ಬೆಂಗಳೂರು: ನಗರದ ಬಿಟಿಎಂ ಲೇಔಟ್‌ನ ಒಂದನೇ ಹಂತದಲ್ಲಿ ವಿಧಾನಸಭಾ ಚುನಾವಣೆ (Karnataka Election) ಪ್ರಚಾರದ ವೇಳೆ ಬಿಜೆಪಿ ಕಾರ್ಯಕರ್ತರೊಬ್ಬರ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದೆ.
ಭಾನುವಾರ ರಾತ್ರಿ ಬಿಜೆಪಿ ಅಭ್ಯರ್ಥಿ ಶ್ರೀಧರ್ ರೆಡ್ಡಿ ಅವರ ಪರ ಬಿಜೆಪಿ ಕಾರ್ಯಕರ್ತರು ಪ್ರಚಾರ ನಡೆಸುತ್ತಿದ್ದಾಗ, ಕಾಂಗ್ರೆಸ್ ಕಾರ್ಯಕರ್ತರು ಎದುರಾಗಿದ್ದಾರೆ. ಈ ವೇಳೆ ಎರಡು ಗುಂಪುಗಳ ನಡುವೆ ಮಾತಿನ ಚಕಮಕಿ ನಡೆದು ಗಲಾಟೆ ಶುರುವಾಗಿದೆ. ಈ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತ ಹರಿನಾಥ್ ಎಂಬಾತನ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ಹಲ್ಲೆ ಮಾಡಿದ್ದಾರೆ.
ಹಲ್ಲೆಯಲ್ಲಿ ಬಿಜೆಪಿ ಕಾರ್ಯಕರ್ತ ಹರಿನಾಥ್ ಮುಖದ ಭಾಗಕ್ಕೆ ಗಂಭೀರ ಗಾಯಗಳಾಗಿವೆ. ಈ ಬಗ್ಗೆ ಮಡಿವಾಳ ಪೊಲೀಸ್ ಠಾಣೆಗೆ ದೂರು ನೀಡಲು ಬಿಜೆಪಿ ಅಭ್ಯರ್ಥಿ ಶ್ರೀಧರ್ ರೆಡ್ಡಿ ಪುತ್ರ ಹಾಗೂ ಕಾರ್ಯಕರ್ತರು ಮುಂದಾಗಿದ್ದಾರೆ.
ಇದನ್ನೂ ಓದಿ | ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ: ಬಾಲಕ ಸಾವು, ಮೂವರು ಪ್ರಾಣಾಪಾಯದಿಂದ ಪಾರು
ವರುಣ ಕ್ಷೇತ್ರದಲ್ಲಿ ಬಿಜೆಪಿ ಬೂತ್ ಅಧ್ಯಕ್ಷನ ಮೇಲೆ ಹಲ್ಲೆ
ಮೈಸೂರು: ವರುಣದಲ್ಲಿ ರಾಜಕೀಯ ಗಲಾಟೆ ಮುಂದುವರಿದಿದೆ. ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಬೂತ್ ಅಧ್ಯಕ್ಷನ ಮೇಲೆ ಹಲ್ಲೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ವರುಣ ಕ್ಷೇತ್ರದ ಬೂತ್ ನಂಬರ್ 109ರ ಬಿಜೆಪಿ ಬೂತ್ ಅಧ್ಯಕ್ಷ ದಿಲೀಪ್ ಕುಮಾರ್ ಗಾಯಾಳು. ಬಿಜೆಪಿಗೆ ನೀವು ಬೆಂಬಲ ನೀಡುತ್ತಿದ್ದೀರಿ, ಅದನ್ನು ನಿಲ್ಲಿಸಿ ಕಾಂಗ್ರೆಸ್ ಬೆಂಬಲಿಸಿ ಎಂದು ಕೈ ಕಾರ್ಯಕರ್ತರು ಹಲ್ಲೆ ಮಾಡಿದ್ದು, ದಿಲೀಪ್ ಕುಮಾರ್ ತಲೆಗೆ ಗಾಯವಾಗಿದೆ. ಅವರನ್ನು ತಿ.ನರಸೀಪುರ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ.
ಕ್ಷುಲ್ಲಕ ಕಾರಣಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಗಲಾಟೆ ಮಾಡಿ ಹಲ್ಲೆ ಮಾಡಿದ್ದಾರೆ ಎಂದು ಗಾಯಾಳು ದಿಲೀಪ್ ಕುಮಾರ್, ತಿ.ನರಸೀಪುರ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದಾರೆ.