿಸಿಕೊಡಲು ತೀರ್ಮಾನ ಮಾಡಿದ್ದೇವೆ. ಒಟ್ಟು 12 ಸಾವಿರ ಕುಟುಂಬಗಳಿಗೆ ಹಕ್ಕು ಪತ್ರ ನೀಡಲು ತೀರ್ಮಾನ ಮಾಡಲಾಗಿದೆ ಎಂದು ಹೇಳಿದರು.