Site icon Vistara News

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ತಮ್ಮ ಹೆಸರು ಬೇಡ ಎಂದ BSY: ಮುಖ್ಯಮಂತ್ರಿ ಬೊಮ್ಮಾಯಿಗೆ ಪತ್ರ

ಶಿವಮೊಗ್ಗ: ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದಲ್ಲಿ ಅನೇಕ ವರ್ಷಗಳ ಹೋರಾಟದ ನಂತರ ನಿರ್ಮಾಣವಾಗುತ್ತಿರುವ ವಿಮಾನ ನಿಲ್ದಾಣಕ್ಕೆ ತಮ್ಮ ಹೆಸರು ಇಡುವುದು ಬೇಡ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಯೂರಪ್ಪ ಪತ್ರ ಬರೆದಿದ್ದಾರೆ.

ಕಳೆದ ಬುಧವಾರ ಶಿವಮೊಗ್ಗಕ್ಕೆ ಬಸವರಾಜ ಬೊಮ್ಮಾಯಿ ಆಗಮಿಸಿದ್ದರು. ಇದೇ ಸಮಯದಲ್ಲಿ, ವಿಮಾನ ನಿಲ್ದಾಣ ನಿರ್ಮಾಣವಾಗುತ್ತಿರುವ ಸೋಗಾನೆಗೆ ಭೇಟಿ ನೀಡಿದ್ದರು. ವಿಮಾನ ನಿಲ್ದಾಣ ಸದ್ಯ ಉಡಾನ್‌ ಯೋಜನೆಯಲ್ಲಿ ನಿರ್ಮಾಣವಾಗಲಿದೆ. ನಂತರ ರಾತ್ರಿ ಲ್ಯಾಂಡಿಂಗ್‌ ಸೇರಿ ಅನೇಕ ಸೌಲಭ್ಯಗಳಿಗೆ ವಿಸ್ತರಣೆ ಆಗಲಿದೆ. ನಿರ್ಮಾಣಕ್ಕೂ ಮುನ್ನವೇ ನಿಲ್ದಾಣಕ್ಕೆ ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರ ಹೆಸರನ್ನು ಇಡಲಾಗುವುದು ಎಂದು ತಿಳಿಸಿದ್ದರು.

ಶಿವಮೊಗ್ಗ ವಿಮಾನ ನಿಲ್ದಾಣ ಯೋಜನೆಯ ನಕ್ಷೆಯನ್ನು ವೀಕ್ಷಿಸಿದ ಸಿಎಂ ಬಸವರಾಜ ಬೊಮ್ಮಾಯಿ

ನಿಲ್ದಾಣಕ್ಕೆ ಯಡಿಯೂರಪ್ಪ ಅವರ ಹೆಸರಿಡುವ ಕುರಿತು ಸಾಕಷ್ಟು ಚರ್ಚೆಗಳು ನಡೆದಿದ್ದವು. ಅನೇಕರು ಈ ನಿರ್ಧಾರವನ್ನು ಸ್ವಾಗತಿಸಿದ್ದರು. ಆದರೆ, ಯಡಿಯೂರಪ್ಪ ಅವರ ಬದಲಿಗೆ ಮಾಜಿ ಮುಖ್ಯಮಂತ್ರಿ ಬಂಗಾರಪ್ಪ ಸೇರಿ, ಶಿವಮೊಗ್ಗ ಜಿಲ್ಲೆಯ ಅನೇಕ ನಾಯಕರ ಹೆಸರುಗಳ ಸಲಹೆಗಳು ಕೇಳಿಬಂದಿದ್ದವು.

ಈ ವಿಚಾರ ವಿವಾದವಾಗುವ ಮೊದಲೇ ಯಡಿಯೂರಪ್ಪ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿದ್ದಾರೆ. ಯಡಿಯೂರಪ್ಪ ಅವರ ಪತ್ರದ ಪೂರ್ಣ ರೂಪ ಈ ರೀತಿ ಇದೆ.:

ಶಿವಮೊಗ್ಗ ಜಿಲ್ಲೆಯ ಬಹುದಿನದ ಕನಸಾದ ವಿಮಾನ ನಿಲ್ದಾಣ ನನಸಾಗುತ್ತಿದೆ. ಸೋಗಾನೆಯಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ವಿಮಾನ ನಿಲ್ದಾಣದ ಕಾಮಗಾರಿಯನ್ನು ಅತ್ತೀಚೆಗೆ ತಾವು ವೀಕ್ಷಣೆ ಮಾಡಿದ ಸಂದರ್ಭದಲ್ಲಿ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸಲು ಅಗತ್ಯವಾದ ಅನುದಾನವನ್ನು ತ್ಹರಿತವಾಗಿ ಬಿಡುಗಡೆ ಮಾಡುವುದಾಗಿ ತಿಳಿಸಿರುವುದಕ್ಕೆ ತಮಗೆ ಧನ್ಯವಾದಗಳು.

