ಚಿಕ್ಕೋಡಿ: ಬಾಯ್ಲರ್ ಸ್ಫೋಟವಾಗಿ ಮಹಿಳೆ ಮೃತಪಟ್ಟು, ಇನ್ನಿಬ್ಬರು ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ (Boiler Blast) ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಚಿಕ್ಕಟ್ಟಿ ಗ್ರಾಮದ ಹೊರ ವಲಯದಲ್ಲಿರುವ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ. ಪ್ರಿಯಾ ಎಕ್ಸ್‌ಪೋರ್ಟ್ಸ್ ಕೈಗಾರಿಕಾ ಘಟಕದ ಬಾಯ್ಲರ್ ಸ್ಫೋಟಗೊಂಡು ಅವಘಡ ಸಂಭವಿಸಿದೆ.
ಅಥಣಿ ತಾಲೂಕಿನ ಸತ್ತಿ ಗ್ರಾಮದ ನಿವಾಸಿ ಸುನಂದಾ ಸಿದಪ್ಪ ತೇಲಿ (36) ಮೃತರು. ಗಾಯಗೊಂಡವರನ್ನು ಅಥಣಿ ಪಟ್ಟಣದ ಹಾಗೂ ಮಹಾರಾಷ್ಟ್ರದ ಮಿರಜ್ ಆಸ್ಪತ್ರೆಗೆ ದಾಖಲಾಗಿಸಲಾಗಿದೆ. ಸ್ಫೋಟದ ತೀವ್ರತೆಗೆ ಕಾರ್ಖಾನೆಯ ಗೋಡೆ ನುಜ್ಜುಗೊಜ್ಜಾಗಿದ್ದು, ಕೆಲ ಕಾಲ ಕೈಗಾರಿಕಾ ಪ್ರದೇಶದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು.
ಸ್ಥಳಕ್ಕೆ ಅಥಣಿ ಅಗ್ನಿಶಾಮಕ ದಳ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದು, ಅಥಣಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ತಲೆ ಮೇಲೆ ಕಲ್ಲು ಎತ್ತಿ ಹಾಕಿ ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ
ಯಾದಗಿರಿ: ತಲೆ ಮೇಲೆ ಕಲ್ಲು ಎತ್ತಿ ಹಾಕಿ ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಯಾದಗಿರಿ ತಾಲೂಕಿನ ಅಬ್ಬೇತುಮಕೂರು ಗ್ರಾಮದ ಹೊರ ಭಾಗದಲ್ಲಿ ನಡೆದಿದೆ. ರಕ್ತದ ಮಡುವಿನಲ್ಲಿ ಬಿದ್ದು ಒದ್ದಾಡುತ್ತಿದ್ದ ವ್ಯಕ್ತಿಯನ್ನು ಆಂಬ್ಯುಲೆನ್ಸ್ ಮೂಲಕ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ, ಆಸ್ಪತ್ರೆಯಲ್ಲಿ ವೈದ್ಯರು ಇಲ್ಲದ ಕಾರಣಕ್ಕೆ ಕುಟುಂಬಸ್ಥರು ಆಕ್ರೋಶ ಹೊರಹಾಕಿದ್ದಾರೆ.
ಹಲ್ಲೆಗೊಳಗಾದ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಿ ಅರ್ಧ ಗಂಟೆಯಾದರೂ ಆಸ್ಪತ್ರೆಯಲ್ಲಿ ವೈದ್ಯರು ಕಂಡುಬಂದಿಲ್ಲ. ಹೀಗಾಗಿ ವ್ಯಕ್ತಿ ಸಾವು ಬದುಕಿನ ಮಧ್ಯೆ ಹೋರಾಟ ನಡೆಸುತ್ತಿದ್ದಾರೆ. ತಲೆಗೆ ಗಂಭೀರವಾಗಿ ಗಾಯವಾಗಿ ರಕ್ತಸ್ರಾವವಾಗುತ್ತಿದ್ದು, ವೈದ್ಯಕೀಯ ಸಿಬ್ಬಂದಿ ಚಿಕಿತ್ಸೆ ನೀಡುತ್ತಿದ್ದಾರೆ.
ಇದನ್ನೂ ಓದಿ | Drowns in Farm Pond: ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಬಾಲಕರ ಸಾವು
ಸಾಲದ ಬಾಧೆಗೆ ನೇಣು ಬಿಗಿದುಕೊಂಡು ರೈತ ಆತ್ಮಹತ್ಯೆ.
ಮಂಡ್ಯ: ಸಾಲ ಬಾಧೆಗೆ ನೇಣು ಬಿಗಿದುಕೊಂಡು ರೈತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ವಳಗೆರೆಹಳ್ಳಿಯಲ್ಲಿ ನಡೆದಿದೆ. ಗ್ರಾಮದ ರೂಪೇಶ್(45) ಆತ್ಮಹತ್ಯೆ ಮಾಡಿಕೊಂಡ ರೈತ. ಒಂದೂವರೆ ಎಕರೆ ಜಮೀನಿನಲ್ಲಿ ರೈತ ಭತ್ತ, ರಾಗಿ, ರೇಷ್ಮೆ ಬೆಳೆ ಬೆಳೆಯುತ್ತಿದ್ದರು. ವಿವಿಧ ಬ್ಯಾಂಕುಗಳು ಹಾಗೂ ಚಿನ್ನಾಭರಣದ ಮೇಲೆ ಒಟ್ಟು 5ಲಕ್ಷಕ್ಕೂ ಹೆಚ್ಚು ಸಾಲ ಮಾಡಿದ್ದರು ಎನ್ನಲಾಗಿದೆ. ಬೆಳೆಗೆ ನೀರಿಲ್ಲದೆ ನಷ್ಟಕ್ಕೀಡಾಗಿ ಸಾಲ ತೀರಿಸಲಾಗದೆ ರೈತ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.