ಬೆಂಗಳೂರು: ಸಾರಿಗೆ ನೌಕರರು ಧರಣಿ ಸತ್ಯಾಗ್ರಹಕ್ಕೆ ಮುಂದಾಗುತ್ತಿದ್ದಾರೆ. ಹೀಗಾಗಿ ಮಂಗಳವಾರ ಬಸ್‌ಗಳ ಸಂಚಾರದಲ್ಲಿ ವ್ಯತ್ಯಯ (Bus Service) ಉಂಟಾಗಲಿದೆ ಎಂದು ಹೇಳಲಾಗುತ್ತಿತ್ತು. ಆದರೆ, ಕೆಎಸ್‌ಆರ್‌ಟಿಸಿ ನಿಗಮವು ಬಸ್ಸುಗಳ ಕಾರ್ಯಾಚರಣೆಯಲ್ಲಿ ಯಾವುದೇ ವ್ಯತ್ಯಯ ಇಲ್ಲವೆಂದು ತಿಳಿಸಿದೆ.
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿಯು ಮಂಗಳವಾರ ಬೆಳಗ್ಗೆ 11 ಗಂಟೆಯಿಂದ ಸಂಜೆ 5.30ರವರೆಗೆ ನಾಲ್ಕು ರಸ್ತೆ ಸಾರಿಗೆ ಸಂಸ್ಥೆಗಳ ವ್ಯಾಪ್ತಿಯ ವಿಭಾಗೀಯ ಕಚೇರಿಗಳ ಮುಂದೆ ಧರಣಿ ಸತ್ಯಾಗ್ರಹ ನಡೆಸಲು ಕರೆ ನೀಡಿದ್ದಾರೆ. ಆದರೆ, ಈ ಸಂಬಂಧ ಕೆಎಸ್ಆರ್‌ಟಿಸಿ ವ್ಯಾಪ್ತಿಯ ಬಸ್ಸುಗಳ ಕಾರ್ಯಾಚರಣೆಯಲ್ಲಿ ಯಾವುದೇ ರೀತಿಯ ವ್ಯತ್ಯಯವಾಗುವುದಿಲ್ಲ, ಯಥಾಸ್ಥಿತಿಯಲ್ಲಿ ಇರಲಿದೆ ಎಂದು ನಿಗಮದ ಅಧಿಕಾರಿಗಳು ತಿಳಿಸಿದ್ದಾರೆ.
ಶಿಸ್ತುಕ್ರಮದ ಎಚ್ಚರಿಕೆ
ಬಿಎಂಟಿಸಿ, ಕೆಎಸ್ಆರ್‌ಸಿ, ವಾಯವ್ಯ ಮತ್ತು ಈಶಾನ್ಯ ಸಾರಿಗೆ ನೌಕರರಿಗೆ ಪ್ರತಿಭಟನೆಯಲ್ಲಿ ಭಾಗಿಯಾಗದಂತೆ ಮೌಖಿಕ ಸೂಚನೆ ನೀಡಲಾಗಿದೆ. ಮಂಗಳವಾರ ವಾರದ ರಜೆ ಹೊರತುಪಡಿಸಿ ಬೇರೆ ಅನಗತ್ಯ ರಜೆಗೆ ಕತ್ತರಿ ಹಾಕಲಾಗಿದೆ. ಕೆಲಸಕ್ಕೆ ಗೈರಾದರೆ ವೇತನ ಕಡಿತದ ಜತೆ ಶಿಸ್ತುಕ್ರಮ ಜಾರಿ ಮಾಡುವ ಎಚ್ಚರಿಕೆ ನೀಡಲಾಗಿದೆ. ಎಲ್ಲ ನೌಕರರು ಕರ್ತವ್ಯಕ್ಕೆ ಹಾಜರಾಗುವಂತೆ ನಿಗಮಗಳಿಂದ ಮೌಖಿಕ ಸೂಚನೆ ನೀಡಲಾಗಿದೆ. ಸಾವಿರಾರು ನೌಕರರು ಸತ್ಯಾಗ್ರಹದಲ್ಲಿ ಭಾಗಿಯಾದರೆ ಬಸ್ ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದ್ದು, ಸಾರ್ವಜನಿಕರಿಗೆ ಅಡಚಣೆಯಾಗಬಾರದೆಂಬ ಈ ಕ್ರಮ ವಹಿಸಲಾಗಿದೆ.
