ಬೆಂಗಳೂರು: ಮಂಡ್ಯದ ಕೆರಗೋಡಿನಲ್ಲಿ ಹನುಮ ಧ್ವಜ ದಂಗಲ್ ಕಿಚ್ಚು ರಾಜ್ಯಾದ್ಯಂತ ವ್ಯಾಪಿಸಿದ್ದು, ಹಲವು ಜಿಲ್ಲಾ ಕೇಂದ್ರಗಳಲ್ಲಿ ಬಿಜೆಪಿ ಹಾಗೂ ಹಿಂದು ಸಂಘಟನೆಗಳ ಕಾರ್ಯಕರ್ತರು ರಸ್ತೆಗಳಿದು ಸೋಮವಾರ ಪ್ರತಿಭಟನೆ ನಡೆಸಿದ್ದಾರೆ. ಕೆರಗೋಡು ಗ್ರಾಮದಲ್ಲಿ ಪೊಲೀಸರು ಹನುಮ ಧ್ವಜ ತೆರವು ಮಾಡಿರುವುದು ಖಂಡನೀಯ. ಕಾಂಗ್ರೆಸ್ ಸರ್ಕಾರವು ಹಿಂದುಗಳ ಭಾವನೆಗೆ ಧಕ್ಕೆ ತಂದು, ಹಿಂದು ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಕಾರ್ಯಕರ್ತರು ಆಕ್ರೋಶ ಹೊರಹಾಕಿದ್ದಾರೆ.
ಮೈಸೂರಿನಲ್ಲಿ ಕೇಸರಿ ಪಡೆ ಪ್ರತಿಭಟನೆ
ಮೈಸೂರು: ಹನುಮ ಧ್ವಜ ತೆರವು ವಿರೋಧಿಸಿ ಮೈಸೂರು ನಗರದ ಗಾಂಧಿ ವೃತ್ತದಲ್ಲಿ ಮೈಸೂರು ನಗರ ಮತ್ತು ಗ್ರಾಮಾಂತರ ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಶಾಸಕ ಟಿ.ಎಸ್.ಶ್ರೀವತ್ಸ, ಮೈಸೂರು ಬಿಜೆಪಿ ಜಿಲ್ಲಾಧ್ಯಕ್ಷ ಎಲ್. ಆರ್. ಮಹದೇವಸ್ವಾಮಿ, ನಗರಾಧ್ಯಕ್ಷ ಎಲ್.ನಾಗೇಂದ್ರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.
ಬೆಳಗಾವಿ ಚನ್ನಮ್ಮ ವೃತ್ತದಲ್ಲಿ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ
ಬೆಳಗಾವಿ: ಹನುಮ ಧ್ವಜ ತೆರವು ಖಂಡಿಸಿ ನಗರದಲ್ಲಿ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಸಂಸದೆ ಮಂಗಳಾ ಅಂಗಡಿ, ಮಾಜಿ ಶಾಸಕ ಸಂಜಯ್ ಪಾಟೀಲ್ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ನಗರದ ಚನ್ನಮ್ಮ ವೃತ್ತದಲ್ಲಿ ನೆಲದ ಮೇಲೆ ಕುಳಿತು ಪ್ರತಿಭಟನೆ ನಡೆಸಿದ ಕಾರ್ಯಕರ್ತರು, ಜೈ ಶ್ರೀರಾಮ್ ಎಂದು ಘೋಷಣೆ ಕೂಗಿ ಸಿಎಂ ವಿರುದ್ಧ ಆಕ್ರೋಶ ಹೊರಹಾಕಿದರು.
ಉಗ್ರ ಹೋರಾಟದ ಎಚ್ಚರಿಕೆ
ಗದಗ: ಹನುಮ ಧ್ವಜ ತೆರವು ಪ್ರಕರಣ ಖಂಡಿಸಿ ಗದಗ ಜಿಲ್ಲಾಧಿಕಾರಿ ಕಚೇರಿ ಎದುರು ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಬಿಜೆಪಿ ಜಿಲ್ಲಾಧ್ಯಕ್ಷ ರಾಜು ಕುರಡಗಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ಕಾರ್ಯಕರ್ತರು, ಹನುಮ ಧ್ವಜವನ್ನು ಮತ್ತೆ ಅದೇ ಜಾಗದಲ್ಲಿ ಹಾರಿಸಬೇಕು. ಇಲ್ಲವಾದಲ್ಲಿ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದರು.
