ಬೆಂಗಳೂರು: ಕಾವೇರಿ ಜಲ ವಿವಾದಕ್ಕೆ (Cauvery water dispute) ಸಂಬಂಧಪಟ್ಟಂತೆ ಕಾವೇರಿ ನೀರು ನಿರ್ವಹಣೆ ಪ್ರಾಧಿಕಾರವು (Cauvery Water Management Authority – CWMA) ಆದೇಶದ ವಿರುದ್ಧ ಪುನಃ ಪ್ರಾಧಿಕಾರ ಹಾಗೂ ಸುಪ್ರೀಂ ಕೋರ್ಟ್ (Supreme Court) ಮುಂದೆ ರಿವಿಶನ್ ಪಿಟಿಷನ್ (Revision Petition) ಹಾಕಲು ಕಾನೂನು ತಜ್ಞರು ಸಲಹೆ ನೀಡಿದ್ದಾರೆ. ಹೀಗಾಗಿ ನಾಳೆಯೇ (ಶನಿವಾರ) ಸುಪ್ರೀಂ ಕೋರ್ಟ್ ಮತ್ತು ಪ್ರಾಧಿಕಾರದ ಮುಂದೆ ರಿವಿಶನ್ ಪಿಟಿಷನ್ ಸಲ್ಲಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ತಿಳಿಸಿದ್ದಾರೆ.
ತಮಿಳುನಾಡಿಗೆ 3000 ಕ್ಯೂಸೆಕ್ ನೀರು (Cauvery water to Tamil Nadu) ಬಿಡುಗಡೆ ಮಾಡಲು ಕಾವೇರಿ ನೀರು ನಿರ್ವಹಣೆ ಪ್ರಾಧಿಕಾರವು (CWMA) ಆದೇಶಿಸಿರುವ ಹಿನ್ನೆಲೆಯಲ್ಲಿ ಎದುರಾಗಿರುವ ಸಂಕಷ್ಟದ ಪರಿಸ್ಥಿತಿಯನ್ನು ಸಮರ್ಥವಾಗಿ ನಿರ್ವಹಿಸುವ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಹಾಗೂ ಜಲ ಸಂಪನ್ಮೂಲ ಸಚಿವರಾದ ಡಿ.ಕೆ. ಶಿವಕುಮಾರ್ (DMC DK Shivakumar) ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿಗಳು ಹಾಗೂ ಮಾಜಿ ಅಡ್ವೊಕೇಟ್ ಜನರಲ್‌ಗಳ ಜತೆ ಸುದೀರ್ಘ ಚರ್ಚೆ ನಡೆಸಿದರು. ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಿಎಂ ಈ ವಿಚಾರವನ್ನು ಸ್ಪಷ್ಟಪಡಿಸಿದರು.
ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿಗಳ ಜತೆ ಮಾತುಕತೆ ನಡೆಸಲಾಗಿದೆ. ನಮ್ಮ ಆಹ್ವಾನದ ಮೇರೆಗೆ ಅವರು ಸಭೆಯಲ್ಲಿ ಭಾಗವಹಿಸಿದ್ದರು. ನಮಗೆ ಉಪಯುಕ್ತ ಸಲಹೆಗಳನ್ನು ನೀಡಿದ್ದಾರೆ. ಇತಿಹಾಸ ಪುಟಕ್ಕೆ ಹೋಗುವ ಸಲಹೆಗಳನ್ನು ನೀಡಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.
ಹಲವು ಹಿರಿಯ ನ್ಯಾಯಮೂರ್ತಿಗಳು, ನ್ಯಾಯವಾದಿಗಳು ಸಭೆಯಲ್ಲಿ ಸಾಕಷ್ಟು ಚರ್ಚೆ ಮಾಡಿದ್ದಾರೆ. ಅಲ್ಲದೆ, ಒಂದು ಅಡ್ವೈಸರಿ ಕಮಿಟಿ ಮಾಡಿ ಎಂದು ಸಲಹೆ ನೀಡಿದ್ದಾರೆ. ಮಹದಾಯಿ, ಕಾವೇರಿ ಸೇರಿದಂತೆ ಜನರ ಸಮಸ್ಯೆಗಳನ್ನು ಅಡ್ವೈಸ್ ಮಾಡಲು ಸಮಿತಿ ರಚಿಸುವಂತೆ ಸಲಹೆ ನೀಡಿದ್ದಾರೆ. ಅಂತಾರಾಜ್ಯ ಜಲ ವಿವಾದಗಳ ಬಗ್ಗೆ ಸರ್ಕಾರಕ್ಕೆ ಸಲಹೆ ಸೂಚನೆ ಕೊಡಲು ಈ ಸಮಿತಿ ಕಾರ್ಯನಿರ್ವಹಣೆ ಮಾಡುತ್ತದೆ. ಈ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಈಗ 3000 ಸಾವಿರ ಕ್ಯೂಸೆಕ್ ನೀರು ಬಿಡಿ ಎಂದು ಪ್ರಾಧಿಕಾರ ಆದೇಶ ಮಾಡಿದೆ. ಎರಡು ಕಮಿಟಿಗಳ ಮುಂದೆ ನೀರಿಲ್ಲ ಎಂದು ವಾದ ಮಾಡಿದ್ದೆವು. ಹಳೆಯ ಆದೇಶವನ್ನು ಪಾಲನೆ ಮಾಡಿ ಎಂದು ಆದೇಶ ಮಾಡಿದೆ. ಹೀಗಾಗಿ ಕಾನೂನು ತಜ್ಞರು ರಿವಿಶನ್ ಪಿಟಿಷನ್ ಹಾಕಲು ಸಲಹೆ ನೀಡಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.
