ಕಳೆದ ಕೆಲವು ದಿನಗಳಿಂದ ಸಾರ್ವಜನಿಕ ವಲಯದಲ್ಲಿ ತೀವ್ರ ಆತಂಕ ಮೂಡಿಸಿದ್ದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ವದಂತಿಗಳಿಗೆ ಕೇಂದ್ರ ಸರ್ಕಾರ ಅಧಿಕೃತವಾಗಿ ತೆರೆ ಎಳೆದಿದೆ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಲೀಟರ್‌ಗೆ 25 ರಿಂದ 28 ರೂಪಾಯಿಗಳಷ್ಟು ಏರಿಕೆಯಾಗಲಿದೆ ಎಂಬ ವರದಿಗಳನ್ನು ಸರ್ಕಾರ ಸಂಪೂರ್ಣವಾಗಿ ತಳ್ಳಿಹಾಕಿದೆ. ಈ ಕುರಿತು ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಸ್ಪಷ್ಟನೆ ನೀಡಿದ್ದು, ಅಂತಹ ಯಾವುದೇ ದರ ಏರಿಕೆಯ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ ಎಂದು ದೃಢಪಡಿಸಿದೆ. ಇಂತಹ ಸುದ್ದಿಗಳು ಕೇವಲ ಜನರಲ್ಲಿ ಭಯ ಹುಟ್ಟಿಸುವ ದುರುದ್ದೇಶದಿಂದ ಕೂಡಿದ್ದು, ಸಾರ್ವಜನಿಕರು ಇವುಗಳಿಗೆ ಕಿವಿಗೊಡಬಾರದು ಎಂದು ವಿನಂತಿಸಿದೆ.
ವಿಧಾನಸಭಾ ಚುನಾವಣೆಗಳು ಏಪ್ರಿಲ್ 29ಕ್ಕೆ ಕೊನೆಗೊಳ್ಳುತ್ತಿದ್ದಂತೆ ಇಂಧನ ದರ ಗಗನಕ್ಕೇರಲಿದೆ ಮತ್ತು ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಬ್ಯಾರೆಲ್‌ಗೆ 120 ಡಾಲರ್ ತಲುಪಿರುವುದು ಇದಕ್ಕೆ ಕಾರಣ ಎಂಬ ವರದಿಗಳು ಹರಿದಾಡುತ್ತಿದ್ದವು. ಈ ಬಗ್ಗೆ ಪ್ರತಿಕ್ರಿಯಿಸಿರುವ ಕೇಂದ್ರ ಸರ್ಕಾರ, ಕಳೆದ ನಾಲ್ಕು ವರ್ಷಗಳಲ್ಲಿ ಜಾಗತಿಕವಾಗಿ ತೈಲ ಬೆಲೆ ಏರಿಕೆಯಾಗಿದ್ದರೂ ಭಾರತದಲ್ಲಿ ಬೆಲೆಗಳನ್ನು ನಿಯಂತ್ರಣದಲ್ಲಿಟ್ಟಿರುವ ಏಕೈಕ ದೇಶ ನಮ್ಮದಾಗಿದೆ ಎಂದು ಪುನರುಚ್ಚರಿಸಿದೆ. ಮಧ್ಯಪ್ರಾಚ್ಯದ ಸಂಘರ್ಷದಂತಹ ಕಠಿಣ ಪರಿಸ್ಥಿತಿಯಲ್ಲೂ ನಾಗರಿಕರನ್ನು ರಕ್ಷಿಸಲು ಸರ್ಕಾರ ಅಬಕಾರಿ ಸುಂಕವನ್ನು ಈಗಾಗಲೇ ಲೀಟರ್‌ಗೆ 10 ರೂಪಾಯಿಗಳಷ್ಟು ಕಡಿತಗೊಳಿಸಿರುವುದನ್ನು ನೆನಪಿಸಿದೆ.
ದೇಶದ ಇಂಧನ ಭದ್ರತೆಯ ಬಗ್ಗೆಯೂ ಭರವಸೆ ನೀಡಿರುವ ಸರ್ಕಾರ, ಸದ್ಯ ಎಲ್ಲಾ ರಿಫೈನರಿಗಳು ಪೂರ್ಣ ಸಾಮರ್ಥ್ಯದಲ್ಲಿ ಕಾರ್ಯನಿರ್ವಹಿಸುತ್ತಿವೆ ಮತ್ತು ದೇಶದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಲಭ್ಯತೆಗೆ ಯಾವುದೇ ಕೊರತೆಯಿಲ್ಲ ಎಂದು ತಿಳಿಸಿದೆ. ಕಚ್ಚಾ ತೈಲ ಪೂರೈಕೆಯ ಮೇಲೆ ಸರ್ಕಾರ ನಿರಂತರ ನಿಗಾ ವಹಿಸಿದ್ದು, ಜನಸಾಮಾನ್ಯರ ಮೇಲೆ ಆರ್ಥಿಕ ಹೊರೆಯಾಗದಂತೆ ಕ್ರಮ ವಹಿಸುತ್ತಿದೆ. ಇದರಿಂದಾಗಿ ಪೆಟ್ರೋಲ್ ಬೆಲೆ ಏರಿಕೆಯ ಭೀತಿಯಲ್ಲಿದ್ದ ವಾಹನ ಸವಾರರು ಮತ್ತು ಸಾರ್ವಜನಿಕರು ಸದ್ಯಕ್ಕೆ ನಿಟ್ಟುಸಿರು ಬಿಡುವಂತಾಗಿದೆ.

