ಬೆಂಗಳೂರು: ಭಾರತ್ ಜೋಡೊ ಯಾತ್ರೆಯ ವೇಳೆ ಕೆಜಿಎಫ್-೨ ಚಿತ್ರದ ಹಾಡನ್ನು ಬಳಸಿದ ವಿವಾದಕ್ಕೆ ಸಂಬಂಧಿಸಿ ಹೈಕೋರ್ಟ್ ರಾಹುಲ್ ಗಾಂಧಿ ಸೇರಿದಂತೆ ಕಾಂಗ್ರೆಸ್ ನಾಯಕರಿಗೆ ಬಿಗ್ ರಿಲೀಫ್ ನೀಡಿದೆ.
ಹಾಡನ್ನು ಅಕ್ರಮವಾಗಿ ಬಳಸಿಕೊಳ್ಳಲಾಗಿದೆ, ಆ ಮೂಲಕ ಎಂಆರ್‌ಟಿ ಮ್ಯೂಸಿಕ್ ಕಂಪನಿಯ ಹಕ್ಕುಸ್ವಾಮ್ಯವನ್ನು ಉಲ್ಲಂಘಿಸಲಾಗಿದೆ ಎಂದು ಆರೋಪಿಸಿ ಹೈಕೋರ್ಟ್‌ನಲ್ಲಿ ದಾವೆ ಸಲ್ಲಿಸಲಾಗಿತ್ತು. ಇದರ ವಿಚಾರದಲ್ಲಿ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್ ರಾಹುಲ್ ಗಾಂಧಿ, ಜೈರಾಮ್ ರಮೇಶ್, ಸುಪ್ರಿಯಾ ವಿರುದ್ಧದ ಕ್ರಿಮಿನಲ್ ಪ್ರಕರಣಕ್ಕೆ ಮಧ್ಯಂತರ ತಡೆ ನೀಡಿದೆ.
ಕಾಂಗ್ರೆಸ್ ನಾಯಕರಿಗೂ ಕಾಪಿರೈಟ್ ಉಲ್ಲಂಘನೆಗೂ ಸಂಬಂಧವಿಲ್ಲ. ದೂರಿನಲ್ಲಿ ಕ್ರಿಮಿನಲ್ ಪ್ರಕರಣದ ಯಾವುದೇ ಅಂಶಗಳಿಲ್ಲ ಎಂದು ಎಂದು ರಾಹುಲ್ ಗಾಂಧಿ ಪರ ಹಿರಿಯ ವಕೀಲ ಎ.ಎಸ್.ಪೊನ್ನಣ್ಣ ವಾದ ಮಂಡಿಸಿದರು. ಈ ವಾದ-ಪ್ರತಿವಾದ ಆಲಿಸಿದ ನ್ಯಾ.ಸುನೀಲ್ ದತ್ ಯಾದವ್, ಕ್ರಿಮಿನಲ್ ಪ್ರಕರಣಕ್ಕೆ ಮಧ್ಯಂತರ ತಡೆ ನೀಡಿದರು.
ಈ ಹಿಂದೆ ಏನಾಗಿತ್ತು?
ಕೆಜಿಎಫ್-2 ಚಿತ್ರದ ಹಾಡನ್ನು ಅಕ್ರಮವಾಗಿ ಬಳಸಿಕೊಂಡು ತನ್ನ ಹಕ್ಕುಸ್ವಾಮ್ಯವನ್ನು ಉಲ್ಲಂಘಿಸಿದೆ ಎಂದು ಎಂಆರ್‌ಟಿ ಮ್ಯೂಸಿಕ್ ಕಂಪನಿ ಹೈಕೋರ್ಟ್ ಮೆಟ್ಟಿಲೇರಿತ್ತು. ಕಾಂಗ್ರೆಸ್ ಪಕ್ಷದ ಮತ್ತು ಭಾರತ್ ಜೋಡೋ ಯಾತ್ರೆಯ ಟ್ವಿಟರ್ ಖಾತೆಗಳನ್ನು ತಾತ್ಕಾಲಿಕವಾಗಿ ನಿರ್ಬಂಧಿಸುವಂತೆ ಕೋರಿತ್ತು. ಇದೇ ಆಧಾರದಲ್ಲಿ ಬೆಂಗಳೂರಿನ ವಾಣಿಜ್ಯ ನ್ಯಾಯಾಲಯವು ಟ್ವಿಟರ್‌ಗೆ ಭಾರತ್ ಜೋಡೊ ಟ್ವಿಟರ್ ಖಾತೆಯನ್ನು ನಿರ್ಬಂಧಿಸಲು ಸೂಚಿಸಿತ್ತು.
ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ರಾಹುಲ್ ಗಾಂಧಿ ಕಾಲ್ನಡಿಗೆಯಲ್ಲಿ ಸಾಗುವ ವಿಡಿಯೋಗೆ ‘ಕೆಜಿಎಫ್ 2’ ಚಿತ್ರದ ಹಿಂದಿ ಗೀತೆ ‘ಸುಲ್ತಾನ್..’ ಹಾಡನ್ನು ಬಳಕೆ ಮಾಡಲಾಗಿತ್ತು. ಈ ಕಾರಣಕ್ಕೆ ರಾಹುಲ್ ಗಾಂಧಿ ವಿರುದ್ಧ ಈ ಹಾಡಿನ ಹಿಂದಿ ಹಕ್ಕನ್ನು ಹೊಂದಿರುವ ಎಂಆರ್‌ಟಿ ಮ್ಯೂಸಿಕ್ನವರು ಫೋರ್ಜರಿ ಪ್ರಕರಣ ದಾಖಲು ಮಾಡಿದ್ದರು. ರಾಹುಲ್ ಗಾಂಧಿ ಮಾತ್ರವಲ್ಲದೆ, ಜೈರಾಮ್ ರಮೇಶ್, ಸುಪ್ರಿಯಾ ವಿರುದ್ಧವೂ ಎಫ್ಐಆರ್ ದಾಖಲಾಗಿತ್ತು.