ಮೇಕೆದಾಟು ಯೋಜನೆ ಅಗತ್ಯದ ಬಗ್ಗೆ ಸುಪ್ರೀಂನಲ್ಲಿ ವಾದ
ಇದರ ಜತೆಗೆ ಮೇಕೆದಾಟು ಯೋಜನೆ ಬಗ್ಗೆ ಪ್ರಸ್ತಾಪ ಮಾಡಿ ಎಂದು ಕಾನೂನು ತಜ್ಞರು ಸಲಹೆ ನೀಡಿದ್ದಾರೆ. ಸುಪ್ರೀಂ ಕೋರ್ಟ್‌ಗೆ ಇದರ ಅಗತ್ಯತೆ ಬಗ್ಗೆ ಮನವರಿಕೆ ಮಾಡಿಕೊಡುವ ಕೆಲಸ ಮಾಡಿ ಎಂದು ಸಲಹೆ ನೀಡಿದ್ದಾರೆ. ಮೇಕೆದಾಟು ಯೋಜನೆಯಿಂದ ತಮಿಳುನಾಡಿಗೆ ಸಮಸ್ಯೆ ಆಗುವುದಿಲ್ಲ. ರಾಜಕೀಯ ಕಾರಣಕ್ಕೆ ವಿರೋಧ ಮಾಡುತ್ತಿದ್ದಾರೆ. ಇದೊಂದು ಆದರೆ, ಕರ್ನಾಟಕದ ಜಲ ಸಮಸ್ಯೆಯೂ ಬಗೆಹರಿಯುತ್ತದೆ ಎಂಬ ವಿಚಾರವನ್ನು ಸುಪ್ರೀಂ ಕೋರ್ಟ್‌ಗೆ ಮನದಟ್ಟಾಗುವಂತೆ ವಾದ ಮಂಡಿಸಲು ಸಲಹೆ ನೀಡಿದ್ದಾರೆಂಬುದಾಗಿ ಸಿಎಂ ಸಿದ್ದರಾಮಯ್ಯ ತಿಳಿಸಿದರು.
ಕಳೆದ ಬಾರಿ 650 ಟಿಎಂಸಿ ನೀರು ತಮಿಳು ನಾಡಿಗೆ ಹೋಗಿದೆ. ಅವರು ಪರ್ಯಾಯ ಜಲಾಶಯ ಇಲ್ಲವೇ ಅಣೆಕಟ್ಟನ್ನು ಇಟ್ಟುಕೊಳ್ಳಬಹುದು. ಮಳೆ ಬಾರದ ವರ್ಷದಲ್ಲಿ ಅದನ್ನು ಅವರು ಉಪಯೋಗಿಸಿಕೊಳ್ಳಬಹುದು ಎಂಬ ಸಲಹೆಯನ್ನೂ ಕಾನೂನು ತಜ್ಞರು ನೀಡಿದ್ದಾರೆ. ಆ ನಿಟ್ಟಿನಲ್ಲಿಯೂ ಸುಪ್ರೀಂ ಕೋರ್ಟ್‌ನಲ್ಲಿ ವಾದ ಮಂಡಿಸಲಾಗುವುದು ಎಂದು ಸಿದ್ದರಾಮಯ್ಯ ಹೇಳಿದರು.
ಇದನ್ನೂ ಓದಿ: SC Reservation : ಸರ್ಕಾರಕ್ಕೆ ಮತ್ತೊಂದು ಮೀಸಲಾತಿ ಸಂಕಟ; ನಮ್ಮನ್ನೂ ಎಸ್‌ಸಿಗೆ ಸೇರಿಸಿ ಎಂದ ಕಟಿಕರು!
ಬಂದ್‌ಗೆ ಸಹಕಾರ ಕೊಟ್ಟ ಸಾರ್ವಜನಿಕರಿಗೆ ಅಭಿನಂದನೆ
ಇಂದು ಶಾಂತಿಯುತವಾಗಿ ಬಂದ್ ಆಗಿದೆ. ಶಾಂತಿಯುತ ಬಂದ್‌ಗೆ ಸಹಕಾರ ಕೊಟ್ಟ ಸಾರ್ವಜನಿಕರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಸಂಘ ಸಂಸ್ಥೆಗಳಿಗೂ ಧನ್ಯವಾದಗಳನ್ನು ಹೇಳಬಯಸುತ್ತೇನೆ. ಅದರಂತೆ ಅಧಿಕಾರಿ ವರ್ಗಕ್ಕೂ ನನ್ನ ಧನ್ಯವಾದಗಳನ್ನು ಸಲ್ಲಿಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.