ಶಿವಮೊಗ್ಗದ ಈ ಹೊಸ ವಿಮಾನ ನಿಲ್ದಾಣಕ್ಕೆ ನನ್ನ ಹೆಸರನ್ನಿಡುವುದಾಗಿ ತಾವು ಘೋಷಿಸಿರುತ್ತೀರಿ. ತಮ್ಮ ಈ ವಿಶೇಷವಾದ ಪ್ರೀತಿ, ಅಭಿಮಾನಕ್ಕೆ ಧನ್ಯವಾದಗಳು. ಇದಕ್ಕಾಗಿ ಜಿಲ್ಲೆಯ ಎಲ್ಲ ಶಾಸಕರು, ವಿಧಾನ ಪರಿಷತ್‌ ಸದಸ್ಯರು, ಸಂಘಸಂಸ್ಥೆಗಳು ಹಾಗೂ ಎಲ್ಲ ಮುಖಂಡರುಗಳಿಗೆ ನನ್ನ ಕೃತಜ್ಞತ್ಥೆಗಳನ್ನು ಸಲ್ಲಿಸುತ್ತೇನೆ.

ರಾಷ್ಟದ ಅಭಿವೃದ್ಧಿಗೆ ಸೇವೆ ಸಲ್ಲಿಸಿದ ಅನೇಕ ಮಹನೀಯರು ಹಾಗೂ ದೇಶಭಕ್ತರಿದ್ದಾರೆ. ಅವರು ನೀಡಿರುವ ಕೊಡುಗೆಗೆ ಹೋಲಿಸಿದಾಗ ನನ್ನದೊಂದು ಅಳಿಲು ಸೇವೆ ಮಾತ್ರ. ಹಾಗೂ ನನ್ನನ್ನು ಸತತವಾಗಿ ಬೆಂಬಲಿಸಿ ಸಲುಹಿದ ಜಿಲ್ಲೆಯ ಜನತೆಗೆ ಸೇವೆ ಮಾಡಿದ್ದೇನೆಂಬ ಧನ್ಯತಾಭಾವ ನನ್ನದು. ಈ ಹಿನ್ನೆಲೆಯಲ್ಲಿ ನೂತನ ವಿಮಾನ ನಿಲ್ದಾಣಕ್ಕೆ ನನ್ನ ಹೆಸರು ಸೂಕ್ತವಲ್ಲವೆಂದು ಭಾವಿಸುತ್ತೇನೆ.

ಆದುದರಿಂದ, ತಮ್ಮ ಈ ನಿರ್ಧಾರವನ್ನು ಪುನರ್‌ ಪರಿಶೀಲಿಸಿ, ಸೂಕ್ತ ವೇದಿಕೆಯಲ್ಲಿ ಚರ್ಚಿಸಿ, ರಾಷ್ಟ್ರದ, ನಾಡಿನ ಅಭಿವೃದ್ಧಿಗೆ ಹಾಗೂ ಇತಿಹಾಸಕ್ಕೆ ಕೊಡುಗೆ ನೀಡಿದಂತಹ ಮಹನೀಯರ ಹೆಸರನ್ನು ಈ ಹೊಸ ವಿಮಾನ ನಿಲ್ದಾಣಕ್ಕೆ ನಾಮಕರಣ ಮಾಡಬೇಕೆಂದು ಕೋರುತ್ತೇನೆ.

ಇದನ್ನೂ ಓದಿ: ಸನ್ಯಾಸಿಯಾಗಲು ರಾಜಕೀಯ ಬಿಟ್ಟ ಮಾಜಿ ಸಚಿವ: ಸ್ವಾಮೀಜಿ ಆಗಲಿದ್ದಾರೆ ಬಿ.ಜೆ. ಪುಟ್ಟಸ್ವಾಮಿ

Exit mobile version