ಬೆಂಗಳೂರು: ಕಲುಷಿತ ನೀರು (Contaminated water) ಸೇವನೆಯಿಂದ ಮರಣ ಪ್ರಕರಣ ಪ್ರಕರಣಗಳು ಮರುಕಳಿಸಿದರೆ ಜಿ.ಪಂ ಸಿಇಒಗಳನ್ನು (Zilla Panchayat CEO) ನೇರವಾಗಿ ಹೊಣೆಗಾರರನ್ನಾಗಿಸಿ ಅಮಾನತು ಮಾಡಲಾಗುವುದು. ಹಾಗೂ ನಗರಸಭೆಗಳ ಆಯುಕ್ತರ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಎಚ್ಚರಿಕೆ ನೀಡಿದ್ದಾರೆ. ಮಂಗಳವಾರ ನಡೆದ ಕುಡಿಯುವ ನೀರಿನ ಸಮಸ್ಯೆ ಕುರಿತ ಸಭೆಯಲ್ಲಿ ಅವರು ಮುಖ್ಯಮಂತ್ರಿಗಳು ಈ ಎಚ್ಚರಿಕೆ ನೀಡಿದರು. ರಾಜ್ಯದ ಚಿತ್ರದುರ್ಗ, ರಾಯಚೂರು ಸೇರಿದಂತೆ ಹಲವು ಕಡೆ ಸಂಭವಿಸಿದ ಕಲುಷಿತ ನೀರು ದುರಂತದಲ್ಲಿ ಹಲವರು ಪ್ರಾಣ ಕಳೆದುಕೊಂಡಿರುವ ಹಿನ್ನೆಲೆಯಲ್ಲಿ ಸಿಎಂ ಎಚ್ಚರಿಕೆ ಮಹತ್ವ ಪಡೆದಿದೆ.
ರಾಜ್ಯಾದ್ಯಂತ ನೈರ್ಮಲ್ಯ ಅಭಿಯಾನಕ್ಕೆ (Cleaning Abhiyan) ಸೂಚನೆ
ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಬಡವರು ವಾಸಿಸುವ ಕೊಳಗೇರಿಗಳಲ್ಲಿ ಕುಡಿಯುವ ನೀರಿನ ಪೈಪ್ ಲೈನ್ ಹಾಗೂ ಚರಂಡಿ ನೀರಿನ ಪೈಪುಗಳು ಪ್ರತ್ಯೇಕವಾಗಿರುವುದನ್ನು ಖಾತ್ರಿಪಡಿಸಬೇಕು. ಪ್ರತ್ಯೇಕ ಇಲ್ಲದಿರುವ ಸ್ಥಳಗಳನ್ನು ಗುರುತಿಸಿ ರಾಜ್ಯದಲ್ಲಿ ಈ ಕುರಿತು ನೈರ್ಮಲ್ಯ ಅಭಿಯಾನ ಕೈಗೊಂಡು 15 ದಿನಗಳಲ್ಲಿ ಈ ಕುರಿತು ವರದಿ ಸಲ್ಲಿಸಬೇಕೆಂದು ಮುಖ್ಯ ಮಂತ್ರಿಗಳು ಸೂಚಿಸಿದರು.
