ಬೆಂಗಳೂರು: ವಿಧಾನ ಪರಿಷತ್ ದಕ್ಷಿಣ ಪದವೀಧರರ ಕ್ಷೇತ್ರದ ಚುನಾವಣೆ ಸಂಬಂಧ ಉನ್ನತ ಶಿಕ್ಷಣ ಸಚಿವರಾದ ಡಾ. ಸಿ.ಎನ್. ಅಶ್ವತ್ಥ್ ನಾರಾಯಣ್ ಅವರು ಮಾದರಿ ನೀತಿ ಸಂಹಿತೆ ಉಲ್ಲಂಘಿಸಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ ಎಂದು ಮಂಡ್ಯ ಜಿಲ್ಲಾಧಿಕಾರಿಗೆ ವರದಿ ಸಲ್ಲಿಸಲಾಗಿದೆ.
ಈ ಕುರಿತು ಲಭ್ಯವಾದ ದಾಖಲೆಗಳ ಸಹಿತ ವರದಿಯನ್ನು ಮಾದರಿ ನೀತಿ ಸಂಹಿತೆ ತಂಡದ ಮುಖ್ಯಸ್ಥರೂ ಆಗಿರುವ ಮಂಡ್ಯ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಯವರು ಮಂಡ್ಯ ಜಿಲ್ಲಾಧಿಕಾರಿಗಳಿಗೆ ಸಲ್ಲಿಸಿದ್ದಾರೆ.
ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ ಹಿನ್ನೆಲೆಯಲ್ಲಿ ಸಚಿವರ ವಿರುದ್ಧ ನೋಟಿಸ್ ಜಾರಿಯಾಗಿದೆ. ದಕ್ಷಿಣ ಪದವೀಧರ ಕ್ಷೇತ್ರದ ಚುನಾವಣೆ ಹಿನ್ನೆಲೆಯಲ್ಲಿ ಮೇ 16ರಂದು ಮಂಡ್ಯದ ಮಿಮ್ಸ್ ಮಹಿಳಾ ಸರ್ಕಾರಿ ಕಾಲೇಜಿಗೆ ಸಚಿವ ಡಾ. ಅಶ್ವತ್ಥ್ ನಾರಾಯಣ ಭೇಟಿ ನೀಡಿದ್ದರು. ಈ ಕುರಿತು ಚುನಾವಣಾ ಆಯೋಗಕ್ಕೆ ಸಚಿವರ ವಿರುದ್ಧ ಮಂಡ್ಯ ಜಿಲ್ಲಾ ಕಾಂಗ್ರೆಸ್ ವತಿಯಿಂದ ದೂರು ದಾಖಲಿಸಲಾಗಿತ್ತು. ಖಾಸಗಿ ಕಾಲೇಜು ಆಡಳಿತ ಮಂಡಳಿ ಸಭೆ ಆಯೋಜನೆ ಮಾಡಿತ್ತು, ಆದರೆ ಅಲ್ಲಿ ಸಚಿವರಿಂದ ಆಡಳಿತ ಯಂತ್ರದ ದುರುಪಯೋಗವಾಗಿದೆ. ನೀತಿ ಸಂಹಿತೆ ಉಲ್ಲಂಘನೆಯಾಗಿದೆ ಎಂಬ ಆರೋಪ ಕೇಳಿಬಂದಿತ್ತು. ಈ ಹಿನ್ನೆಯಲ್ಲಿ ಉನ್ನತ ಶಿಕ್ಷಣ ಸಚಿವರಿಗೆ ನೋಟಿಸ್ ನೀಡಲಾಗಿದೆ.
ಸಚಿವರು ನಗರದ ಮಿಮ್ಸ್, ಮಹಿಳಾ ಸರ್ಕಾರಿ ಕಾಲೇಜು, ಮಾಂಡವ್ಯ ಸಮೂಹ ಸಂಸ್ಥೆ ಹಾಗೂ ಪಿ.ಇ.ಎಸ್. ಕಾಲೇಜುಗಳಿಗೆ ಭೇಟಿ ನೀಡಿ, ಕಾಲೇಜುಗಳಲ್ಲಿ ಸಭೆಗಳನ್ನು ಆಯೋಜಿಸುವುದರ ಮೂಲಕ ಬಿಜೆಪಿ ಅಭ್ಯರ್ಥಿ ಹಾಗೂ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿದ್ದಾರೆ. ಮತದಾರರ ಮೇಲೆ ಪ್ರಭಾವ ಬೀರಿ ಚುನಾವಣಾ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಾರೆ. ಅವರ ವಿರುದ್ಧ ಕಾನೂನು ರೀತ್ಯಾ ಕ್ರಮ ಕೈಗೊಳ್ಳಬೇಕೆಂದು ಮಂಡ್ಯ ಜಿಲ್ಲಾ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ದೂರು ನೀಡಿದ್ದರು.
ಈ ಸಂಬಂಧ ತನಿಖೆ ನಡೆಸಿದ ಮಂಡ್ಯ ಜಿಲ್ಲಾ ಮಟ್ಟದ ಮಾದರಿ ನೀತಿ ಸಂಹಿತೆ ತಂಡದ ಮುಖ್ಯಸ್ಥರು ಮಂಡ್ಯ ನಗರದ ಮಿಮ್ಸ್ ಮಹಿಳಾ ಸರ್ಕಾರಿ ಕಾಲೇಜು, ಮಾಂಡವ್ಯ ಸಮೂಹ ಸಂಸ್ಥೆ ಹಾಗೂ ಪಿ.ಇ.ಎಸ್. ಕಾಲೇಜುಗಳಿಗೆ ಭೇಟಿ ನೀಡಿ ಹೇಳಿಕೆ ಪಡೆದಿದ್ದಾರೆ.