ಬೆಂಗಳೂರು: ವಿಧಾನಸಭಾ ಚುನಾವಣೆ ವೇಳೆ ವರುಣ ಕ್ಷೇತ್ರದಲ್ಲಿ ಮಡಿವಾಳ ಸಮುದಾಯಕ್ಕೆ ಕುಕ್ಕರ್ ಮತ್ತು ಇಸ್ತ್ರಿ ಪೆಟ್ಟಿಗೆ (Gift Politics) ನೀಡಲಾಗಿತ್ತು ಎಂಬ ಯತೀಂದ್ರ ಸಿದ್ದರಾಮಯ್ಯ ಅವರ ಹೇಳಿಕೆ ಸಿಎಂ ಸಿದ್ದರಾಮಯ್ಯ ಅವರಿಗೆ ಸಂಕಷ್ಟ ತಂದಿಟ್ಟಿದೆ. ಮತದಾರರಿಗೆ ಆಮಿಷ ಒಡ್ಡುವ ಮೂಲಕ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮಾಡಿರುವ ಸಿದ್ದರಾಮಯ್ಯ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ರಾಜ್ಯ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು ಸಲ್ಲಿಸಿದೆ.
ವರುಣ ಕ್ಷೇತ್ರದಲ್ಲಿ ಚುನಾವಣೆಯಲ್ಲಿ ಮತದಾರರಿಗೆ ಕುಕ್ಕರ್ ಮತ್ತು ಇಸ್ತ್ರಿ ಪೆಟ್ಟಿಗೆ ಹಂಚುವ ಮೂಲಕ ಸಿಎಂ ಸಿದ್ದರಾಮಯ್ಯ ನೀತಿ ಸಂಹಿತೆ ಉಲ್ಲಂಘನೆ ಮಾಡಿದ್ದಾರೆ. ಇದು ಪ್ರಜಾಪ್ರತಿನಿದಿ ಕಾಯ್ದೆ-1951 ರ ಸೆಕ್ಷನ್ 123 ಹಾಗೂ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 171ಬಿ ಪ್ರಕಾರ ಶಿಕ್ಷಾರ್ಹ ಅಪರಾಧವಾಗಿದೆ. ಈ ಬಗ್ಗೆ ತನಿಖೆ ನಡೆಸಿ ಸಿದ್ದರಾಮಯ್ಯ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಚುನಾವಣಾ ಆಯೋಗಕ್ಕೆ ಬಿಜೆಪಿ ಮನವಿ ಮಾಡಿದೆ.
ಇದನ್ನೂ ಓದಿ | BJP-JDS Alliance : ಬಿಜೆಪಿ-ಜೆಡಿಎಸ್ ಮೈತ್ರಿಯಿಂದ ರಾಜ್ಯ ರಾಜಕಾರಣದಲ್ಲಿ ಹೊಸ ಶಕೆ ಆರಂಭ!
ಸಿಎಂ ರಾಜೀನಾಮೆ ಪಡೆಯುವಂತೆ ದೂರು
ಎಂಎಲ್‌ಸಿ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್. ರವಿಕುಮಾರ್ ಮಾತನಾಡಿ, ಮೂರುವರೆ ತಿಂಗಳ ಹಿಂದೆ ವಿಧಾನಸಭಾ ಚುನಾವಣೆ ನಡೆಯಿತು. ನೀತಿ ಸಂಹಿತೆ ಉಲ್ಲಂಘನೆ ಆಗಬಾರದು ಅಂತ ಚುನಾವಣಾ ಆಯೋಗ ಹೇಳಿದೆ. ಆದರೆ, ನಮ್ಮ ರಾಜ್ಯ, ದೇಶಕ್ಕೆ ನೀತಿ ಹೇಳುವ ಸಿಎಂ ಸಿದ್ದರಾಮಯ್ಯ ಅವರು ಚುನಾವಣಾ ನೀತಿ ಸಂಹಿತೆ ಗಾಳಿಗೆ ತೂರಿದ್ದಾರೆ. IPC 19/c ಈ ಪ್ರಕಾರವಾಗಿ ಮತದಾರರಿಗೆ ಆಮಿಷ ಒಡ್ಡಬಾರದು. ಆದರೆ ಮಡಿವಾಳ ಸಮುದಾಯಕ್ಕೆ ಇಸ್ತ್ರಿ ಪೆಟ್ಟಿಗೆ, ಕುಕ್ಕರ್ ನೀಡಲಾಗಿದೆ ಎಂದು ಯತೀಂದ್ರ ಸಿದ್ದರಾಮಯ್ಯ ಅವರು ಭಾಷಣ ಮಾಡಿದ್ದಾರೆ. ಅದರ ವೀಡಿಯೋ ಎಲ್ಲೆಡೆ ಸುದ್ದಿಯಾಗಿದೆ. ಇದರ ನೈತಿಕ ಹೊಣೆ ಹೊತ್ತು ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕು. ಅವರ ರಾಜೀನಾಮೆ ಪಡೆಯುವಂತೆ ಚುನಾವಣಾ ಆಯೋಗಕ್ಕೆ ದೂರು ನೀಡಲಾಗಿದೆ ಎಂದು ತಿಳಿಸಿದರು.
