ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶತಮಾನೋತ್ಸವ (Centenary celebrations) ಕಾರ್ಯಕ್ರಮ 2023ರ ಜ.29ರಂದು ವಿವಿಧ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ ಎಂದು ಶತಮಾನೋತ್ಸವ ಸಮಿತಿಯ ಅಧ್ಯಕ್ಷ ನರಸಿಂಹ ಕೋಣೆಮನೆ ಹೇಳಿದರು.
ಶಾಲೆಯ ಆವರಣದಲ್ಲಿ ನಡೆದ ಶತಮಾನೋತ್ಸವ ಪೂರ್ವಭಾವಿ ಸಭೆಯಲ್ಲಿ ಅವರು ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿ ಮಾತನಾಡಿ, ಬೆಳಗ್ಗೆ 10ಕ್ಕೆ ಸನ್ಮಾನ ಹಾಗೂ ಬಹುಮಾನ ವಿತರಣೆ ಕಾರ್ಯಕ್ರಮವನ್ನು ಟಿಎಂಎಸ್ ಅಧ್ಯಕ್ಷ ಎನ್.ಕೆ. ಭಟ್ಟ ಉದ್ಘಾಟಿಸಲಿದ್ದಾರೆ. ಜನಪ್ರತಿನಿಧಿಗಳು, ಮುಖಂಡರು, ಅಧಿಕಾರಿಗಳು ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು.
ಇದನ್ನೂ ಓದಿ | Amit Shah | ಗೃಹಸಚಿವರಿಗೆ ತಲೆಬಾಗಿ ನಮಿಸುವೆ ಎಂದ ಎಚ್.ಡಿ. ದೇವೇಗೌಡ; ಅಮಿತ್ ಶಾಗೆ ಹೊಗಳಿಕೆಯ ಸುರಿಮಳೆ
ಸ್ವರ್ಣವಲ್ಲಿಯ ಶ್ರೀ ಗಂಗಾಧರೇಂದ್ರ ಸರಸ್ವತೀ ಸ್ವಾಮೀಜಿ ಸಂಜೆ 4 ಗಂಟೆಗೆ ನಡೆಯಲಿರುವ ಕಾರ್ಯಕ್ರಮದ ಸಾನ್ನಿಧ್ಯ ವಹಿಸಲಿದ್ದು, ಶತಮಾನೋತ್ಸವವನ್ನು ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ಉದ್ಘಾಟಿಸುವರು. ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಜಿಲ್ಲಾ ಉಸ್ತುವಾರಿ ಸಚಿವ ಶ್ರೀನಿವಾಸ ಪೂಜಾರಿ, ಶಿಕ್ಷಣ ಸಚಿವ ಬಿ.ಸಿ.ನಾಗೇಶ ಇತರ ಗಣ್ಯರು ಭಾಗವಹಿಸಲಿದ್ದಾರೆ. ವಿಸ್ತಾರ ನ್ಯೂಸ್ ಸಿಇಒ, ಪ್ರಧಾನ ಸಂಪಾದಕ ಹರಿಪ್ರಕಾಶ ಕೋಣೆಮನೆ ಆಶಯ ನುಡಿಯನ್ನಾಡಲಿದ್ದಾರೆ. ನಂತರ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ, ಯಕ್ಷಗಾನ ಪ್ರದರ್ಶನ ನಡೆಯಲಿದೆ ಎಂದು ತಿಳಿಸಿದರು.
ಎಸ್.ಡಿ.ಎಂ.ಸಿ ಅಧ್ಯಕ್ಷ ವಿನಾಯಕ ಭಟ್ಟ, ಮಾಜಿ ಅಧ್ಯಕ್ಷ ಎಂ.ಎನ್.ಭಟ್ಟ, ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ಶಂಕರ ಭಟ್ಟ ಕಲಗಂಡ, ನಾಗೇಂದ್ರ ಭಟ್ಟ, ವಿದ್ಯಾರ್ಥಿ ಪ್ರತಿನಿಧಿ ಸಿಂಚನಾ ಗೌಡ, ಮುಖ್ಯೋಧ್ಯಾಪಕ ಭಾಸ್ಕರ ನಾಯ್ಕ ಇತರರಿದ್ದರು.
ಇದನ್ನೂ ಓದಿ | Love Jihad | ಲವ್ ಜಿಹಾದ್ ತಡೆಗೆ ವಿಹಿಂಪದಿಂದ ಹೆಲ್ಪ್‌ಲೈನ್ ಆರಂಭ; ಮಾಹಿತಿ ಸಿಕ್ಕರೆ ಕರೆ ಮಾಡಿ ತಿಳಿಸಲು ಮನವಿ