ಇದನ್ನೂ ಓದಿ | Hanuman Flag : ಜಿಹಾದಿಗಳು ತಲ್ವಾರ್ ಹಿಡೀಬಹುದು, ಹಿಂದುಗಳು ಧ್ವಜ ಹಾಕ್ಬಾರ್ದಾ?: ಬಿಜೆಪಿ ಆಕ್ರೋಶ
ರಾಜ್ಯ ಸರ್ಕಾರದಿಂದ ಹಿಂದುಗಳ ಭಾವನೆಗೆ ಧಕ್ಕೆ
ವಿಜಯನಗರ: ಹನುಮ ಧ್ವಜ ತೆರವು ಖಂಡಿಸಿ ವಿಜಯನಗರ ಜಿಲ್ಲಾಧಿಕಾರಿ ಕಚೇರಿ ಎದುರು ಬಿಜೆಪಿ ಜಿಲ್ಲಾಧ್ಯಕ್ಷ ಚನ್ನಬಸನಗೌಡ, ಮುಖಂಡ ಸಿದ್ದಾರ್ಥ ಸಿಂಗ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು, ರಾಜ್ಯದಲ್ಲಿ ಹಿಂದು ವಿರೋಧಿ ಸರ್ಕಾರ ಆಡಳಿತ ಇದೆ, ಪೊಲೀಸರನ್ನು ಬಳಸಿಕೊಂಡು ಲಾಠಿ ಚಾರ್ಜ್ ಮಾಡಿದ್ದಾರೆ. ಶಾಂತಿಯುತವಾಗಿದ್ದ ಕೆರಗೋಡು ಗ್ರಾಮದಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣ ಆಗಿದೆ. ರಾಷ್ಟ್ರ ಧ್ವಜ ಹಾರಿಸಲು ಇಂತದ್ದೇ ಅನ್ನೋ ನಿಯಮ ಇದೆ. ಆದರೆ ಹನುಮ ಧ್ವಜ ತೆರವುಗೊಳಿಸಿ ಹಿಂದುಗಳ ಭಾವನೆಗೆ ಧಕ್ಕೆ ಮಾಡಿದ್ದಾರೆ ಎಂದು ಪ್ರತಿಭಟನಾಕಾರರು ಆಕ್ರೋಶ ಹೊರಹಾಕಿದ್ದಾರೆ.
ಹಾವೇರಿಯಲ್ಲಿ ರಸ್ತೆ ತಡೆ ನಡೆಸಿ ಪ್ರತಿಭಟನೆ
ಹಾವೇರಿ: ಹನುಮ ಧ್ವಜ ತೆರವು ಖಂಡಿಸಿ ಹಾವೇರಿ ನಗರದ ಸಿದ್ದಪ್ಪ ಸರ್ಕಲ್‌ನಲ್ಲಿ ರಸ್ತೆ ತಡೆದು ಬಿಜೆಪಿ ಜಿಲ್ಲಾ ಘಟಕದಿಂದ ಪ್ರತಿಭಟನೆ ನಡೆಸಲಾಯಿತು. ಮಾಜಿ ಸಚಿವ ಬಿ.ಸಿ ಪಾಟೀಲ್, ಮಾಜಿ ಶಾಸಕರಾದ ವಿರುಪಾಕ್ಷಪ್ಪ ಬಳ್ಳಾರಿ, ಶಿವರಾಜ ಸಜ್ಜನ್ ಮತ್ತಿತರರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.
ಚಿಕ್ಕಮಗಳೂರಿನಲ್ಲಿ ಮಾನವ ಸರಪಳಿ ನಿರ್ಮಿಸಿ ಆಕ್ರೋಶ
ಚಿಕ್ಕಮಗಳೂರು: ಚಿಕ್ಕಮಗಳೂರಿನಲ್ಲಿ ಜಿಲ್ಲಾ ಬಿಜೆಪಿ ಘಟಕದಿಂದ ಪ್ರತಿಭಟನೆ ನಡೆಸಲಾಯಿತು. ನಗರದ ಅಜಾದ್ ಪಾರ್ಕ್ ವೃತ್ತದಲ್ಲಿ ಕಾರ್ಯಕರ್ತರು ಮಾನವ ಸರಪಳಿ ನಿರ್ಮಿಸಿ ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದರು.
ಇದನ್ನೂ ಓದಿ | Hanuman Flag : ಕಾಂಗ್ರೆಸ್ ಶಾಸಕ ರವಿ ಗಣಿಗ ಫ್ಲೆಕ್ಸ್ ಹರಿದು ಛಿದ್ರಗೊಳಿಸಿದ ಹನುಮ ಭಕ್ತರು
ಚಾಮರಾಜನಗರ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ
ಚಾಮರಾಜನಗರ: ಹನುಮ ಧ್ವಜ ತೆರವು ಪ್ರಕರಣ ಖಂಡಿಸಿ ನಗರದ ಚಾಮರಾಜೇಶ್ವರ ದೇವಸ್ಥಾನದ ಆವರಣದಿಂದ ಭುವನೇಶ್ವರಿ ವೃತ್ತದವರೆಗೆ ಬಿಜೆಪಿ ಕಾರ್ಯಕರ್ತರು ಪ್ರತಿಭಟನಾ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು. ರಾಜ್ಯ ಬಿಜೆಪಿ ಉಪಾಧ್ಯಕ್ಷ ಎನ್. ಮಹೇಶ್ ಹಾಗೂ ಮಾಜಿ ಶಾಸಕ ಸಿ ಎಸ್ ನಿರಂಜನ್ ಕುಮಾರ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.