ಧಾರವಾಡ: ನಗರಕ್ಕೆ ಮಾಜಿ ಸಚಿವ ಎಂ.ಬಿ.ಪಾಟೀಲ್ ಆಗಮನ ವಿರೋಧಿಸಿ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ ಮಾಡುತ್ತಿದ್ದ ಬಿಜೆಪಿ ಹಾಗೂ ಬಜರಂಗದಳದ ಸುಮಾರು 50 ಕಾರ್ಯಕರ್ತರನ್ನು ಪೊಲೀಸರ ವಶಕ್ಕೆ ಪಡೆದಿದ್ದಾರೆ.
ಮಡಿಕೇರಿಯಲ್ಲಿ ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆತ ಖಂಡಿಸಿ ನಗರದಲ್ಲಿ ಶುಕ್ರವಾರ ಕಾಂಗ್ರೆಸ್ ಕಾರ್ಯಕರ್ತರು, ವೀರ ಸಾವರ್ಕರ್ ಭಾವಚಿತ್ರ ಸುಟ್ಟು ಹಾಕಿ ಪ್ರತಿಭಟನೆ ಮಾಡಿದ್ದರು. ಈ ನಡುವೆ ನಗರದ ಮುರುಘಾ ಮಠಕ್ಕೆ ಮಾಜಿ ಸಚಿವ ಎಂ.ಬಿ.ಪಾಟೀಲ್ ಆಗಮಿಸಲಿದ್ದಾರೆ ಎಂಬ ಸುದ್ದಿ ತಿಳಿದ ಬಿಜೆಪಿ ಕಾರ್ಯಕರ್ತರು, ಎಂ.ಬಿ.ಪಾಟೀಲ್ ಧಾರವಾಡಕ್ಕೆ ಆಗಮಿಸಬಾರದು ಎಂದು ಆಕ್ರೋಶ ವ್ಯಕ್ತಪಡಿಸಿ, ಕಪ್ಪುಪಟ್ಟಿ ಪ್ರದರ್ಶನ ಮಾಡಿ ಗೋ ಬ್ಯಾಕ್ ಘೋಷಣೆ ಕೂಗಿ ಪ್ರತಿಭಟನೆ ನಡೆಸಿದರು.
ಹೀಗಾಗಿ ಯಾವುದೇ ಅಹಿತಕರ ಘಟನೆಗಳಾಗದಂತೆ ತಡೆಯುವ ನಿಟ್ಟಿನಲ್ಲಿ ಪೊಲೀಸರು ಡಿಪೋ ಸರ್ಕಲ್ ಬಳಿ ಸುಮಾರು 50 ಬಿಜೆಪಿ ಹಾಗೂ ಬಜರಂಗದಳ ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದು, ಮುರುಘಾ ಮಠದ ಸುತ್ತಮುತ್ತ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ. ಒಂದೆಡೆ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಪಕ್ಷದ ನಾಯಕರ ವಿರುದ್ಧ ಘೊಷಣೆಗಳನ್ನು ಕೂಗಿ ಪ್ರತಿಭಟಿಸಿದರೆ, ಮತ್ತೊಂದೆಡೆ ಇದಕ್ಕೆ ಪ್ರತಿಯಾಗಿ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ವಿರುದ್ಧ ಘೋಷಣೆಗಳನ್ನು ಕೂಗಿದ್ದು ಕಂಡುಬಂತು.
ಇದನ್ನೂ ಓದಿ | ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆದದ್ದು ಬಿಜೆಪಿ ಕಾರ್ಯಕರ್ತನಲ್ಲ, ಕಾಂಗ್ರೆಸ್ ಕಾರ್ಯಕರ್ತ! ಹಾಗಿದ್ದರೆ ಎಸೆದಿದ್ಯಾಕೆ?