ಬೆಂಗಳೂರು: ಎಐಸಿಸಿ ವಕ್ತಾರ, ಸುಪ್ರೀಂಕೋರ್ಟ್‌ನ ಹಿರಿಯ ವಕೀಲ ಬ್ರಿಜೇಶ್ ಕಾಳಪ್ಪ ಪಕ್ಷ ತೊರೆದಿದ್ದಾರೆ. ಕಾಂಗ್ರೆಸ್‌ನ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತಿರುವುದಾಗಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷೆ ಸೋನಿಯಾ ಗಾಂಧಿಗೆ ರಾಜೀನಾಮೆ ಸಲ್ಲಿಸಿದ್ದಾರೆ. ರಾಜ್ಯಸಭೆ ಹಾಗೂ ವಿಧಾನಪರಿಷತ್ ಚುನಾವಣೆಯಲ್ಲಿ ಅಭ್ಯರ್ಥಿಯಾಗಿ ಇವರನ್ನು ಪಕ್ಷ ಪರಿಗಣಿಸದಿರುವುದರಿಂದ ಅಸಮಾಧಾನಗೊಂಡು ಈ ನಿರ್ಧಾರ ಕೈಗೊಂಡಿದ್ದಾರೆ ಎನ್ನಲಾಗಿದೆ.
ಪಕ್ಷದ ಕಾನೂನು ಸಲಹೆಗಾರರಾಗಿ, ವಕ್ತಾರರಾಗಿ ಬ್ರಿಜೇಶ್ ಹಲವು ದಶಕಗಳಿಂದ ಕಾರ್ಯನಿರ್ವಹಿಸುತ್ತಿದ್ದರು. ಟಿವಿ ವಾಹಿನಿಗಳ ಡಿಬೇಟ್‌ಗಳಲ್ಲಿ ಸಕ್ರಿಯರಾಗಿ ಪಾಲ್ಗೊಂಡು ಪಕ್ಷವನ್ನು ಸಮರ್ಥಿಸಿಕೊಳ್ಳುತ್ತಿದ್ದರು. ಈ ಹಿಂದೆ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್‌ನಿಂದ ಟಿಕೆಟ್ ಗಿಟ್ಟಿಸಲು ಪ್ರಯತ್ನಿಸಿದ್ದ ಇವರು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೊಡಗಿನ ವಿರಾಜಪೇಟೆ ಕ್ಷೇತ್ರದ ಪ್ರಬಲ ಆಕಾಂಕ್ಷಿಯಾಗಿದ್ದರು.
ಇದನ್ನೂ ಓದಿ | ಕಪಿಲ್ ಸಿಬಲ್ ಕಾಂಗ್ರೆಸ್ ಬಿಟ್ರು, ಉಳಿದ ಜಿ-23 ನಾಯಕರು ಏನ್ಮಾಡ್ತಾರಂತೆ?
ಇದೀಗ ಸೋನಿಯಾ ಗಾಂಧಿಗೆ ರಾಜೀನಾಮೆ ಪತ್ರ ಸಲ್ಲಿಸಿರುವ ಬ್ರಿಜೇಶ್, 1997ರಿಂದ ಇಲ್ಲಿವರೆಗಿನ ಕಾಂಗ್ರೆಸ್ ಪಕ್ಷದೊಂದಿಗಿನ ನಂಟು ಕೊನೆಗೊಂಡಿದೆ. ವೈಯಕ್ತಿಕ ಕಾರಣಗಳಿಗಾಗಿ ಪಕ್ಷಕ್ಕೆ ರಾಜೀನಾಮೆ ಸಲ್ಲಿಸುತ್ತಿದ್ದು, ಇದುವರೆಗೆ ನೀಡಿದ ಸಹಕಾರಕ್ಕೆ ಧನ್ಯವಾದ ಎಂದು ತಿಳಿಸಿದ್ದಾರೆ.
ರಾಜ್ಯಸಭೆ ಹಾಗೂ ವಿಧಾನಪರಿಷತ್ ಚುನಾವಣೆಯ ಈ ಸಂದರ್ಭದಲ್ಲಿ ಕಾಂಗ್ರೆಸ್ ತೊರೆಯುವ ಮುಖಂಡರ ಸಂಖ್ಯೆ ಹೆಚ್ಚಾಗುತ್ತಿದ್ದು, ಪಕ್ಷದ ಹಿರಿಯ ನಾಯಕರ ಚಿಂತೆಗೆ ಇದು ಕಾರಣವಾಗಿದೆ. ಬ್ರಿಜೇಶ್ ಕಾಳಪ್ಪ ಮನವೊಲಿಸುವ ನಿಟ್ಟಿನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸೇರಿ ರಾಜ್ಯದ ಹಲವು ನಾಯಕರು ಪ್ರಯತ್ನ ನಿರತರಾಗಿದ್ದಾರೆ ಎಂದು ತಿಳಿದುಬಂದಿದೆ.
ಇದನ್ನೂ ಓದಿ | ʼಕೈʼಬಿಟ್ಟ ಸಿಬಲ್; ಸಮಾಜವಾದಿ ಪಕ್ಷದ ಬೆಂಬಲದಿಂದ ರಾಜ್ಯಸಭೆಗೆ ಸ್ಪರ್ಧೆ