ಸಿದ್ದರಾಮಯ್ಯ ಅವರು ನೈತಿಕತೆಯ ಬಗ್ಗೆ ಬಹಳ ಮಾತನಾಡುತ್ತಾರೆ. ಸಂವಿಧಾನ, ಅಂಬೇಡ್ಕರ್ ಬಗ್ಗೆ ಮಾತನಾಡುತ್ತಾರೆ. ಆದರೆ, ಮತದಾರರಿಗೆ ಆಮಿಷ ಒಡ್ಡಿ ಸಂವಿಧಾನದ ನಿಯಯ ಉಲ್ಲಂಘಿಸಿದ್ದಾರೆ. ಹೀಗಾಗಿ ನೈತಿಕ ಹೊಣೆ ಹೊತ್ತು ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಲು ಎಂದು ಒತ್ತಾಯಿಸಿದರು.
ಇದನ್ನೂ ಓದಿ | Cauvery Dispute: ನಾಳೆ ನೀರಿನ ಗ್ಯಾರಂಟಿಗೆ ಒತ್ತಾಯಿಸಿ ಬೆಂಗಳೂರಿನಲ್ಲಿ ಬಿಜೆಪಿ ಪ್ರತಿಭಟನೆ
ಜೆಡಿಎಸ್ ಜತೆ ಮೈತ್ರಿ ಬಗ್ಗೆ ಪ್ರತಿಕ್ರಿಯಿಸಿ, ಮಾಜಿ ಪ್ರಧಾನಿ ದೇವೇಗೌಡರು ಹಾಗೂ ಮಾಜಿ ಸಿಎಂ ಕುಮಾರಸ್ವಾಮಿ ಅವರು ಎನ್‌ಡಿಎ ಭಾಗವಾಗಿದ್ದಾರೆ. ಇದರಿಂದ ಬಿಜೆಪಿಗೆ ಆನೆ ಬಲ ಬಂದಂತಾಗಿದೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಜಂಟಿಯಾಗಿ 28 ಕ್ಷೇತ್ರ ಗೆಲ್ಲಲಿದ್ದೇವೆ. ಕಾಂಗ್ರೆಸ್‌ಗೆ 135 ಸೀಟು ಗೆದ್ದಿದ್ದೇವೆ ಅಂತ ಅಹಂಕಾರ ಬಂದಿದೆ. ಆದರೆ, ಜನ ಹಿಡಿ ಶಾಪ ಹಾಕುತ್ತಿದ್ದಾರೆ. ಕುಡಿಯುವ ನೀರಿಲ್ಲದಿದ್ದರೂ ತಮಿಳುನಾಡಿನ ಬೆಳೆಗಳಿಗೆ ನೀರು ಹರಿಸುತ್ತಿದ್ದಾರೆ. ಡಿಕೆಶಿ, ಸಿದ್ದರಾಮಯ್ಯ ಜೋಡಿಯನ್ನ ಮನೆಗೆ ಕಳಿಸುವ ಕೆಲಸ ನಮ್ಮ ಎನ್‌ಡಿಎ ಒಕ್ಕೂಟ ಮಾಡಲಿದೆ ಎಂದು ತಿಳಿಸಿದರು.