ಸರಿಯಾದ ನಿರ್ವಹಣೆ ಇಲ್ಲದೆ ಸಾವು ಎಂದ ಸಿದ್ದರಾಮಯ್ಯ
ರಾಜ್ಯದಲ್ಲಿ ಕಲುಷಿತ ನೀರಿನ ಸೇವನೆಯಿಂದಾಗಿ 13-14 ಜನ ಸಾವಿಗೀಡಾಗಿದ್ದು, ಚಿತ್ರದುರ್ಗದಲ್ಲಿಯೇ 6-7 ಜನ ಅಸುನೀಗಿದ್ದಾರೆ. ಇದನ್ನು ತಪ್ಪಿಸಲು ಸಾಧ್ಯವಿದೆ. ಕೆಲವೆಡೆ ನಿರ್ವಹಣೆ ಇಲ್ಲದೆ ಇರುವುದರಿಂದ ಈ ರೀತಿ ಅವಘಡಗಳು ಸಂಭವಿಸುತ್ತದೆ ಎಂದು ಮುಖ್ಯಮಂತ್ರಿಗಳು ಹೇಳಿದರು. ಗ್ರಾಮೀಣಾಭಿವೃದ್ಧಿ, ಆರೋಗ್ಯ, ಪೌರಾಡಳಿತ ಹಾಗೂ ನಗರಾಭಿವೃದ್ಧಿ – ಈ ನಾಲ್ಕು ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಸೂಚಿಸಿದರು. ಹಾಸ್ಟೆಲ್ ಗಳಲ್ಲಿಯೂ ವಿದ್ಯಾರ್ಥಿಗಳು ಕಲುಷಿತ ನೀರು ಕುಡಿದು ಆಸ್ಪತ್ರೆ ಸೇರಿದ್ದಾರೆ . ಈ ಬಗ್ಗೆ ಸಮರೋಪಾದಿಯಲ್ಲಿ ಕೆಲಸಗಳಾಗಬೇಕು ಎಂದರು.
ಟ್ಯಾಂಕ್ ಗಳ ಸ್ವಚ್ಛತಾ ಕಾರ್ಯಕ್ಕೆ ತುರ್ತು ಆದ್ಯತೆ
ಪೈಪ್ ಲೈನ್‌ಗಳನ್ನು ಸರಿಪಡಿಸುವುದು, ಟ್ಯಾಂಕ್‌ಗಳ ಸ್ವಚ್ಛತಾ ಕಾರ್ಯವನ್ನು ತುರ್ತಾಗಿ ಕೈಗೊಳ್ಳಬೇಕು ಎಂದು ಸಿದ್ದರಾಮಯ್ಯ ಸೂಚಿಸಿದರು.
ನೈರ್ಮಲ್ಯ ಮತ್ತು ಸ್ವಚ್ಛತೆಗೆ ಪ್ರತ್ಯೇಕವಾಗಿ ಕನಿಷ್ಠ ಮೊತ್ತವನ್ನು ನಿಗದಿ ಮಾಡಬೇಕು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅಭಿಪ್ರಾಯಪಟ್ಟರು. ಸಾಮಾನ್ಯವಾಗಿ ಎಸ್.ಸಿ.ಎಸ್.ಪಿ/ ಟಿ. ಎಸ್.ಪಿ ಯಡಿ ಆದ್ಯತೆಯನ್ನು ರಸ್ತೆ, ಇನ್ನಿತರ ಕಾಮಗಾರಿಗಳಿಗೆ ವಹಿಸಲಾಗುತ್ತದೆ ಎಂದರು.
39 ತಾಲೂಕುಗಳಲ್ಲಿ ಕುಡಿಯುವ ನೀರಿನ ಅಭಾವವಿದೆ. 121 ಹಳ್ಳಿಗಳಲ್ಲಿ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ. ಇದಕ್ಕೆ 86 ಕೋಟಿ ರೂ.ಗಳ ಅನುದಾನ ಅಗತ್ಯವಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ ಖರ್ಗೆ ಸಭೆಯ ಗಮನಕ್ಕೆ ತಂದರು.
ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್, ಸಹಕಾರ ಸಚಿವ ಕೆ.ಎನ್.ರಾಜಪ್ಪ, ಪೌರಾಡಳಿತ ಸಚಿವ ರಹೀಮ್ ಖಾನ್, ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಡಾ: ರಜನೀಶ್ ಗೋಯಲ್, ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಇದನ್ನೂ ಓದಿ: Contaminated Water: ಗೌರಿಬಿದನೂರಿನಲ್ಲಿ ಕಲುಷಿತ ನೀರು ಸೇವಿಸಿ 10 ವರ್ಷದ ಬಾಲಕಿ ಸಾವು