ಆರು ವರ್ಷ ಕಳೆದರೂ ವೇತನ ಹೆಚ್ಚಳ ಮಾಡದ ರಾಜ್ಯ ಸರ್ಕಾರದ ವಿರುದ್ಧ ನಾಲ್ಕು ನಿಗಮದ ಸಾರಿಗೆ ನೌಕರರು (Bus Service) ಬೀದಿಗಿಳಿಯಲಿದ್ದಾರೆ. ಸರ್ಕಾರದ ಧೋರಣೆ ಖಂಡಿಸಿ ಜ.24ರಂದು ಫ್ರೀಡಂ ಪಾರ್ಕ್‌ನಲ್ಲಿ ಧರಣಿ ಸತ್ಯಾಗ್ರಹಕ್ಕೆ ಮುಂದಾಗುತ್ತಿದ್ದಾರೆ. ಸಾವಿರಾರು ನೌಕರರು ಧರಣಿಯಲ್ಲಿ ಭಾಗಿಯಾಗುತ್ತಿರುವ ಹಿನ್ನೆಲೆ ರಾಜ್ಯಾದ್ಯಂತ ಬಸ್ ಸಂಚಾರದಲ್ಲಿ ವ್ಯತ್ಯಯ ಆಗುವ ಸಾಧ್ಯತೆ ಇದೆ ಎಂದು ಅಂದಾಜಿಸಲಾಗಿತ್ತು.
ವೇತನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ 2021ರ ಏಪ್ರಿಲ್‌ನಲ್ಲಿ 15 ದಿನಗಳ ಕಾಲ ನೌಕರರು ಮುಷ್ಕರ ನಡೆಸಿದ್ದರು. ಈಗ ಮತ್ತೆ ರಾಜ್ಯ ಸಾರಿಗೆ ನೌಕರರ ಮುಖಂಡ ಅನಂತ ಸುಬ್ಬರಾವ್ ನೇತೃತ್ವದಲ್ಲಿ ಮಂಗಳವಾರ ಧರಣಿ ಸತ್ಯಾಗ್ರಹ ನಡೆಸಲು ನಿರ್ಧಾರ ಮಾಡಲಾಗಿದೆ.
ಇದನ್ನೂ ಓದಿ: Spotify : ಸ್ವಿಡನ್ ಮೂಲದ ಸ್ಪೋಟಿಫೈನಿಂದ ಈ ವಾರ ಉದ್ಯೋಗ ಕಡಿತ
ಪ್ರತಿ ನಾಲ್ಕು ವರ್ಷಕ್ಕೊಮ್ಮೆ ವೇತನ ಪರಿಷ್ಕರಣೆ ಮಾಡುತ್ತಿದ್ದ ನಿಗಮಗಳು ಆರು ವರ್ಷ ಕಳೆದರೂ ವೇತನ ಪರಿಷ್ಕರಣೆ ಬಗ್ಗೆ ಪ್ರಸ್ತಾಪ ಮಾಡಿಲ್ಲ. ನಿಯಮಬದ್ಧವಾಗಿ 2020 ಮಾರ್ಚ್‌ನಲ್ಲಿ ವೇತನ ಪರಿಷ್ಕರಣೆ ಆಗಬೇಕಿತ್ತು. 2016ರಲ್ಲಿ ಶೇ. 12.5ರಷ್ಟು ವೇತನ ಪರಿಷ್ಕರಣೆ ಆಗಿತ್ತು. ಬಳಿಕ ಕೋವಿಡ್ ನೆಪವೊಡ್ಡಿ ವೇತನ ಪರಿಷ್ಕರಣೆಯನ್ನು ಮುಂದೂಡಲಾಗಿತ್ತು. ವೇತನ ಹೆಚ್ಚಳಕ್ಕೆ ಆಗ್ರಹಿಸಿ ಹೋರಾಟ ನಡೆಸಿ ಒಂದೂವರೆ ವರ್ಷ ಕಳೆದರೂ ಸರ್ಕಾರ ಬೇಡಿಕೆ ಈಡೇರಿಸಲು ಮನಸ್ಸು ಮಾಡಿಲ್ಲ. ಹೀಗಾಗಿ ಸತ್ಯಾಗ್ರಹಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದೆ ಸಾರಿಗೆ ನೌಕರರ ಸಂಘಟನೆಯವರು ಆರೋಪಿಸಿದ್ದಾರೆ.
ಹೆಚ್ಚಿನ ರಾಜಕೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