ತುಮಕೂರು: ತುಮಕೂರಿನ ಹಿರೇಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಇನ್ನೋವಾ ಕಾರು ಹಾಗೂ ಖಾಸಗಿ ಬಸ್ ನಡುವೆ ಭೀಕರ ರಸ್ತೆ ಅಪಘಾತ (Road Accident) ಸಂಭವಿಸಿದ್ದು, ಒಂದು ಮಗು ಸೇರಿ ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ತುಮಕೂರು ಕಡೆಯಿಂದ ಬೆಂಗಳೂರು ಕಡೆಗೆ ಹೋಗುತ್ತಿದ್ದ ಇನ್ನೋವಾ ಕಾರಿಗೆ ಬೆಂಗಳೂರು ಕಡೆಯಿಂದ ಶಿರಾ ಕಡೆಗೆ ಬರುತ್ತಿದ್ದ ಖಾಸಗಿ ಬಸ್ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಬಸ್ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಗೋವಿಂದ ನಾಯಕ (58), ತಿಪ್ಪಮ್ಮ, (52) ಮೃತ ದಂಪತಿ. ಇನ್ನಿಬ್ಬರ ವಿಳಾಸ ಪತ್ತೆಯಾಗಿಲ್ಲ. ಮೃತ ಗೋವಿಂದ ನಾಯಕ ಅವರು ಮೂಲತಃ ಚಳ್ಳಕೆರೆ ತಾಲೂಕಿನ ನಿವಾಸಿಗಳಾಗಿದ್ದಾರೆ. ಬೆಂಗಳೂರಿನ ವಿಜಯನಗರದಲ್ಲಿ ಪತ್ನಿ ಜತೆ ವಾಸವಿದ್ದರು. ಬೆಂಗಳೂರಿನಿಂದ ಚಳ್ಳಕೆರೆಗೆ ಇನ್ನೋವಾ ಕಾರಿನಲ್ಲಿ ತೆರಳುತ್ತಿದ್ದಾಗ ಘಟನೆ ಸಂಭವಿಸಿದೆ.
ಬಸ್ ರಸ್ತೆ ಡಿವೈಡರ್ ತಾಗಿ ಎಗರಿ ಇನ್ನೋವಾ ಕಾರಿಗೆ ಡಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ. ಇನ್ನೋವಾ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಮೃತದೇಹಗಳನ್ನು ತುಮಕೂರು ಜಿಲ್ಲಾಸ್ಪತ್ರೆ ಶವಾಗಾರಕ್ಕೆ ರವಾನೆ ಮಾಡಲಾಗಿದೆ. ಸ್ಥಳಕ್ಕೆ ಕ್ಯಾತಸಂದ್ರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಅಗತ್ಯ ಕ್ರಮ ಕೈಗೊಂಡಿದ್ದಾರೆ.
ಸ್ವಿಫ್ಟ್ ಕಾರು ಮತ್ತು ಕೆಎಸ್ಸಾರ್ಟಿಸಿ ಬಸ್ ನಡುವೆ ಭೀಕರ ಅಪಘಾತ; ಕಾರಿನಲ್ಲಿದ್ದ ಆರು ಮಂದಿ ಮೃತ್ಯು
ಮಡಿಕೇರಿ: ಮಡಿಕೇರಿ-ಮಂಗಳೂರು ಹೆದ್ದಾರಿಯ ಸಂಪಾಜೆ ಪೆಟ್ರೋಲ್ ಪಂಪ್ ಬಳಿ ಶುಕ್ರವಾರ ಮಧ್ಯಾಹ್ನ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಆರು ಮಂದಿ ಮೃತಪಟ್ಟಿದ್ದಾರೆ. ಇನ್ನಿಬ್ಬರ ಸ್ಥಿತಿ ಗಂಭೀರವಾಗಿದೆ. ಸ್ವಿಫ್ಟ್ ಕಾರು ಮತ್ತು ಕೆಎಸ್ಸಾರ್ಟಿಸಿ ಬಸ್ ನಡುವೆ ಈ ಭೀಕರ ಅಪಘಾತ ಸಂಭವಿಸಿದ್ದು, ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟರೆ, ಉಳಿದ ಮೂವರು ಆಸ್ಪತ್ರೆಗೆ ಸಾಗಿಸುವ ದಾರಿಯಲ್ಲಿ ಮೃತಪಟ್ಟಿದ್ದಾರೆ.
ಕಾರು ಮಡಿಕೇರಿ ಕಡೆಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದರೆ ಬಸ್ಸು ಮಂಗಳೂರಿನಿಂದ ಮಡಿಕೇರಿ ಕಡೆಗೆ ಹೋಗುತ್ತಿತ್ತು. ಕಾರಿನಲ್ಲಿ ಎಂಟು ಮಂದಿ ಪ್ರಯಾಣಿಸುತ್ತಿದ್ದರು.
ಕಾರಿನಲ್ಲಿದ್ದವರೆಲ್ಲ ಮೂಲತಃ ಮಂಡ್ಯ ಜಿಲ್ಲೆಯವರು. ಅವರು ಎಲ್ಲಿಗೆ ಹೋಗುತ್ತಿದ್ದರು ಎಂಬ ಬಗ್ಗೆ ಸ್ಪಷ್ಟ ಮಾಹಿತಿ ಇಲ್ಲ. ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆಗೆ ದ.ಕನ್ನಡ ಜಿಲ್ಲೆಯ ಸುಳ್ಯ ಕೆವಿಜಿ ಆಸ್ಪತ್ರೆಗೆ ಸಾಗಿಸಲಾಗಿದೆ.