Site icon Vistara News

BS Yediyurappa: ಪ್ರಜ್ವಲ್‌ ಕೇಸ್‌ನಿಂದ ಬಿಜೆಪಿ-ಜೆಡಿಎಸ್‌ ಮೈತ್ರಿಗೆ ಧಕ್ಕೆ? ಯಡಿಯೂರಪ್ಪ ಹೇಳಿದ್ದಿಷ್ಟು

BS Yediyurappa

POCSO Case: Arrest Warrant Issued Against BS Yediyurappa

ಮೈಸೂರು: ಹಾಸನ ಜೆಡಿಎಸ್‌ ಸಂಸದ ಪ್ರಜ್ವಲ್‌ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣವು (Prajwal Revanna Case) ಕರ್ನಾಟಕ ಮಾತ್ರವಲ್ಲ ದೇಶಾದ್ಯಂತ ಸಂಚಲನ ಮೂಡಿಸಿದೆ. ಇದರಿಂದ ಕರ್ನಾಟಕದಲ್ಲಿ ಬಿಜೆಪಿ ಹಾಗೂ ಜೆಡಿಎಸ್‌ ಮೈತ್ರಿಗೆ ಭಂಗ ತಂದಿದೆ ಎಂಬ ಮಾತುಗಳು ಕೇಳಿಬರುತ್ತಿವೆ. ಇದರ ಬೆನ್ನಲ್ಲೇ, ಬಿಜೆಪಿ ವರಿಷ್ಠ ನಾಯಕ ಬಿ.ಎಸ್.ಯಡಿಯೂರಪ್ಪ (BS Yediyurappa) ಅವರು ಮೈಸೂರಿನಲ್ಲಿ ಸ್ಪಷ್ಟನೆ ನೀಡಿದ್ದು, “ಪ್ರಜ್ವಲ್ ರೇವಣ್ಣ ಕೇಸ್‌ನಿಂದ ರಾಜ್ಯದಲ್ಲಿ ಬಿಜೆಪಿ ಹಾಗೂ ಜೆಡಿಎಸ್‌ ಮೈತ್ರಿಗೆ ಯಾವುದೇ ಭಂಗ ತರುವುದಿಲ್ಲ” ಎಂದು ತಿಳಿಸಿದರು.

“ಕರ್ನಾಟಕದಲ್ಲಿ ಯಾವುದೇ ಕಾರಣಕ್ಕೂ ಬಿಜೆಪಿ ಹಾಗೂ ಜೆಡಿಎಸ್‌ ನಡುವಿನ ಹೊಂದಾಣಿಕೆಯ ಮೈತ್ರಿಗೆ ಧಕ್ಕೆ ಬರುವುದಿಲ್ಲ. ಮುಂದೆಯೂ ಎರಡೂ ಪಕ್ಷಗಳ ನಡುವಿನ ಮೈತ್ರಿ ಮುಂದುವರಿಯುತ್ತದೆ. ವಿಧಾನ ಪರಿಷತ್‌ ಚುನಾವಣೆಯಲ್ಲೂ ಮೈತ್ರಿ ಇರುತ್ತದೆ. ಪರಿಷತ್‌ನ 6 ಸ್ಥಾನಗಳ ಪೈಕಿ ಜೆಡಿಎಸ್‌ಗೆ 2 ಹಾಗೂ ನಾವು 4 ಸ್ಥಾನಗಳಿಗೆ ಸ್ಪರ್ಧಿಸುತ್ತೇವೆ. ಎಲ್ಲಿ ಬಿಟ್ಟುಕೊಡಬೇಕು ಎಂಬುದರ ಬಗ್ಗೆ ತೀರ್ಮಾನ ಆಗಿಲ್ಲ. ಇಂದು (ಮೇ 11) ಸಂಜೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಪಟ್ಟಿ ಬಿಡುಗಡೆ ಮಾಡಲಿದ್ದಾರೆ” ಎಂದು ಮಾಹಿತಿ ನೀಡಿದ್ದಾರೆ.

ಸಿಬಿಐ ತನಿಖೆಗೆ ವಹಿಸಿ

ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಬಿ.ಎಸ್.ಯಡಿಯೂರಪ್ಪ ಆಗ್ರಹಿಸಿದರು. “ಪ್ರಜ್ವಲ್‌ ರೇವಣ್ಣ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂಬುದು ಎಲ್ಲರ ಅಭಿಪ್ರಾಯವಾಗಿದೆ. ಪ್ರಕರಣದ ಕುರಿತು ಪಾರದರ್ಶಕವಾಗಿ ತನಿಖೆ ನಡೆಯಬೇಕು ಎಂದರೆ ಸಿಬಿಐಗೆ ವಹಿಸಬೇಕು. ಸಿದ್ದರಾಮಯ್ಯ ಅವರ ಅಭಿಪ್ರಾಯ ಅವರದ್ದು. ಆದರೆ, ಸಿಬಿಐ ತನಿಖೆಯಾಗಬೇಕು ಎಂಬುದು ನಮ್ಮ ಅಭಿಪ್ರಾಯ” ಎಂದರು.

400ಕ್ಕೂ ಅಧಿಕ ಸ್ಥಾನಗಳಲ್ಲಿ ಗೆಲುವು

ಲೋಕಸಭೆ ಚುನಾವಣೆ ಕುರಿತು ಮಾತನಾಡಿದ ಬಿ.ಎಸ್.ಯಡಿಯೂರಪ್ಪ, “ದೇಶದಲ್ಲಿ ಎನ್‌ಡಿಎ 400ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿ, ನರೇಂದ್ರ ಮೋದಿ ಅವರು ಪ್ರಧಾನಿಯಾಗುತ್ತಾರೆ. ಸೂರ್ಯ, ಚಂದ್ರ ಇರೋದು ಎಷ್ಟು ಸತ್ಯವೋ, ಮೋದಿ ಅವರು ಮತ್ತೆ ಪ್ರಧಾನಿಯಾಗೋದೂ ಅಷ್ಟೇ ಸತ್ಯ. ಕರ್ನಾಟಕದಲ್ಲಿ ಕಾಂಗ್ರೆಸ್‌ನವರು ಏನು ಹೇಳಿದರೂ ನಾವು ತಲೆ ಕೆಡಿಸಿಕೊಳ್ಳುವುದಿಲ್ಲ. ನಾವು ರಾಜ್ಯದಲ್ಲಿ 24-25 ಕ್ಷೇತ್ರಗಳಲ್ಲಿ ಗೆಲುವು ಸಾಧಿಸುತ್ತೇವೆ. ಅಷ್ಟಕ್ಕೂ, ಕಾಂಗ್ರೆಸ್‌ನಲ್ಲಿ ಪ್ರಧಾನಿಯಾಗುವ ಯೋಗ್ಯತೆ ಯಾರಿಗಿದೆ” ಎಂದು ವಾಗ್ದಾಳಿ ನಡೆಸಿದರು.

ಇದನ್ನೂ ಓದಿ: Prajwal Revanna Case: ದೇವರಾಜೇಗೌಡ ಹುಚ್ಚುನಾಯಿ, ನಕಲಿ ವಕೀಲ ಎಂದ ಶಿವರಾಮೇಗೌಡ

Exit mobile version